ಮೈಸೂರು: ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನಲ್ಲಿ ಬೆಳಗಿನ ಜಾವ 3.30ರ ಸುಮಾರಿಗೆ ಬಸ್ ಮತ್ತು ಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ 4 ಮಂದಿ ದಾರುಣವಾಗಿ ಮೃತಪಟ್ಡಿದ್ದಾರೆ.
ಈ ಭೀಕರ ಅಪಘಾತದಲ್ಲಿ ಇಪ್ಪತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಪಿರಿಯಾಪಟ್ಟಣದ ಕಿರನಳ್ಳಿ ಗೇಟ್ ಬಳಿ ಖಾಸಗಿ ಸ್ಲೀಪರ್ ಕೋಚ್ ಬಸ್ ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿದೆ.
ಪಿರಿಯಾಪಟ್ಟಣದಿಂದ ಮೈಸೂರು ಮಾರ್ಗವಾಗಿ ಸಾಗುತ್ತಿದ್ದ ಲಾರಿ ಮತ್ತು ಮೈಸೂರಿನಿಂದ ಕೇರಳ ಕಡೆಗೆ ತೆರಳುತ್ತಿದ್ದ ಸ್ಲೀಪರ್ ಕೋಚ್ ಬಸ್ ನಡುವೆ ಇಂದು ಮುಂಜಾನೆ 3.30ರ ಸುಮಾರಿಗೆ ಅಪಘಾತ ಸಂಭವಿಸಿದೆ.
ಡಿಕ್ಕಿಯ ರಭಸಕ್ಕೆ ಬಸ್ ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, 4 ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಗಾಯಗೊಂಡವರನ್ನು ತಕ್ಷಣ ಪಿರಿಯಾಪಟ್ಟಣ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತದೇಹಗಳನ್ನು ಪಿರಿಯಾಪಟ್ಟಣ ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದ್ದು, ಸ್ಥಳಕ್ಕೆ ಪಿರಿಯಾಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ,ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
