ಮೈಸೂರು: ಬಿಜೆಪಿ ಅಧಿಕಾರದಲ್ಲಿದ್ದಾಗ ಯಾವ ಪ್ರಕರಣವನ್ನೂ ಸಿಬಿಐ ತನಿಖೆಗೆ ಒಪ್ಪಿಸಿರಲಿಲ್ಲ,ನಮ್ಮನ್ನು ಪ್ರಶ್ನಿಸಲು ಅವರಿಗೆ ನೈತಿಕತೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದರು.
ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ,ಮುಖ್ಯ ಮಂತ್ರಿಗಳು,ಬಿಜೆಪಿ ಅಧಿಕಾರದಲ್ಲಿದ್ದಾಗ ಯಾವುದಾದರೂ ಒಂದು ಪ್ರಕರಣವನ್ನ ಸಿಬಿಐ ಗೆ ಕೊಟ್ಟಿದ್ದರೆ ನಮ್ಮನ್ನು ಕೇಳಬಹುದಿತ್ತು,ನಮ್ಮ ಸರ್ಕಾರ ಸುಮಾರು ಏಳೆಂಟು ಪ್ರಕರಣಗಳನ್ನು ಸಿಬಿಐಗೆ ವಹಿಸಿದ್ದೆವು ಎಂದು ಹೇಳಿದರು.
ಬಳ್ಳಾರಿ ಪ್ರಕರಣದ ಬಗ್ಗೆ ಬಿಜೆಪಿ ಜನಾಂದೋಲನ ಮಾಡುತ್ತಿದ್ದಾರಲ್ಲ ಎಂಬ ಪ್ರಶ್ನೆಗೆ, ವಿರೋಧಪಕ್ಷದಲ್ಲಿರುವಾಗ ಯಾವ ಆಂದೋಲನ, ಪ್ರತಿಭಟನೆಗಳನ್ನು ಮಾಡುತ್ತಾರೆ ಎನ್ನುವುದು ಅವರ ಪಕ್ಷಕ್ಕೆ ಬಿಟ್ಟ ವಿಚಾರ ಅದಕ್ಕೆ ನಮಗೆ ಉತ್ತರ ಕೊಡಲು ಗೊತ್ತಿದೆ ಎಂದು ಸಿಎಂ ಉತ್ತರಿಸಿದರು.
ಶ್ರೀರಾಮುಲು, ಜನಾರ್ಧನ ರೆಡ್ಡಿ ಯವರು ಕಾಂಗ್ರೆಸ್ ನಾಯಕರನ್ನು ಏಕವಚನದಲ್ಲಿ ವಾಗ್ದಾಳಿ ಮಾಡಿದ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದು, ಬಿಜೆಪಿಯವರಿಗೆ ಸಂಸ್ಕೃತಿ ಇಲ್ಲ ಎಂಬುದು ಇದರಿಂದ ಸ್ಪಷ್ಟವಾಗಿ ಗೊತ್ತಾಗುತ್ತದೆ ಎಂದು ಕಾರವಾಗಿ ನುಡಿದರು.
ಜನಾರ್ಧನ ರೆಡ್ಡಿಗೆ ಬಳ್ಳಾರಿಗೆ ಬರಬಾರದೆಂದು ಏಕೆ ಹೇಳಿದ್ದರು,ರಿಪಬ್ಲಿಕ್ ಆಫ್ ಬಳ್ಳಾರಿ ಎಂದು ವರ್ತಿಸಿದವರು ಯಾರು ಲೋಕಾಯುಕ್ತರಾಗಿದ್ದಾಗ ನ್ಯಾಯಮೂರ್ತಿ ಸಂತೋಷ್ ಹೆಗಡೆ ಅವರು ವರದಿ ಕೊಟ್ಟಿದ್ದಾರೆ ಎಂದು ಟಾಂಗ್ ನೀಡಿದರು.
ಕಾಂಗ್ರೆಸ್ ರಿಪಬ್ಲಿಕ್ ಆಫ್ ಕರ್ನಾಟಕ ಮಾಡಿಕೊಂಡಿದ್ದಾರೆ ಎಂದು ಬಿಜೆಪಿಗರ ಆರೋಪಕ್ಕೆ,ಕಾಂಗ್ರೆಸ್ ಪ್ರಜಾಪ್ರಭುತ್ವ, ಸಂವಿಧಾನ ಮತ್ತು ಅದರ ಆಶಯಗಳಲ್ಲಿ ನಂಬಿಕೆ ಇಟ್ಟಿರುವ ಪಕ್ಷ. ಜನಾಂದೋಲನದ ಹಿಂದೆ ರಾಜಕೀಯ ಉದ್ದೇಶ ಬಿಟ್ಟರೆ ಬೇರೇನಿದೆ ಎಂದು ಸಿದ್ದು ಪ್ರಶ್ನಿಸಿದರು.
