ಬೆಂಗಳೂರು: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯ ರಾಜ್ಯಾದ್ಯಂತ ಆರಂಭವಾಗಿದ್ದು, ಆರಂಭದಲ್ಲಿ ಕೆಲವು ತಾಂತ್ರಿಕ ತೊಂದರೆಗಳ ಕಾರಣ ಸಮೀಕ್ಷೆ ನಿಧಾನವಾಗಿತ್ತು. ಈಗ ಎಲ್ಲಾ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ -2025ರ ಪ್ರಗತಿ ಕುರಿತ ವೀಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಅಧಿಕಾರಿಗಳಿಗೆ ಸಿಎಂ ಹಲವು ಸಲಹೆ ಸೂಚನೆಗಳನ್ನು ನೀಡಿದರು.
ಸಮೀಕ್ಷೆ ಕಾರ್ಯವನ್ನು ಚುರುಕುಗೊಳಿಸಲು ಎಲ್ಲಾ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು ಸೂಚಿಸಿದರು.
ಸಮೀಕ್ಷೆ ಕಾರ್ಯಕ್ಕೆ ಮುಂದೆಯೂ ಯಾವುದೇ ತಾಂತ್ರಿಕ ತೊಂದರೆಗಳು ಉಂಟಾಗದಂತೆ ಎಚ್ಚರಿಕೆ ವಹಿಸಬೇಕು. ತಾಂತ್ರಿಕ ತೊಂದರೆಗಳು ಎದುರಾದರೆ ತಕ್ಷಣ ಅದನ್ನು ಬಗೆಹರಿಸಲು ಕ್ರಮ ಕೈಗೊಳ್ಳಬೇಕು,ಇದನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ತಿಳಿಸಿದರು
ರಾಜ್ಯದಲ್ಲಿ ಒಟ್ಟು 1,43,81,702 ಕುಟುಂಬಗಳ ಸಮೀಕ್ಷೆ ಕಾರ್ಯವನ್ನು ನಡೆಸಬೇಕಾಗಿದ್ದು, ಇದುವರೆಗೆ 2,76,016 ಕುಟುಂಬಗಳ ಸಮೀಕ್ಷೆ ಕಾರ್ಯ ಪೂರ್ಣಗೊಳಿಸಲಾಗಿದೆ.
ಸಮೀಕ್ಷೆ ಕಾರ್ಯಕ್ಕೆ ಒಟ್ಟು 1,20,728 ಗಣತಿದಾರರನ್ನು ನಿಯೋಜಿಸಲಾಗಿದೆ. ಒಟ್ಟು 1,22,085 ಗಣತಿ ಬ್ಲಾಕ್‌ಗಳನ್ನು ಗುರುತಿಸಲಾಗಿದೆ. ಅಕ್ಟೋಬರ್ 7ರ ಒಳಗಾಗಿ ಗಣತಿ ಕಾರ್ಯ ಪೂರ್ಣಗೊಳ್ಳಬೇಕು ಎಂದು ಸಿಎಂ ಹೇಳಿದರು.
ಸಮೀಕ್ಷೆ ಕಾರ್ಯಕ್ಕೆ ನಿಯೋಜಿಸಿರುವ ಎಲ್ಲಾ ಶಿಕ್ಷಕರು ತಮಗೆ ವಹಿಸಲಾಗಿರುವ ಕಾರ್ಯವನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು. ಯಾವುದೇ ಶಿಕ್ಷಕರು ಗಣತಿ ಕಾರ್ಯಕ್ಕೆ ಅಸಹಕಾರ ತೋರಿಸಬಾರದು,ನಿರ್ಲಕ್ಷ್ಯ ತೋರಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯ ಮಂತ್ರಿಗಳು ಎಚ್ಚರಿಸಿದರು.
ಶಿಕ್ಷಕರಿಗೆ ಗೌರವಧನದ ಬಗ್ಗೆ ಯಾವುದೇ ಅನುಮಾನ ಬೇಡ. ಈಗಾಗಲೇ ಗೌರವಧನವನ್ನು ಬಿಡುಗಡೆ ಮಾಡಿದ್ದೇವೆ. ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರು ಗಣತಿ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಸಲಹೆ ನೀಡಿದರು.
ಇದು ಕೇವಲ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಮೀಕ್ಷೆಯಲ್ಲ. ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ನಿಗದಿತ ಗುರಿಯ ಪ್ರಗತಿ ಬಗ್ಗೆ ಪ್ರತಿ ದಿನ ಪರಿಶೀಲನೆ ನಡೆಸಬೇಕು. ಕಂದಾಯ ಇಲಾಖೆ, ಪಂಚಾಯತ್ ರಾಜ್ ಇಲಾಖೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದು ಸಿಎಂ ಆದೇಶಿಸಿದರು.
ಕೆಲವು ಜಿಲ್ಲೆಗಳಲ್ಲಿ ಸಮೀಕ್ಷೆ ನಿಧಾನಗತಿಯಲ್ಲಿದ್ದು, ಚುರುಕುಗೊಳಿಸಬೇಕು. ಅಗತ್ಯವಿರುವ ಕಡೆ ಅನುದಾನಿತ ಶಾಲೆಗಳ ಶಿಕ್ಷಕರ ಸೇವೆಯನ್ನು ಪಡೆದುಕೊಳ್ಳಬೇಕು. ಜಿಲ್ಲಾ ಉಸ್ತುವಾರಿ ಸಚಿವರೊಂದಿಗೂ ಈ ಕುರಿತು ಸಂಪರ್ಕದಲ್ಲಿರಬೇಕು ಎಂದು ಹೇಳಿದರು.
ಸಮೀಕ್ಷೆ ಕಾರ್ಯದ ಮೇಲ್ವಿಚಾರಣೆ ನಡೆಸಲು ಪ್ರತಿ ತಾಲೂಕಿಗೆ ಜಿಲ್ಲಾ ಮಟ್ಟದ ಅಧಿಕಾರಿಯನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು.