ಚಾಮರಾಜನಗರ: ಬಾಲಕಾರ್ಮಿಕ ಪದ್ಧತಿ ಸಂಪೂರ್ಣ ನಿರ್ಮೂಲನೆಗಾಗಿ ಮಕ್ಕಳ ಪೋಷಕರು ಹಾಗೂ ಮಕ್ಕಳನ್ನು ದುಡಿಸಿಕೊಳ್ಳುವ ಮಾಲೀಕರಿಗೆ ವ್ಯಾಪಕ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಅಧ್ಯಕ್ಷರೂ ಆದ ಶ್ರೀರೂಪ ಅವರು ತಿಳಿಸಿದರು.
ಚಾಮರಾಜನಗರದ ವರನಟ ಡಾ. ರಾಜ್ ಕುಮಾರ್ ಜಿಲ್ಲಾ ರಂಗಮಂದಿದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಲಾಗಿದ್ದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರತಿಜ್ಞಾವಿಧಿ ಬೋಧಿಸಿ ಅವರು ಮಾತನಾಡಿದರು.
ಮಕ್ಕಳನ್ನು ಬಲವಂತವಾಗಿ ದುಡಿಸಿಕೊಳ್ಳುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು,ಬಾಲಕಾರ್ಮಿಕ ಪದ್ದತಿಯಿಂದ ಮುಕ್ತಗೊಳಿಸಿದ ಮಕ್ಕಳಿಗೆ ಪುನರ್ವಸತಿ ಕಲ್ಪಿಸಬೇಕು, ಶಿಕ್ಷಣ ಮುಂದುವರಿಸಲು ಅವಕಾಶ ಮಾಡಿಕೊಡಬೇಕು,ಈ ಬಗ್ಗೆ ವಿದ್ಯಾರ್ಥಿಗಳಿಗೆ, ಪೋಷಕರಿಗೆ, ಸಾರ್ವಜನಿಕರಿಗೆ ಹೆಚ್ಚಿನ ಜಾಗೃತಿ ಅವಶ್ಯ ಎಂದು ತಿಳಿಸಿದರು.
ಮಕ್ಕಳಿಗೂ ಎಲ್ಲರಂತೆ ಸಮಾನವಾಗಿ ಬದುಕುವ ಹಕ್ಕುಗಳಿವೆ. ಅವುಗಳನ್ನು ಸಂರಕ್ಷಿಸಿ ಉತ್ತಮ ಶಿಕ್ಷಣ ಕೊಡಿಸಲು ತಂದೆತಾಯಿಗಳು ಮುಂದಾಗಬೇಕು. ಪ್ರತಿ ಮಕ್ಕಳ ಶಿಕ್ಷಣಕ್ಕಾಗಿ ಸರ್ಕಾರವು ೨೫ ಸಾವಿರ ವೆಚ್ಚ ಮಾಡುತ್ತಿದೆ. ಅದರ ಸದ್ಭಳಕೆಯಾಗಬೇಕು. ಮಕ್ಕಳಿಗೆ ಶಿಕ್ಷಣದ ಜೊತೆಗೆ ಕಲೆ ಹಾಗೂ ಕ್ರೀಡಾ ಚಟುವಟಿಕೆಗಳಿಗೆ ಉತ್ತೇಜನ ನೀಡಿ ಸಮಾಜದ ಸತ್ಪ್ರಜೆಗಳಾಗಿ ರೂಪಿಸಬೇಕು. ಮಕ್ಕಳ ಸಾಧನೆಗೆ ಪ್ರೋತ್ಸಾಹ ಕೊಡಬೇಕು ಬಾಲಕಾರ್ಮಿಕ ಪದ್ದತಿ ತಡೆಗಟ್ಟಿ ಉತ್ತಮ ಸಮಾಜ ನಿರ್ಮಿಸಲು ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಶ್ರೀರೂಪ ಅವರು ತಿಳಿಸಿದರು.
ಕಾರ್ಯಕ್ರಮ ವನ್ನು ಉದ್ಘಾಟಿಸಿದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಈಶ್ವರ್ ಅವರು ಮಾತನಾಡಿ ಬಾಲಕಾರ್ಮಿಕ ಪದ್ದತಿ ವಿರುದ್ಧ ಅರಿವು ಮೂಡಿಸುವುದೇ ಕಾರ್ಯಕ್ರಮದ ಬಹುಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರು.
ಬಾಲಕಾರ್ಮಿಕ ಪದ್ದತಿ ತಡೆಗೆ ಸರ್ಕಾರ ೧೯೮೬ರಲ್ಲಿ ಕಾನೂನು ಜಾರಿಗೊಳಿಸಿದೆ. ಯಾವುದೇ ಉದ್ದಿಮೆಗಳಲ್ಲಿ ಆರ್ಥಿಕ ಉದ್ದೇಶಕ್ಕಾಗಿ ಬಲವಂತವಾಗಿ ದುಡಿಯುವ ೧ ರಿಂದ ೧೪ ವರ್ಷದೊಳಗಿನ ಮಕ್ಕಳನ್ನು ಬಾಲಕಾರ್ಮಿಕರು ಹಾಗೂ ೧೪ರಿಂದ ೧೮ ವರ್ಷದೊಳಗಿನ ಮಕ್ಕಳನ್ನು ಕಿಶೋರ ಕಾರ್ಮಿಕರೆಂದು ಗುರುತಿಸಲಾಗಿದೆ. ಬಾಲಕಾರ್ಮಿಕ ಪದ್ದತಿ ತಡೆಗೆ ಎಲ್ಲರೂ ಸಹಕರಿಸಬೇಕು ಎಂದು ತಿಳಿಸಿದರು.
ಬಾಲಕಾರ್ಮಿಕ ಪದ್ದತಿ ತೊಡೆದುಹಾಕಲು ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ತಳಮಟ್ಟದ ಅಧಿಕಾರಿಗಳು ಸಕ್ರಿಯರಾಗಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಈಶ್ವರ ಅವರು ಕಿವಿಮಾತು ಹೇಳಿದರು.
ಜಿಲ್ಲಾ ಕಾರ್ಮಿಕ ಅಧಿಕಾರಿ ಟಿ.ಸಿ. ರಾಮಚಂದ್ರಯ್ಯ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಬಾಲ ನ್ಯಾಯ ಮಂಡಳಿ ಸದಸ್ಯರಾದ ಎಂ. ಗಂಗಾಧರಸ್ವಾಮಿ ಅವರು ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ವಿವರಿಸಿದರು.
ಇದೇ ವೇಳೆ ಬಾಲಕಾರ್ಮಿಕ ಪದ್ದತಿಯಿಂದ ಮುಕ್ತಗೊಳಿಸಿದ ಬಾಲಕನಿಗೆ ೩೫ ಸಾವಿರ ರೂ.ಗಳ ಪರಿಹಾರದ ಚೆಕ್ ವಿತರಿಸಲಾಯಿತು.
ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಶಾಲಾಮಕ್ಕಳಿಗೆ ಏರ್ಪಡಿಸಲಾಗಿದ್ದ ಚಿತ್ರಕಲೆ, ಪ್ರಬಂಧ ಸ್ಪರ್ಧೆಗಳ ವಿಜೇತರಿಗೆ ಗಣ್ಯರು ಬಹುಮಾನ ಹಾಗೂ ಪ್ರಮಾಣಪತ್ರ ವಿತರಿಸಿದರು.
ಇಲಾಖೆಯಲ್ಲಿ ಉತ್ತಮ ಸೇವೆಗೈದ ಹಿರಿಯ ಕಾರ್ಮಿಕ ನಿರೀಕ್ಷಕರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಅನ್ನ ಚಲನಚಿತ್ರದ ಬಾಲನಟ ಮಾಸ್ಟರ್ ನಂದನ್ ಚಿತ್ರದ ಡೈಲಾಗ್ ಹೇಳಿ ನೆರೆದಿದ್ದವರನ್ನು ರಂಜಿಸಿದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್. ಶಶಿಧರ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಡಿ.ಸಿ. ಶೃತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ಎಚ್.ಆರ್. ಸುರೇಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್. ಚಿದಂಬರ, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪನಿರ್ದೇಶಕರಾದ ಹೆಚ್.ಎನ್. ಪುಟ್ಟಗೌರಮ್ಮ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಬಿ. ಮಂಜುಳ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ಎಂ. ಲತಾ, ಬಾಲಕಾರ್ಮಿಕ ಸೊಸೈಟಿ ಯೋಜನಾ ನಿರ್ದೇಶಕರಾದ ಎಂ. ಮಹೇಶ್, ಕಾರ್ಮಿಕ ನಿರೀಕ್ಷಕರಾದ ವಿ.ಎಲ್. ಪ್ರಸಾದ್, ನಾರಾಯಣಮೂರ್ತಿ, ಎನ್.ಜಿ.ಒ ನಾರಾಯಣಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.
ವೇದಿಕೆ ಕಾರ್ಯಕ್ರಮಕ್ಕೂ ಮೊದಲು ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಿಂದ ಜಿಲ್ಲಾಡಳಿತ ಭವನದವರೆಗೆ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ಜಾಥಾ ಹಮ್ಮಿಕೊಳ್ಳಲಾಯಿತು.
