(ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ)
ಚಾಮರಾಜನಗರ: ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ನಗರದಲ್ಲಿ ಚಾಮರಾಜನಗರ ದಸರಾ ಉತ್ಸವಕ್ಕೆ ಸಾಂಪ್ರಾದಾಯಿಕ ಚಾಲನೆ ನೀಡಿದರು.
ಚಾಮರಾಜೇಶ್ವರ ದೇವಸ್ಥಾನದಲ್ಲಿಂದು ನಗರದ ಅದಿದೇವತೆಗಳಾದ ಚಾಮರಾಜೇಶ್ವರಸ್ವಾಮಿ, ಚಾಮುಂಡೇಶ್ವರಿ ದೇವಿ ಹಾಗೂ ಕೆಂಪನಂಜಾಂಬ ದೇವಿಗೆ ಸಾಂಪ್ರಾದಾಯಿಕ ವಿಧಿವಿಧಾನಗಳ ಮೂಲಕ ಜಿಲ್ಲಾ ಉಸ್ತುವಾರಿ ಸಚಿವರು ವಿವಿಧ ಪೂಜಾ ಕೈಂಕರ್ಯಗಳನ್ನು ನೆರವೇರಿಸಿ, ಮುಖ್ಯ ವೇದಿಕೆಯಲ್ಲಿ ನಗಾರಿ ಬಾರಿಸುವ ಮೂಲಕ ಮೂರು ದಿನಗಳ ಕಾಲ ನಡೆಯಲಿರುವ ಚಾಮರಾಜನಗರ ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದರು.
ನಂತರ ಸಿ. ಪುಟ್ಟರಂಗಶೆಟ್ಟಿ ಅವರು ಚಾಮರಾಜೇಶ್ವರ ದೇವಸ್ಥಾನದ ಉದ್ಯಾನದಲ್ಲಿರುವ ಕನ್ನಡದ ಅಧಿದೇವತೆ ಭುವನೇಶ್ವರಿ ತಾಯಿ ಪ್ರತಿಮೆಗೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿದರು.
ಇದೇ ವೇಳೆ ಮುಖ್ಯವೇದಿಕೆಯ ಪಕ್ಕದಲ್ಲಿ ದಸರಾ ಅಂಗವಾಗಿ ಆಯೋಜಿಸಲಾಗಿರುವ ಚಿತ್ರಸಂತೆಯಲ್ಲಿ ಉಸ್ತುವಾರಿ ಸಚಿವರು ಚಿತ್ರಬಿಡಿಸಿ ಬಣ್ಣಹಚ್ಚಿ ಕಾರ್ಯಕ್ರಮಕ್ಕೆ ಶುಭ ಕೋರಿದರು.
ನಂತರ ಚಾಮರಾಜೇಶ್ವರ ದೇವಸ್ಥಾನದ ಹಿಂಭಾಗದಲ್ಲಿರುವ ಮೈಸೂರು ಅರಸರು ಜನಿಸಿದ ಐತಿಹಾಸಿಕ ಜನನ ಮಂಟಪಕ್ಕೆ ಆಗಮಿಸಿದ ಸಿ. ಪುಟ್ಟರಂಗಶೆಟ್ಟಿ ಅವರು ಜನನ ಮಂಟಪದಲ್ಲಿ ಶ್ರೀ ಜಯಚಾಮರಾಜೇಂದ್ರ ಒಡೆಯರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು. ಜನನ ಮಂಟಪದ ಮುಂಭಾಗದಲ್ಲಿ ನಂದಿಕಂಬಕ್ಕೆ ಪೂಜೆ ಮಾಡಿದರು.
ಬಳಿಕ ಮಹಿಳಾ ದಸರಾ ಅಂಗವಾಗಿ ಜಿಲ್ಲಾಡಳಿತ ಭವನದ ಪ್ರವೇಶದ್ವಾರದ ಬಳಿ ಒಳಾವರಣದಲ್ಲಿ ಮಹಿಳೆಯರಿಗೆ ಆಯೋಜಿಸಲಾಗಿದ್ದ ರಂಗೋಲಿ ಸ್ಪರ್ಧೆಯನ್ನು ಜಿಲ್ಲಾ ಉಸ್ತುವಾರಿ ಸಚಿವರು ಉದ್ಘಾಟನೆ ಮಾಡಿದರು. ಮಹಿಳೆಯರು ಬಿಡಿಸಿದ್ದ ವಿವಿಧ ಬಣ್ಣಬಣ್ಣದ ಚಿತ್ತಾರಗಳಿಂದ ಕೂಡಿದ ರಂಗೋಲಿಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ರಂಗೋಲಿ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿದರು.
ನಂತರ ವರನಟ ಡಾ. ರಾಜ್ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಏರ್ಪಡಿಸಲಾಗಿರುವ ದಸರಾ ಕವಿಗೋಷ್ಠಿ, ರಂಗಗೀತೆಗಳು, ಸಾಮಾಜಿಕ ಹಾಗೂ ಪೌರಾಣಿಕ ನಾಟಕ ಸೇರಿದಂತೆ ಇತರೆ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು. ಬಳಿಕ ಜಿಲ್ಲಾ ರಂಗಮಂದಿರದ ಹೊರ ಆವರಣದಲ್ಲಿ ಮಹಿಳೆಯರಿಗಾಗಿ ಹಮ್ಮಿಕೊಳ್ಳಲಾಗಿದ್ದ ಮ್ಯೂಸಿಕಲ್ ಚೇರ್ ಸ್ಪರ್ಧೆಯನ್ನು ಜಿಲ್ಲಾ ಉಸ್ತುವಾರಿ ಸಚಿವರು ಉದ್ಘಾಟಿಸಿದರು.
ಬಳಿಕ ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಯುವದಸರಾ ಮಾದರಿಯಲ್ಲಿ ಜಿಲ್ಲೆಯ ವಿವಿಧ ಪ್ರೌಢಶಾಲೆ, ಪದವಿಪೂರ್ವ ಹಾಗೂ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾಗಿರುವ ಯುವಸಂಭ್ರಮ ಕಾರ್ಯಕ್ರಮಕ್ಕೆ ಸಚಿವರು ಚಾಲನೆ ನೀಡಿದರು.
ತದನಂತರ ನಗರದ ಜಿಲ್ಲಾ ಕ್ರೀಡಾಂಗಣದ ಪಕ್ಕದಲ್ಲಿರುವ ಮೀಸಲು ಪೊಲೀಸ್ ಪಡೆಯ ಮೈದಾನದಲ್ಲಿ ಜಿಲ್ಲಾ ಗ್ರಾಮೀಣ ದಸರಾ ಕ್ರೀಡಾಕೂಟದ ಅಂಗವಾಗಿ ಆಯೋಜಿಸಲಾಗಿರುವ ಕ್ರಿಕೆಟ್, ಕಬಡ್ಡಿ, ಖೋ-ಖೋ, ಹಗ್ಗಜಗ್ಗಾಟ, ಸೈಕಲ್ ಪೋಲೋ, ಲೆಮನ್ ಆಂಡ್ ಸ್ಪೂನ್ ಕ್ರೀಡೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರು ಚಾಲನೆ ನೀಡಿದರು. ಸ್ವತಹ ಸಚಿವರು ಸೈಕಲ್ ಮೇಲೆ ಕುಳಿತು ಪೋಲೋವನ್ನು ಯಶಸ್ವಿಯಾಗಿ ಹೊಡೆದರು. ಕ್ರೀಡಾಪಟುಗಳ ತಂಡಗಳನ್ನು ಪರಿಚಯ ಮಾಡಿಕೊಂಡರು. ಕ್ರೀಡೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು.
ಈ ವೇಳೆ ಮಾತನಾಡಿದ ಸಚಿವ ಪುಟ್ಟರಂಗಶೆಟ್ಟಿ ಅವರು ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಮುಂದುವರಿದ ಭಾಗವಾಗಿ ಚಾಮರಾಜನಗರ ಜಿಲ್ಲಾ ದಸರಾ ಉತ್ಸವವನ್ನು ನಗರದಲ್ಲಿ ಆಯೋಜಿಸಲಾಗಿದೆ. ತೀವ್ರ ಬರಪೀಡಿತ ಜಿಲ್ಲೆಯಾಗಿ ಚಾಮರಾಜನಗರ ಘೋಷಣೆಯಾಗಿದ್ದರಿಂದ ದಸರಾ ನಡೆಯುವುದೇ ಅನುಮಾನವಾಗಿತ್ತು. ಈಗ ತರಾತುರಿಯಲ್ಲಿ ಜಿಲ್ಲಾ ದಸರಾ ಆಯೋಜಿಸಲಾಗಿದೆ. ಪ್ರಸ್ತುತ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದೆ. ಇದು ಸಮೃದ್ಧಿಯ ಸಂಕೇತವಾಗಿದ್ದು, ನಾಡಿನೆಲ್ಲೆಡೆ ಮಳೆ-ಬೆಳೆಯಾಗಿ ಜನರಲ್ಲಿ ಸುಖ-ಶಾಂತಿ ನೆಲೆಸಲಿ ಎಂದು ಹಾರೈಸಿದರು.
ಸಚಿವರೊಂದಿಗೆ ಶಾಸಕರಾದ ಎ.ಆರ್. ಕೃಷ್ಣಮೂರ್ತಿ, ಎಚ್.ಎಂ. ಗಣೇಶ್ಪ್ರಸಾದ್, ಕಾಡಾ ಅಧ್ಯಕ್ಷರಾದ ಪಿ. ಮರಿಸ್ವಾಮಿ, ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರಾದ ಎಚ್.ವಿ. ಚಂದ್ರು, ಚುಡಾ ಅಧ್ಯಕ್ಷರಾದ ಮಹಮದ್ ಅಸ್ಗರ್ ಮುನ್ನಾ, ಜಿಲ್ಲಾಧಿಕಾರಿ ಶ್ರೀರೂಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ಮುತ್ತುರಾಜು, ಹೆಚ್ಚುವರಿ ಜಿಲ್ಲಾಧಿಕಾರಿ ವಿ. ಪ್ರಿಯದರ್ಶಿನಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್. ಶಶಿಧರ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ವೇಂಕಟೇಶ್, ನಗರಸಭೆ ಪೌರಾಯುಕ್ತರಾದ ಪರಶುರಾಮ್ ಛಲವಾದಿ, ತಹಶೀಲ್ದಾರ್ ಗಿರಿಜಾ ಮತ್ತಿತರರು ಪಾಲ್ಗೊಂಡಿದ್ದರು.
