ಚಾಮರಾಜನಗರ: ಜಿಲ್ಲಾಧಿಕಾರಿ ಶ್ರೀರೂಪ ಅವರು ಮಲೆಮಹದೇಶ್ವರ ಬೆಟ್ಟದ ವಿವಿಧ ಭಾಗಗಳಿಗೆ ಇಂದು ಭೇಟಿ ನೀಡಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್) ಪ್ರಕ್ರಿಯೆಯನ್ನು ಪರಿಶೀಲಿಸಿದರು.
ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಣನಕೆರೆ, ಮೆಂದಾರೆ, ಇಂಡಿಗನತ್ತ ಗ್ರಾಮಗಳಿಗೆ ತೆರಳಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಸಂಬಂಧ ನಡೆಯುತ್ತಿರುವ ಪ್ರಕ್ರಿಯೆಯನ್ನು ವೀಕ್ಷಿಸಿದರು.
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ತೊಡಗಿರುವ ಬಿಎಲ್ಒ (ಬೂತ್ ಮಟ್ಟದ ಅಧಿಕಾರಿ) ಗಳಿಂದ ಮಾಹಿತಿ ಪಡೆದುಕೊಂಡರು. ಬೂತ್ ಮಟ್ಟದ ಅಧಿಕಾರಿಗಳೊಂದಿಗೆ ಮನೆಗಳಿಗೆ ಭೇಟಿ ನೀಡಿ ಗಣತಿ ನಮೂನೆ (ಎನ್ಯೂಮರೇಷನ್ ಫಾರಂ) ವಿತರಿಸಿದರು.
ಈ ಸಂದರ್ಭದಲ್ಲಿ ಅರ್ಹ ಮತದಾರರು ಮತದಾರರ ಪಟ್ಟಿ ಪರಿಷ್ಕರಣೆಗೆ ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿ ಶ್ರೀರೂಪ ಅವರು ತಿಳಿಸಿದರು.
ಇದೇ ವೇಳೆ ಇಂಡಿಗನತ್ತ ಗ್ರಾಮಸ್ಥರ ಜೊತೆ ಮೂಲ ಸೌಕರ್ಯ ಇನ್ನಿತರ ಸಮಸ್ಯೆ, ಅಹವಾಲುಗಳನ್ನು ಆಲಿಸಿ, ಗ್ರಾಮದ ಜನರೊಂದಿಗೆ ಸಂವಾದ ನಡೆಸಿದರು.
ಪ್ರಾಧಿಕಾರದ ಕಾರ್ಯದರ್ಶಿ ಎ.ಈ ರಘು, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಹೆಚ್.ಎಸ್. ಬಿಂದ್ಯಾ, ತಹಶೀಲ್ದಾರ್ ಚೈತ್ರ, ರಾಜಸ್ವ ನಿರೀಕ್ಷಕರಾದ ಶಿವಕುಮಾರ್, ಪಂಚಾಯತ್ ಅಭಿವೃದ್ದಿ ಅಧಿಕಾರಿ ಕಿರಣ್ ಕುಮಾರ್ ಸೇರಿದಂತೆ ಮತ್ತಿತರರು ಹಾಜರಿದ್ದರು.
