(ವರದಿ: ರಾಮಸಮುದ್ರ ಎಸ್. ವೀರಭದ್ರಸ್ವಾಮಿ)
ಚಾಮರಾಜನಗರ: ಲೋಕಾಯುಕ್ತರು ದಾಳಿ ನಡೆಸಿ ಮೂವರನ್ನ ಜೈಲಿಗಟ್ಟಿದ ಬೆನ್ನಲ್ಲೆ ಜಿಲ್ಲಾಧಿಕಾರಿ ಶ್ರೀರೂಪ ಅವರು ಇಂದು ಮಧ್ಯಾಹ್ನದ ನಂತರ ಚಾಮರಾಜನಗರ ನಗರಸಭೆ ಕಚೇರಿಗೆ ದಿಢೀರ್ ಭೇಟಿ ನೀಡಿ ಕಚೇರಿಯ ಕಾರ್ಯನಿರ್ವಹಣೆ ಹಾಗೂ ಸಾರ್ವಜನಿಕರಿಂದ ಸ್ವೀಕರಿಸಲಾಗಿರುವ ಅರ್ಜಿಗಳ ವಿಲೇವಾರಿ ಪ್ರಗತಿ ಪರಿಶೀಲಿಸಿದರು.
ಪರಿಶೀಲನೆ ವೇಳೆ ಸಾರ್ವಜನಿಕರ ಅರ್ಜಿಗಳ ವಿಲೇವಾರಿ ನಿರೀಕ್ಷಿತ ಮಟ್ಟದಲ್ಲಿ ನಡೆಯದೇ, ಅನಗತ್ಯ ವಿಳಂಬವಾಗುತ್ತಿರುವುದು ಕಂಡುಬಂದ ಹಿನ್ನೆಲೆಯಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಸಾರ್ವಜನಿಕರ ಅರ್ಜಿಗಳು ಮತ್ತು ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು. ಕಾಲಮಿತಿಯೊಳಗೆ ಅರ್ಜಿಗಳನ್ನು ವಿಲೇವಾರಿ ಮಾಡಬೇಕು. ವಿಳಂಬ ಧೋರಣೆ ಸಹಿಸುವುದಿಲ್ಲ ಎಂದು ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಎಚ್ಚರಿಕೆ ನೀಡಿದರು.
ಸಾರ್ವಜನಿಕರಿಗೆ ಸಮಯೋಚಿತ, ಪಾರದರ್ಶಕ ಹಾಗೂ ಗುಣಮಟ್ಟದ ಸೇವೆ ಒದಗಿಸುವುದು ಆಡಳಿತದ ಮೂಲ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಯಾವುದೇ ನಿರ್ಲಕ್ಷ್ಯ ವಹಿಸಿದರೆ ಗಂಭೀರ ಕ್ರಮ ತೆಗೆದುಕೊಳ್ಳಲಾಗುವುದೆಂದು ಕಡಕ್ಕಾಗಿ ಜಿಲ್ಲಾಧಿಕಾರಿ ತಿಳಿಸಿದರು.
ನಗರಸಭೆ ಕಚೇರಿಯ ವಿವಿಧ ವಿಭಾಗಗಳಿಗೆ ತೆರಳಿ ಪರಿಶೀಲಿಸಿದರು.
ಈ ವೇಳೆ ನಗರಸಭೆ ಆಯುಕ್ತರಾದ ಪರಶುರಾಮ್ ಛಲವಾದಿ,ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಪ್ರಕಾಶ್,ಪರಿಸರ ಎಂಜಿನಿಯರ್ ರೂಪ ಹಾಜರಿದ್ದರು.
