ಮೈಸೂರು: ಗ್ರಾಹಕರಿಗೆ ಉತ್ತಮ ಗುಣಮಟ್ಟದ, ನಿರಂತರ ಹಾಗೂ ವಿಶ್ವಾಸಾರ್ಹ ವಿದ್ಯುತ್ ಪೂರೈಕೆ ಮಾಡುವ ನಿಟ್ಟಿನಲ್ಲಿ ಶ್ರದ್ಧೆ, ಪ್ರಾಮಾಣಿಕತೆ, ಪರಿಶ್ರಮದಿಂದ ಕಾರ್ಯನಿರ್ವಹಿಸುವ ಮೂಲಕ ದೇಶದ ಅಭಿವೃದ್ಧಿಗೆ ಬಲ ನೀಡೋಣ ಎಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ವ್ಯವಸ್ಥಾಪಕ ನಿರ್ದೇಶಕಿ ಎಂ.ಎಸ್. ಅರ್ಚನಾ ಕರೆ ನೀಡಿದರು.
ವಿಜಯನಗರ 2ನೇ ಹಂತದಲ್ಲಿರುವ ಚಾವಿಸನಿನಿ ನಿಗಮ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು,ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿಕೊಡಲು ತಮ್ಮ ಜೀವ ಹಾಗೂ ಜೀವನವನ್ನೇ ತ್ಯಾಗ ಮಾಡಿದ ಮಹನೀಯರನ್ನು ನಾವೆಲ್ಲರೂ ಸ್ಮರಿಸಬೇಕಿದೆ. ಎಲ್ಲಾ ಮಹನೀಯರು ಕಂಡಿದ್ದ ಬಲಿಷ್ಠ ಹಾಗೂ ಸದೃಢ ಭಾರತದ ಕನಸನ್ನು ನನಸಾಗಿಸುವ ಜವಾಬ್ದಾರಿ ಪ್ರತಿಯೊಬ್ಬ ನಾಗರಿಕನ ಮೇಲಿದೆ ಎಂದು ಹೇಳಿದರು.
ಸದೃಢ ಭಾರತದ ನಿರ್ಮಾಣದಲ್ಲಿ ವಿದ್ಯುತ್ ಕ್ಷೇತ್ರದ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ದೇಶದ ಆರ್ಥಿಕ ಅಭಿವೃದ್ಧಿ, ಕೈಗಾರಿಕೆ, ಕೃಷಿ ಹಾಗೂ ಜನರ ದೈನಂದಿನ ಬದುಕಿನಲ್ಲಿ ವಿದ್ಯುತ್ ಕ್ಷೇತ್ರ ಅತ್ಯಂತ ಪ್ರಮುಖ ಪಾತ್ರವಹಿಸುತ್ತಿದ್ದು, ದೇಶದ ಆರ್ಥಿಕ ಪ್ರಗತಿ ಸೇರಿದಂತೆ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ನಿರಂತರ ವಿದ್ಯುತ್ ಪೂರೈಕೆ ಅಗತ್ಯವಾಗಿದೆ.
ಅದ್ದರಿಂದ ಸೆಸ್ಕ್ ಸಿಬ್ಬಂದಿ ತಮ್ಮ ಕರ್ತವ್ಯವನ್ನು ನಿಷ್ಠೆ ಮತ್ತು ಜವಾಬ್ದಾರಿಯಿಂದ ನಿರ್ವಹಿಸುವ ಮೂಲಕ ಸಂಸ್ಥೆಯ ಅಭಿವೃದ್ಧಿ ಹಾಗೂ ದೇಶದ ಪ್ರಗತಿಗೆ ಕೊಡುಗೆ ನೀಡಬೇಕಿದೆ. ಕಳೆದ ವರ್ಷ ಸಂಸ್ಥೆ ಹಲವು ಸಾಧನೆಗಳನ್ನು ಮಾಡಿದ್ದು, ಈ ವರ್ಷ ಆ ಸಾಧನೆಗಳನ್ನು ಮತ್ತಷ್ಟು ಉತ್ತಮಗೊಳಿಸಬೇಕಿದೆ. ಗುರಿಯೊಂದಿಗೆ ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿ, ಸಂಸ್ಥೆಯನ್ನು ಮತ್ತಷ್ಟು ಅಭಿವೃದ್ಧಿಯತ್ತ ಕೊಂಡೊಯ್ಯಬೇಕು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಕರ್ತವ್ಯ ಹಾಗೂ ಜವಾಬ್ದಾರಿಯನ್ನು ಅತ್ಯುತ್ತಮವಾಗಿ ನಿರ್ವಹಿಸಿದ ಸಿಬ್ಬಂದಿಗೆ ಪ್ರಶಂಸಾ ಪತ್ರ ನೀಡಿ ಗೌರವಿಸಲಾಯಿತು.
ವ್ಯವಸ್ಥಾಪಕ ನಿರ್ದೇಶಕರು ಹಾಗೂ ಇತರೆ ಗಣ್ಯರು, ಪ್ರಶಂಸಾ ಪತ್ರವನ್ನು ವಿತರಿಸಿ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಕಾರ್ಯನಿಷ್ಠೆಯನ್ನು ಶ್ಲಾಘಿಸಿದರು.
ವಿದ್ಯುತ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದವರನ್ನು ಕಳೆದುಕೊಂಡು, ಅನುಕಂಪದ ಆಧಾರದಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡವರಿಗೆ ನೇಮಕಾತಿ ಆದೇಶ ಪತ್ರವನ್ನು ಇದೇ ವೇಳೆ ವಿತರಿಸಲಾಯಿತು.
ಇದೇ ವೇಳೆ ಕರ್ತವ್ಯ ನಿರ್ವಹಣೆ ಸಂದರ್ಭದಲ್ಲಿ ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಲೈನ್ಮನ್ ಮಂಜುನಾಥ್ ಹಾಗೂ ರಸ್ತೆ ಅಪಘಾತದಲ್ಲಿ ಅಸುನೀಗಿದ ಕಿರಿಯ ಇಂಜಿನಿಯರ್ ಕಿರಣ್ ಕುಮಾರ್ ಅವರ ಕುಟುಂಬದವರಿಗೆ ತಲಾ 1.06 ಕೋಟಿ ರೂ.ಗಳ ವಿಮೆ ಪರಿಹಾರದ ಚೆಕ್ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಸೆಸ್ಕ್ ತಾಂತ್ರಿಕ ನಿರ್ದೇಶಕ ಎಲ್. ಲೋಕೇಶ್, ಮುಖ್ಯ ಪ್ರಧಾನ ವ್ಯವಸ್ಥಾಪಕಿ (ತಾಂತ್ರಿಕ) ಶರಣಮ್ಮ ಎಸ್. ಜಂಗಿನ, ಮುಖ್ಯ ಆರ್ಥಿಕ ಅಧಿಕಾರಿ ಜಿ. ರೇಣುಕಾ, ಮುಖ್ಯ ಪ್ರಧಾನ ವ್ಯವಸ್ಥಾಪಕಿ ಲಿಂಗರಾಜಮ್ಮ, ಪ್ರಧಾನ ವ್ಯವಸ್ಥಾಪಕಿ ಡಾ. ಬಿ.ಆರ್. ರೂಪ, ಸೆಸ್ಕ್ ಜಾಗೃತ ದಳದ ಡಿವೈಎಸ್ಪಿ ಪೃಥ್ವಿ, 659 ಎಂಪ್ಲಾಯಿಸ್ ಯೂನಿಯನ್ ಉಪಾಧ್ಯಕ್ಷ ಸಂದೀಪ್, ಕೆನರಾ ಬ್ಯಾಂಕಿನ ಮಂಡ್ಯ ವಿಭಾಗದ ಎಜಿಎಂ ಜಿ. ಹರಿಕೃಷ್ಣ, ಮೈಸೂರು ವಿಭಾಗದ ಎಜಿಎಂ ಗೌತಮ್ ಸೇರಿದಂತೆ ವಿವಿಧ ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದರು.
