ಬೆಂಗಳೂರು: ಸಿಎಂ ಸಿದ್ದರಾಮಯ್ಯ ಎಂದರೆ ಮತಾಂತರದ ರಾಯಭಾರಿ, ಯಾರೂ ಯೋಚನೆ ಮಾಡದಂತಹ ಜಾತಿಗಳನ್ನು ಅವರು ಸೃಷ್ಟಿಸಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂವಿಧಾನದಲ್ಲಿ ಇಲ್ಲದ ಜಾತಿಗಳನ್ನು ಸಿಎಂ ಸಿದ್ದರಾಮಯ್ಯ ಹುಟ್ಟುಹಾಕಿದ್ದಾರೆ. ಇಂತಹ ಜಾತಿ ಸಮೀಕ್ಷೆ ರದ್ದಾಗಲಿದೆ. ಈ ಸಮೀಕ್ಷೆ ಮೂಲಕ ಮತಾಂತರಕ್ಕೆ ಪ್ರೇರಣೆ ನೀಡಿ, ಹಿಂದೂಗಳನ್ನು ತುಳಿಯಲಾಗುತ್ತಿದೆ. ಏನೇ ಮಾಡಿದರೂ ಸಂವಿಧಾನದ ಪ್ರಕಾರ ಮಾಡಲಿ, ಮೀಸಲಾತಿಗೆ ಸಂಬಂಧಿಸಿದಂತೆ ಕೋರ್ಟ್ ಆದೇಶವಿದೆ. ಅದರ ಪ್ರಕಾರ ಕ್ರಮ ವಹಿಸಲಿ ಎಂದು ಹೇಳಿದರು.
ಸಿಎಂ ಸಿದ್ದರಾಮಯ್ಯ ಎಲ್ಲದರಲ್ಲೂ ಮುಸ್ಲಿಂ ಓಲೈಕೆ ಮಾಡುತ್ತಾರೆ. ಹಿಂದೂಗಳ ಮತ ಮಾತ್ರ ಬೇಕು. ಮತ ಸಿಕ್ಕ ನಂತರ ಹಿಂದೂ ಧರ್ಮದಲ್ಲಿ ಲೋಪವಿದೆ ಎಂದಿದ್ದಾರೆ. ಮುಸ್ಲಿಮರಲ್ಲಿ ಮಹಿಳೆಯರು ಮಸೀದಿಗೆ ಹೋಗುವಂತಿಲ್ಲ. ಇದು ಕೂಡ ತಪ್ಪೆಂದು ಅವರಿಗೆ ಅನ್ನಿಸಲಿಲ್ಲ. ಅಂದರೆ ಹಿಂದೂ ಧರ್ಮದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ. ಕೇವಲ ಹಿಂದೂ ಧರ್ಮವನ್ನು ಟಾರ್ಗೆಟ್ ಮಾಡುವ ಬದಲು ಬೇರೆ ಧರ್ಮಗಳ ಬಗ್ಗೆ ಕೂಡ ಮಾತಾಡಲಿ ಎಂದು ಒತ್ತಾಯಿಸಿದರು.
ದಸರಾ ಹಬ್ಬವನ್ನು ನಾಡಹಬ್ಬ, ಹಿಂದೂಗಳ ಹಬ್ಬ ಎನ್ನುತ್ತಾರೆ. ಅದೇ ರೀತಿ ಮುಸ್ಲಿಂ ಹಬ್ಬಗಳನ್ನು ಕೂಡ ನಾಡಹಬ್ಬ ಎನ್ನಲಿ ಮತ್ತು ಮುಸ್ಲಿಂ ಹಬ್ಬಗಳನ್ನು ಹಿಂದೂಗಳ ಕೈಯಲ್ಲಿ ಉದ್ಘಾಟನೆ ಮಾಡಿಸಲಿ, ಈ ಹಬ್ಬವನ್ನು ಮೈಸೂರು ಅರಸರು ಮಾಡಿಕೊಂಡು ಬಂದಿದ್ದಾರೆ, ಇದು ಪರಂಪರೆಯೇ ಹೊರತು ಕಾನೂನಲ್ಲ ಆದ್ದರಿಂದ ಇದಕ್ಕಾಗಿ ಪ್ರತ್ಯೇಕ ಕಾನೂನು ತರುವ ಅಗತ್ಯವಿದೆ. ಮಸೀದಿ ಮುಂದೆ ಗಣೇಶ ಮೆರವಣಿಗೆ ಹೋಗಬಾರದು ಎಂಬಂತೆ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರದಿಂದ ಹಿಂದೂ-ಮುಸ್ಲಿಂ ನಡುವೆ ಒಡಕು ಮೂಡಿದೆ ಎಂದು ಅಶೋಕ್ ಕಿಡಿಕಾರಿದರು.
ಬೆಂಗಳೂರಿನಲ್ಲಿ 5,000 ಕೋಟಿ ರೂ. ಬಿಡುಗಡೆಯಾಗಿದ್ದರೂ ರಸ್ತೆ ದುರಸ್ತಿ ಮಾಡಿಲ್ಲ. ಶುದ್ಧ ಕುಡಿಯುವ ನೀರಿನ ಘಟಕದ 20 ಲೀಟರ್ ನೀರಿನ ದರವನ್ನು 5 ರಿಂದ 10 ರೂ. ಗೆ ಏರಿಸಲಾಗಿದೆ. ತೈಲ ದರ, ಹಾಲಿನ ದರ ಏರಿಕೆ, ಹೊಸದಾಗಿ ಕಸ ಶುಲ್ಕ ಹೇರಲಾಗಿದೆ. ಇನ್ನು ಗಾಳಿಗೂ ಶುಲ್ಕ ತಂದರೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಬ್ರ್ಯಾಂಡ್ ಬೆಂಗಳೂರು ಸಾಕಾರವಾಗಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಬಂದ ನಂತರ ಪಾಲಿಕೆಯನ್ನು ಐದು ಹೋಳು ಮಾಡಲಾಗಿದೆ. 198 ವಾರ್ಡ್‌ಗೆ ಶೇ 90 ನಷ್ಟು ಇಂಜಿನಿಯರ್ ಇಲ್ಲ. ಪಾಲಿಕೆಯೇ ಪಾಪರ್ ಆಗಿರುವ ಸಮಯದಲ್ಲಿ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ? ಒಂದು ಸಾವಿರಕ್ಕೂ ಅಧಿಕ ನೇಮಕಾತಿ ಮಾಡಿದರೆ ಹಣ ಎಲ್ಲಿಂದ ತರುತ್ತಾರೆ? ಬಹಳ ಕಡೆ ಶಂಕುಸ್ಥಾಪನೆಯಾಗಿ, ಕಾಮಗಾರಿ ಸ್ಥಗಿತವಾಗಿದೆ ಎಂದು ತರಾಟೆಗೆ ತೆಗೆದುಕೊಂಡರು.
ಧರ್ಮಸ್ಥಳದ ವಿಚಾರದಲ್ಲಿ ಎಸ್‌ಐಟಿ ವೇಗವಾಗಿ ಗುಂಡಿ ಅಗೆದಿದೆ. ಆದರೆ ತನಿಖೆ ನಿಧಾನವಾಗಿದೆ. ತನಿಖೆಗೆ ಒಳಪಟ್ಟವರು ಹೊರಗೆ ಬಂದು ಮಾಧ್ಯಮಗಳ ಜೊತೆ ಮಾತಾಡಿದ್ದಾರೆ. ಈ ವಿಚಾರದಲ್ಲಿ ನಾವು ಹೋರಾಟ ಮಾಡುತ್ತೇವೆ. ಇದೆಲ್ಲದರ ಬಗ್ಗೆ ಸರಿಯಾಗಿ ತನಿಖೆಯಾಗಬೇಕು. ಇದಕ್ಕಾಗಿ ಕೋರ್ಟ್ ಮೊರೆ ಕೂಡ ಹೋಗುತ್ತೇವೆ ಎಂದು ಅಶೋಕ್ ಎಚ್ಚರಿಸಿದರು.