ಅಧಿಕಾರಿಗಳಿಗೆ ಚಳಿ ಬಿಡಿಸಿದ ಸಿದ್ದರಾಮಯ್ಯ

Spread the love

ಬೆಂಗಳೂರು: ವಿಧಾನಸೌಧದ ಸಮ್ಮೇಳನ‌ ಸಭಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಚಳಿ ಬಿಡಿಸಿದರು.

ದೇವದಾಸಿ ಪದ್ಧತಿ ನಿಷೇಧ ಆಗಿದೆ. ಎಲ್ಲಿಯಾದರೂ ನಡೆದದ್ದು ಗಮನಕ್ಕೆ ಬಂದರೆ ಜಿಲ್ಲಾಧಿಕಾರಿ ಗಳು ಮತ್ತು ‌ಪೊಲೀಸ್‌ ವರಿಷ್ಟಾಧಿಕಾರಿಗಳ ವಿರುದ್ಧ ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕಠಿಣ ಎಚ್ಚರಿಕೆ ನೀಡಿದರು.

ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಆರೋಪಿಗಳಿಗೆ ಸಲೀಸಾಗಿ ಬೇಲ್ ಸಿಕ್ಕರೆ ಅದು ನಿಮ್ಮ ದೌರ್ಬಲ್ಯ,
ಗಂಭೀರ ಪ್ರಕರಣಗಳಲ್ಲಿ ಆರೋಪಿಗಳಿಗೆ ಸಲೀಸಾಗಿ ಜಾಮೀನು ಸಿಕ್ಕರೆ, ಮೇಲ್ಮನವಿ ಹೋಗಿ ಜಾಮೀನು ರದ್ದುಪಡಿಸಿ ಆರೋಪಿಗೆ ಶಿಕ್ಷೆ ಕೊಡಿಸಿದ ಪ್ರಕರಣಗಳು ಎಷ್ಟಿವೆ ವಿವರ ಕೊಡಿ ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಪೊಲೀಸ್ ಇಲಾಖೆಯಲ್ಲಿ ಸೀನಿಯರಿಟಿ ಲಿಸ್ಟ್ ಉಲ್ಲಂಘನೆ ಆಗಿ ಪರಿಶಿಷ್ಠರಿಗೆ ಅನ್ಯಾಯ ಆಗುತ್ತಿದೆ. ಸಮಿತಿ ಮುಂದೆ ದೂರು ಬಂದು ಹಿರಿಯ ಅಧಿಕಾರಿಗಳ ಗಮನಕ್ಕೂ ತಂದರೂ ಸಮಸ್ಯೆ ಬಗೆಹರಿಸುತ್ತಿಲ್ಲ ಏಕೆ ಎಡಿಜಿಪಿ ಅಡ್ಮಿನ್ ಸರಿಯಾಗಿ ನಡೆದುಕೊಳ್ಳುತ್ತಿಲ್ಲ ಎಂದು ಸಂಸದ ಈ.ತುಕಾರಾಮ್ ಮತ್ತು ಶಾಸಕ ನರೇಂದ್ರಸ್ವಾಮಿ ಸಿಎಂ ಗಮನಕ್ಕೆ ತಂದರು.

ಆಗ ಅಸಮಾಧಾನಗೊಂಡ ಸಿಎಂ ಈ ವಿಚಾರವನ್ನು ಮುಂದಿನ ಕ್ಯಾಬಿನೆಟ್ ಗೆ ತರುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಸಿದ್ದರಾಮಯ್ಯ ಸೂಚಿಸಿದರು.

ಬ್ಯಾಕ್ ಲಾಗ್ ಮತ್ತು ಬಡ್ತಿ ವಿಚಾರದಲ್ಲಿ ಆಗುತ್ತಿರುವ ಅನ್ಯಾಯಗಳನ್ನು ಸಬ್ ಕಮಿಟಿ ಪತ್ತೆ ಹಚ್ಚಿ ಸಮಸ್ಯೆಗಳನ್ನು ನಿಮ್ಮ ಗಮನಕ್ಕೆ ತಂದರೂ ಸಮಸ್ಯೆ ಬಗೆಹರಿಸದೆ ನಿರ್ಲಕ್ಷ್ಯ ತೋರಿಸುತ್ತಿದ್ದೀರಿ. ಹಾಗಾದರೆ ಸಬ್ ಕಮಿಟಿ ಕೊಡುವ ವರದಿಗಳಿಗೆ ಬೆಲೇನೆ ಇಲ್ಲವೇ ಎಂದು ವಿಧಾನ ಪರಿಷತ್ ಸದಸ್ಯ ಸುಧಾಮ್ ದಾಸ್ ಗಮನ ಸೆಳೆದರು.

ಎಲ್ಲಾ ಇಲಾಖೆಗಳೂ ಬಡ್ತಿಯಲ್ಲಿ ಮೀಸಲಾತಿಯನ್ನು ಚಾಚೂ ತಪ್ಪದೆ ಪಾಲಿಸಬೇಕು ಎಂದು ಸಿಎಂ ಸೂಚಿಸಿದರು.

ಅಲ್ಲದೆ ಇಲಾಖಾವಾರು ಮುಂಬಡ್ತಿಯಲ್ಲಿ ಆಗಿರುವ ಅನ್ಯಾಯಗಳ ಬಗ್ಗೆ ಪರಿಶೀಲಿಸಲು ಪ್ರತ್ಯೇಕ ರಿವ್ಯೂವ್ ಮೀಟಿಂಗ್ ಕರೆಯಿರಿ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚಿಸಿದರು.

ಪ್ರತೀ ಆರು ತಿಂಗಳಿಗೊಮ್ಮೆ ಉಸ್ತುವಾರಿ ಸಮಿತಿ ಸಭೆಯನ್ನು ಕಡ್ಡಾಯವಾಗಿ ಕರೆಯುತ್ತೇವೆ,ಅದರಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಕಂಡು ಬಂದರೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಮುಖ್ಯ ಮಂತ್ರಿಗಳು ಎಚ್ಚರಿಸಿದರು.

ರಾಯಚೂರಿನ‌ ಅಂಬೇಡ್ಕರ್ ವೃತ್ತದಲ್ಲಿ ಪ್ರಗತಿಪರ ಸಂಘಟನೆಗಳ ಕ್ರಿಯಾ ಸಮಿತಿ ಅಡಿಯಲ್ಲಿ ನಡೆಯುತ್ತಿರುವ ಮಹಿಳೆಯರ ಅಹೋರಾತ್ರಿ ಧರಣಿ ವಿಚಾರದ ಬಗ್ಗೆ ಇದೇ ವೇಳೆ ಪ್ರಸ್ತಾಪಿಸಿದರು

ದೇವದಾಸಿ ಸಮಸ್ಯೆ ಮತ್ತು ಪುನರ್ವಸತಿ ಬಗ್ಗೆ ಸಮಗ್ರ ವರದಿ ಸಿದ್ದಪಡಿಸಲು ಮುಖ್ಯ ಕಾರ್ಯದರ್ಶಿಗಳಿಗೆ ಸಿಎಂ ಆದೇಶಿಸಿದರು

ಅರಣ್ಯ ಹಕ್ಕು ಕಾಯ್ದೆ ಅಡಿಯಲ್ಲಿ ಹಕ್ಕು ಪತ್ರ ಸಮರ್ಪಕವಾಗಿ ನೀಡಬೇಕು. ಯಾವುದೇ ಕಾರಣಕ್ಕೂ ಅರಣ್ಯವಾಸಿಗಳನ್ನು ಕಾಡಿನಿಂದ ಹೊರಗೆ ಹಾಕಬಾರದು ಎಂದು ಸಿದ್ದರಾಮಯ್ಯ ಕಡಕ್ ಆದೇಶ ನೀಡಿದರು.