ಮೈಸೂರು: ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರ ವಿದ್ಯಾರ್ಥಿಗಳು ಮತ್ತು ಯುವಜನರ ಹಕ್ಕುಗಳನ್ನು ಹತ್ತಿಕ್ಕುತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಚ್.ಎ ವೆಂಕಟೇಶ್ ಟೀಕಿಸಿದ್ದಾರೆ.
ವಿಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸದೆ ಪ್ರಧಾನಮಂತ್ರಿ ಮೋದಿಯವರು, ಸಂಸತ್ತಿನಿಂದ ಪಲಾಯನ ಮಾಡುತ್ತಿದ್ದಾರೆ ಎಂದು ಮಾಧ್ಯಮ ಪ್ರಕಟಣೆಯಲ್ಲಿ ವೆಂಕಟೇಶ್ ಆರೋಪಿಸಿದ್ದಾರೆ.
ಭಾರತದ ಪ್ರಜೆಗಳು, ದೇಶದ ಸಂವಿಧಾನದ ಆರ್ಟಿಕಲ್ 32ರಲ್ಲಿ ತಮಗೆ ದತ್ತವಾಗಿರುವ ಅಧಿಕಾರದನ್ವಯ ರಿಟ್ ಅರ್ಜಿಗಳನ್ನು ದಾಖಲಿಸಿ, ಕೇಂದ್ರ ಸರ್ಕಾರದ ಏಕಸ್ವಾಮ್ಯ ಹಾಗೂ ಹಕ್ಕುಗಳ ಹರಣ ನೀತಿಯನ್ನು ಪ್ರಶ್ನಿಸುವ ಅನಿವಾರ್ಯತೆ ಎದುರಾಗಿದೆ ಎಂದು ಅವರು ಹೇಳಿದ್ದಾರೆ
ನೀಟ್ ಹಗರಣ, ಓಟ್ ಚೋರಿ, ಚಂದಾ ಚೋರಿ ಸೇರಿದಂತೆ ಹತ್ತಾರು ಹಗರಣಗಳಲ್ಲಿ ಮುಳುಗಿರುವ ಅನೈತಿಕ ನಡವಳಿಕೆಯ ಕೇಂದ್ರ ಬಿಜೆಪಿ ಸರ್ಕಾರ ಸಂಪೂರ್ಣ ಸರ್ವಾಧಿಕಾರಿ ಧೋರಣೆ ತಳೆದಿದೆ ಎಂದು ವೆಂಕಟೇಶ್ ಕಿಡಿಕಾರಿದ್ದಾರೆ.
ತನ್ನ ಹುಳುಕುಗಳನ್ನು ಮುಚ್ಚಿಕೊಳ್ಳಲು ವಿರೋಧಪಕ್ಷದ ನಾಯಕ ರಾಹುಲ್ ಗಾಂಧಿಯವರನ್ನೇ ವಶಕ್ಕೆ ಪಡೆದು ಜನರ ದನಿ ಉಡುಗಿಸುವ ಪ್ರಯತ್ನ ನಡೆಸುತ್ತಿದೆ ಎಂದು ದೂರಿದ್ದಾರೆ.
ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನದ ಆರ್ಟಿಕಲ್ 19 (1)(ಬಿ) ಅನ್ವಯ ನೀಡಿರುವ ಶಾಂತಿಯುತ ಪ್ರತಿಭಟನೆ, ಸಭೆ ನಡೆಸುವ ಹಕ್ಕು ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯದ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಅವರು ಕಿಡಿಕಾರಿದ್ದಾರೆ.
ನೀಟ್ ಪೇಪರ್ ಸೋರಿಕೆ ಒಂದು ವ್ಯವಸ್ಥಿತ ಷಡ್ಯಂತ್ರ. ಇದರಿಂದಾಗಿ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದರ ಹೊಣೆಹೊತ್ತು ರಾಜೀನಾಮೆ ನೀಡಬೇಕಿದ್ದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನರನ್ನು ಪ್ರಧಾನಿ ನರೇಂದ್ರ ಮೋದಿ ರಕ್ಷಿಸಿಕೊಳ್ಳುತ್ತಿರುವುದು ದುರಂತ ಎಂದು ಅವರು ತಿಳಿಸಿದ್ದಾರೆ.
ಪ್ರಜೆಗಳ ಸಂವಿಧಾನಾತ್ಮಕ ಹಕ್ಕುಗಳ ರಕ್ಷಣೆಗಾಗಿ ದೇಶದ ಸರ್ವೋನ್ನತ ಸಾಂವಿಧಾನಿಕ ಸಂಸ್ಥೆಯಾಗಿರುವ ಸುಪ್ರೀಂ ಕೋರ್ಟ್ ಮಧ್ಯ ಪ್ರವೇಶಿಸಬೇಕು. ಜೊತೆಗೆ ರಾಷ್ಟ್ರಪತಿಯವರು ಸಹ ಕೇಂದ್ರ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಿ ಜನತೆಯ ಹಕ್ಕುಗಳ ರಕ್ಷಣೆಗೆ ಕಾವಲಾಗಬೇಕು ಎಂದು ವೆಂಕಟೇಶ್ ಒತ್ತಾಯಿಸಿದ್ದಾರೆ.
ದೇಶದ ಯಾವುದೇ ಪ್ರಜೆ ತನ್ನ ಹಕ್ಕಿನ ರಕ್ಷಣೆಗಾಗಿ ಆರ್ಟಿಕಲ್ 32ರನ್ವಯ ಸರ್ವೋಚ್ಚ ನ್ಯಾಯಾಲಯವನ್ನು ನೇರವಾಗಿ ಸಂಪರ್ಕಿಸಬಹುದಾದ ಅಧಿಕಾರವನ್ನು ಬಾಬಾ ಸಾಹೇಬರು ನೀಡಿದ್ದಾರೆ. ಸಂವಿಧಾನದ ಹೃದಯ ಮತ್ತು ಆತ್ಮ ಎಂದು ಪರಿಗಣಿಸಲ್ಪಡುವ ಈ ಆರ್ಟಿಕಲ್ 32ರ ಮೂಲಕ ದೇಶದ ಪ್ರಜೆಗಳು ಭಾರೀ ಸಂಖ್ಯೆಯಲ್ಲಿ ನ್ಯಾಯಾಂಗದ ಕದ ತಟ್ಟಿ ತಮ್ಮ ಹಕ್ಕುಗಳನ್ನು ಉಳಿಸಿಕೊಳ್ಳಬೇಕು ಎಂದು ಎಚ್.ಎ ವೆಂಕಟೇಶ್ ಕರೆ ನೀಡಿದ್ದಾರೆ.
