ವಿಜಯಪುರ: ಕಾಯಕ, ದಾಸೋಹ ಹಾಗೂ ಸಮಾನತೆಯ ಸಂದೇಶವನ್ನು ಸಾರಿದ ದಾಸ ಸಾಹಿತ್ಯವು ಸಮಾಜದ ಪರಿವರ್ತನೆಗೆ ಮಹತ್ವದ ಕೊಡುಗೆ ನೀಡಿದೆ ಎಂದು ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.
ವಿಜಯಪುರ ಜಿಲ್ಲೆಯ ಬಿಜ್ಜರಗಿ ಗ್ರಾಮದಲ್ಲಿ ಇಂದು ನಡೆದ ಶ್ರೀ ಹಂಜಗಿ ಸಿದ್ದೇಶ್ವರ ಹಾಗೂ ಶ್ರೀ ಹಿರೋಡೇಶ್ವರ ಮೂರ್ತಿ ಪ್ರತಿಷ್ಠಾಪನೆ ಮತ್ತು ಕಳಸಾರೋಹಣ ಸಮಾರಂಭದಲ್ಲಿ ಪಾಲ್ಗೊಂಡು, ನಂತರ ಕನಕದಾಸ ಸರ್ಕಲ್ ಉದ್ಘಾಟಿಸಿ, ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಲ್ಲಿಸಿ ಮಾತನಾಡಿದರು.
ಕನಕದಾಸರಂತಹ ಮಹನೀಯರ ಸಮಾಜಮುಖಿ ಚಿಂತನೆಗಳು ಇಂದಿಗೂ ಎಲ್ಲರಿಗೂ ಮಾರ್ಗದರ್ಶಕವಾಗಿವೆ ಎಂದು ಹೇಳಿದರು.
ಸಮಾಜದ ಎಲ್ಲ ವರ್ಗಗಳನ್ನು ಒಗ್ಗೂಡಿಸಿಕೊಂಡು ಅಭಿವೃದ್ಧಿಯ ಪಥದಲ್ಲಿ ಮುನ್ನಡೆಯುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಜಿಲ್ಲೆಯ ಅಭಿವೃದ್ಧಿಗೆ ಸರ್ಕಾರದ ಪ್ರಯತ್ನಗಳ ಜೊತೆಗೆ ಜನರ ಸಹಕಾರವೂ ಅತ್ಯಂತ ಅಗತ್ಯವಾಗಿದೆ ಎಂದು ಮನವಿ ಮಾಡಿದರು.
ತಮ್ಮ ತಂದೆ ಸಿದ್ದರಾಮಯ್ಯ ಅವರಿಗೆ ವಿಜಯಪುರ ಜಿಲ್ಲೆಯ ಜನರು ನೀಡಿದ ಶಕ್ತಿ, ಪ್ರೀತಿ ಹಾಗೂ ಸಹಕಾರವನ್ನು ತಮ್ಮ ಮೇಲೂ ಇರಿಸಿ, ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಅವರು ಕೋರಿದರು.
ನಗರಾಭಿವೃದ್ಧಿ ಸಚಿವನಾಗಿ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಎಲ್ಲರ ಆಶೀರ್ವಾದ, ಮಾರ್ಗದರ್ಶನ ಹಾಗೂ ಸಹಕಾರದೊಂದಿಗೆ ಪ್ರಾಮಾಣಿಕವಾಗಿ ಶ್ರಮಿಸುವ ಸಂಕಲ್ಪ ಮಾಡಿದ್ದೇನೆ, ಜಿಲ್ಲೆಯ ಅಭಿವೃದ್ಧಿಗೆ ಅಗತ್ಯವಿರುವ ಎಲ್ಲ ರೀತಿಯ ಸಹಕಾರ ನೀಡಲು ಬದ್ಧನಾಗಿದ್ದೇನೆ ಎಂದು ಸಚಿವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವರಾದ ಡಾ. ಎಂ.ಬಿ. ಪಾಟೀಲ್, ಹಾಲುಮತ ಸರೂರ ಮಠದ ಪರಮಪೂಜ್ಯ ರೇವಣ್ಣ ಸಿದ್ದೇಶ್ವರ ಶಾಂತಮಯ ಸ್ವಾಮೀಜಿ, ಶ್ರೀ ಮಾಳಿಂಗರಾಯ ಮಹಾರಾಜರು, ಶ್ರೀ ಮಾಯಣ್ಣ ಪೂಜಾರಿ, ಹೊವಣ್ಣ ಪೂಜಾರಿ ಸೇರಿದಂತೆ ಗಣ್ಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.
