ರಾಯನ ಕೆರೆ ನೀರು ಸಂಸ್ಕರಣ ಘಟಕ: ಉಪ ಲೋಕಾಯುಕ್ತರ ಪ್ರಶಂಸೆ

Spread the love

ಮೈಸೂರು: ರಾಯನ ಕೆರೆ ನೀರು ಸಂಸ್ಕರಣಾ ಘಟಕ ಹಾಗೂ ಘನ ತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ಕರ್ನಾಟಕ ಉಪ ಲೋಕಾಯುಕ್ತ ನ್ಯಾ.ಕೆ.ಎನ್. ಫಣೀಂದ್ರ ಅವರು ಭೇಟಿ ನೀಡಿ ಪರಿಶೀಲಿಸಿದರು.

ನಗರದ ರಾಯನ ಕೆರೆ ನೀರು ಸಂಸ್ಕರಣ ಘಟಕ ಒಳಚರಂಡಿ ನೀರನ್ನು ಸಂಸ್ಕರಿಸಿ, ಕೆರೆಗಳಿಗೆ ಬಿಡುಗಡೆ ಮಾಡುವ ವ್ಯವಸ್ಥೆಯಾಗಿದ್ದು ಉತ್ತಮವಾಗಿ ನಿರ್ವಹಣೆ ಮಾಡಲಾಗಿದೆ. ಆದರೆ ಇದರಿಂದ ಜನರಿಗೆ ತೊಂದರೆ ಆಗದಂತೆ ಮುನ್ನೆಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಈ ವೇಳೆ ನ್ಯಾ.ಕೆ.ಎನ್. ಫಣೀಂದ್ರ ತಿಳಿಸಿದರು.

ರಾಯನಕೆರೆ ನೀರು ಸಂಸ್ಕರಣ ಘಟಕ ಉತ್ತಮ ನಿರ್ವಹಣೆಯ ಬಗ್ಗೆ ಪ್ರಶಂಶೆ ವ್ಯಕ್ತಪಡಿಸಿದ ಅವರು ಮಲಿನ ನೀರು ಎತ್ತುವ ಯಂತ್ರಗಾರಕ್ಕೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದು ಜನರಿಗೆ ಇದರಿಂದ ಯಾವುದೇ ರೀತಿಯ ಸಮಸ್ಯೆಗಳು ಆಗದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.

ಇದೇ ವೇಳೆ ಉಪ ಲೋಕಾಯುಕ್ತರು ಮಹಾನಗರ ಪಾಲಿಕೆಯ ರಾಯನ ಕೆರೆ ಘನ ತ್ಯಾಜ್ಯ ನಿರ್ವಹಣಾ ಘಟಕಕ್ಕೂ ಭೇಟಿ ನೀಡಿ ಪರಿಶೀಲಿಸಿ, ಒಣ ಕಸ ಹಾಗೂ ಹಸಿ ಕಸ ಬೇರ್ಪಡಿಸುವ ಕಾರ್ಯ ಹಾಗೂ ನಿರ್ವಹಣೆ ಬಗ್ಗೆ ಮಾಹಿತಿ ಪಡೆದು ಉತ್ತಮವಾಗಿ ನಿರ್ವಹಣೆ ಮಾಡಲಾಗಿದೆ ಎಂದು ತಿಳಿಸಿದರು.

ಅಲ್ಲದೆ ಮೈಸೂರು ಮಾದರಿಯಲ್ಲಿಯೇ ಬೆಂಗಳೂರು ಹಾಗೂ ಇತರೆ ಜಿಲ್ಲೆಗಳಿಗೂ ಘನತ್ಯಾಜ್ಯ ನಿರ್ವಹಣಾ ಘಟಕ ನಿರ್ಮಾಣ ಮಾಡಿ ಅಳವಡಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಹೇಳಿದರು.

ಘನ ತ್ಯಾಜ್ಯ ನಿರ್ವಹಣಾ ಘಟಕದ ಸುತ್ತಾ 5 ರಿಂದ 10 ಕಿ.ಮೀ ವ್ಯಾಪ್ತಿಯಲ್ಲಿ ಜನರ ಸಮಿಕ್ಷೇ ಮಾಡಿ ಜನರಿಗೆ ಯಾವುದೇ ತೊಂದರೆ ಆಗದಂತೆ ಮುನ್ನೆಚರಿಕೆ ವಹಿಸಿ ಹಾಗೂ ಇದರ ಸುತ್ತ ಅಕ್ರಮ ಲೇ ಔಟ್ ಗಳು ಹಾಗೂ ಕಟ್ಟಡ ನಿರ್ಮಾಣ ಆಗದಂತೆ ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ ಆದೇಶಿಸಿದರು.

ನೀರು ಸಂಸ್ಕರಣ ಘಟಕದಲ್ಲಿ ಬೆಳೆದಿರುವ ಗಿಡ ಗಂಟೆಯನ್ನು ತೆರವುಗೊಳಿಸುವಂತೆ ಸೂಚನೆ ನೀಡಿದರು.

ಘನ ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಕೆಲಸ ಮಾಡುವವರಿಗೆ ಪ್ರತಿ ತಿಂಗಳು ಆರೋಗ್ಯ ತಪಾಸಣೆ ಹಾಗೂ ಅವರಿಗೆ ಉತ್ತಮವಾದ ಗ್ಲೌಸ್, ಬೂಟ್ ಹಾಗೂ ಮಾಸ್ಕ್ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತರಾದ ಶೇಕ್ ತನ್ವಿರ್ ಆಸಿಫ್, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿ ಉಮಾ ಶಂಕರ್, ಮೈಸೂರು ತಾಲೂಕು ತಹಶೀಲ್ದಾರ್ ಮಹೇಶ್ ಕುಮಾರ್ ಹಾಗೂ ಮಹಾನಗರ ಪಾಲಿಕೆಯ ಅಧಿಕಾರಿಗಳು ಹಾಜರಿದ್ದರು.