ಮೈಸೂರು: ಜಿಲ್ಲೆಯಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು. ಕಾಮಗಾರಿಗಳಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು ಎಂದು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಸೂಚಿಸಿದರು.
ಜಿಲ್ಲಾ ಪಂಚಾಯತ್ ಡಿ. ದೇವರಾಜ ಅರಸು ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು,ಮೈಸೂರು ನಗರದಲ್ಲಿ ವೈಟ್ ಟ್ಯಾಪಿಂಗ್ ಮಾಡುತ್ತಿರುವ ಸ್ಥಳಗಳಲ್ಲಿ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು. ಇನ್ನೂ ಪ್ರಾರಂಭವಾಗದ ವೈಟ್ ಟ್ಯಾಪಿಂಗ್ ಕಾಮಗಾರಿಗಳನ್ನು ದಸರಾ ಮುಗಿದ ಬಳಿಕ ಪ್ರಾರಂಭಿಸಬೇಕು. ದಸರಾ ವೇಳೆ ಹೆಚ್ಚಿನ ವಾಹನ ದಟ್ಟಣೆ ಉಂಟಾಗುವುದರಿಂದ ವಾಹನ ದಟ್ಟಣೆ ತಡೆಯಲು ಹೆಚ್ಚಿನ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶಿಸಿದರು.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಮಣಿಪಾಲ್ ಆಸ್ಪತ್ರೆ ಸರ್ಕಲ್ ಬಳಿ ವೈಟ್ ಟಾಪಿಂಗ್ ಕಾಮಗಾರಿ ನಡೆಯುತ್ತಿದ್ದು, ಇಲ್ಲಿ ಹೆಚ್ಚಿನ ವಾಹನ ದಟ್ಟಣೆ ಉಂಟಾಗುತ್ತಿದೆ. ದಸರಾ ವೇಳೆ ಕಾಮಗಾರಿಯನ್ನು ನಿಲ್ಲಿಸಿ ವಾಹನ ಸಂಚಾರಕ್ಕೆ ಸುಗಮ ವ್ಯವಸ್ಥೆ ಮಾಡಬೇಕು, ನಂತರ ಕಾಮಗಾರಿ ಮುಂದುವರಿಸಬೇಕು ಎಂದು ಸಲಹೆ ನೀಡಿದರು.
ಮೈಸೂರು – ಟಿ. ನರಸೀಪುರ ರಸ್ತೆ ವೈಜ್ಞಾನಿಕವಾಗಿಲ್ಲದಿರುವುದರಿಂದ ಅಪಘಾತಗಳು ಸಂಭವಿಸುತ್ತಿವೆ. ಈ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಗಮನ ಹರಿಸಬೇಕು ಎಂದು ತಿಳಿಸಿದರು.
ಮೈಸೂರು ಮಹಾನಗರ ಪಾಲಿಕೆಯಿಂದ ನಗರದ ರಸ್ತೆಗಳ ನವೀಕರಣ ಕಾಮಗಾರಿಗಳನ್ನು ದಸರಾ ಪ್ರಾರಂಭವಾಗುವ ಒಂದು ವಾರದ ಮುಂಚೆಯೇ ಪೂರ್ಣಗೊಳಿಸಬೇಕು. ಕಾಮಗಾರಿಗಳಲ್ಲಿ ಗುಣಮಟ್ಟ ಕಾಪಾಡಬೇಕು ಎಂದು ಕಟ್ಟುನಿಟ್ಟಾಗಿ ಸಚಿವರು ಹೇಳಿದರು.
ರಾಜ್ಯದಲ್ಲಿ ಬರ ಪರಿಸ್ಥಿತಿ ಇದೆ. ಜಿಲ್ಲೆಯಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗಬಾರದು. ಕುಡಿಯುವ ನೀರಿನ ಪೂರೈಕೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಯಾವುದೇ ಹಳ್ಳಿಯಲ್ಲಿಯೂ ಕುಡಿಯುವ ನೀರಿನ ತೊಂದರೆ ಉಂಟಾಗಬಾರದು. ಶುದ್ಧ ಕುಡಿಯುವ ನೀರಿನ ಪೂರೈಕೆಯಾಗಬೇಕು. ಬರ ನಿರ್ವಹಣೆಯನ್ನು ಅಧಿಕಾರಿಗಳು ಸಮರ್ಥವಾಗಿ ಎದುರಿಸಬೇಕು ಎಂದು ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್. ಯುಕೇಶ್ ಕುಮಾರ್, ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
