ಕೊಳ್ಳೇಗಾಲ: ತಾಲ್ಲೂಕಿನ ದೊಡ್ಡಿಂದುವಾಡಿ ಗ್ರಾಮದಲ್ಲಿ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆಯನ್ನು 15 ದಿನದೊಳಗೆ ತುರ್ತು ಕ್ರಮವಹಿಸಿ ಬಗೆಹರಿಸುವಂತೆ ಶಾಸಕ ಎಂ.ಆರ್. ಮಂಜುನಾಥ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು
ದೊಡ್ಡಿಂದುವಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆ ಯಾಗುತ್ತಿಲ್ಲ, ನೀರಿನ ಸಮಸ್ಯೆ ಬಗೆಹರಿಸುವಂತೆ ಗ್ರಾಮಸ್ಥರು ಶಾಸಕರಲ್ಲಿ ಮನವಿ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕರು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಗ್ರಾಮಕ್ಕೆ ಭೇಟಿ ನೀಡಿ, ಕುಡಿಯುವ ನೀರಿನ ಸಮಸ್ಯೆ ಹಾಗೂ ಸಾರ್ವಜನಿಕರು ಎದುರಿಸುತ್ತಿರುವ ತೊಂದರೆಗಳ ಕುರಿತು ಮಾಹಿತಿ ಪಡೆದುಕೊಂಡರು.
ನಂತರ ಜೊತೆಯಲ್ಲೆ ಇದ್ದ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಕೂಡಲೇ ನೀರಿನ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
ಕುಡಿಯುವ ನೀರು ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, 15 ದಿನಗಳೊಳಗೆ ಬಗೆಹರಿಸಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಅಲ್ಲದೆ, ಕೈಗೊಂಡ ಕ್ರಮಗಳ ಕುರಿತು ವರದಿ ಸಲ್ಲಿಸುವಂತೆಯೂ ನಿರ್ದೇಶನ ನೀಡಿದರು.
ಇದೇ ವೇಳೆ ಗ್ರಾಮದಲ್ಲಿ ಹೊಸ ಬಸ್ ನಿಲ್ದಾಣದ ವ್ಯವಸ್ಥೆ ಕಲ್ಪಿಸಿಕೊಡಬೇಕು ಹಾಗೂ ಹೈಮಾಸ್ಟ್ ದೀಪ ಕಾರ್ಯನಿರ್ವಹಿಸುತ್ತಿಲ್ಲ ಅದನ್ನು ದುರಸ್ತಿಪಡಿಸಿ, ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಗ್ರಾಮಸ್ಥರು ಶಾಸಕರಿಗೆ ಮನವಿ ಮಾಡಿದರು.
ಗ್ರಾಮಸ್ಥರ ಮನವಿಗೆ ತಕ್ಷಣ ಸ್ಪಂದಿಸಿದ ಶಾಸಕರು ಸಂಬಂಧಪಟ್ಟ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ, ಹೈಮಾಸ್ಟ್ ದೀಪವನ್ನು ಕೂಡಲೇ ದುರಸ್ತಿಪಡಿಸಿ ವಿದ್ಯುತ್ ಸಂಪರ್ಕ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಜೊತೆಗೆ, ಗ್ರಾಮದಲ್ಲಿ ಹೊಸ ಬಸ್ ನಿಲ್ದಾಣದ ವ್ಯವಸ್ಥೆ ಕಲ್ಪಿಸುವ ಸಂಬಂಧವೂ ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಗ್ರಾಮಸ್ಥರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ನಮ್ಮ ಆದ್ಯತೆಯಾಗಿದೆ. ಕುಡಿಯುವ ನೀರು, ಸಾರಿಗೆ ಹಾಗೂ ಬೀದಿ ದೀಪಗಳಂತಹ ಸಾರ್ವಜನಿಕ ಅಗತ್ಯಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಅಧಿಕಾರಿಗಳು ತ್ವರಿತವಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
ಈ ಸಂದರ್ಭದಲ್ಲಿ ಕುಡಿಯುವ ನೀರಿನ ನೈರ್ಮಲ್ಯ ಇಲಾಖೆಯ ಎಇಇ ಸುಧನ್ವ ನಾಗ್, ಗ್ರಾಮ ಪಂ, ಮಾಜಿ ಅಧ್ಯಕ್ಷ ಶಿವರುದ್ರಸ್ವಾಮಿ, ಸದಸ್ಯರಾದ ಮುತ್ತುರಾಜು, ನಾಗಭೂಷಣ, ಮುಖಂಡರುಗಳಾದ ಗೋವಿಂದ, ಮಾದೇಶ್, ನಯೀಮ್ ಪಾಷ, ಕೆಂಪರಾಜು, ವೆಂಕಟರಂಗ, ಕುಮಾರ್, ಸಿಂಗನಲ್ಲೂರು ರಾಜಣ್ಣ, ಗೌಡಗೆರೆ ಶೆಟ್ಟಿ, ಪುಷ್ಪರಾಜ್, ಎಸ್ ಆರ್ ಮಹದೇವ್, ಕೃಷ್ಣ, ಮಾದಯ್ಯ, ಮಹೇಶ್, ಶಿವು ಮತ್ತಿತರರು ಹಾಜರಿದ್ದರು.
