ಬೆಂಗಳೂರು: ಚಿಕ್ಕಬಳ್ಳಾಪುರ, ಚಿಂತಾಮಣಿ ತಾಲೂಕಿನ ತಿಮ್ಮಸಂದ್ರ ಗ್ರಾಮದಲ್ಲಿ ವಕ್ಫ್ ಆಸ್ತಿ ಎಂದು ನಮೂದಾಗಿರುವ ಜಮೀನಿನಲ್ಲಿ ಉಳುಮೆ ಮಾಡಲು ಮುಂದಾ ರೈತರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿರುವುದು ಖಂಡನೀಯ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ.
ಈ ಸರ್ಕಾರ ತನ್ನ ಓಲೈಕೆ ರಾಜಕಾರಣಕ್ಕೆ ರೈತರನ್ನು ಬಲಿಕೊಡಲು ಮುಂದಾಗಿದೆ ಇದು ಕಟುಕ ಸರ್ಕಾರ ಎಂದು ಟ್ವೀಟ್ ಮಾಡಿ ಕಿಡಿಕಾರಿದ್ದಾರೆ.
ಸಿಎಂ ಸಿದ್ದರಾಮಯ್ಯ ನವರೇ, ರೈತರ ಜಮೀನಿನ ಮೇಲೆ ಕಬ್ಜಾ ಮಾಡುವುದೇ ಅಲ್ಲದೆ, ಅವರ ಮೇಲೆ ಲಾಠಿ ಚಾರ್ಜ್ ಮಾಡಿ, ಟ್ರ್ಯಾಕ್ಟರ್ ವಶಕ್ಕೆ ಪಡೆದು ರೈತರ ವಿರುದ್ಧ ದೂರು ದಾಖಲಿಸಿಕೊಂಡಿದ್ದೀರಲ್ಲ, ನಿಮಗೆ ನಾಡಿನ ರೈತರಿಗಿಂತ ಓಲೈಕೆ ರಾಜಕಾರಣವೇ ಹೆಚ್ಚಾಯ್ತ ಎಂದು ಕಾರವಾಗಿ ಪ್ರಶ್ನಿಸಿದ್ದಾರೆ.
ಅನ್ನ ಹಾಕುವ ಕೈಗಳಿಗೆ ಕೋಳ ತೊಡಿಸುವ ಕಾಂಗ್ರೆಸ್ ಸರ್ಕಾರದ ಪಾಪದ ಕೊಡ ತುಂಬಿದೆ. ಅನ್ನದಾತರ ಶಾಪ ಈ ಸರ್ಕಾರವನ್ನು ಸುಡುವ ದಿನ ದೂರವಿಲ್ಲ ಎಂದು ಅಶೋಕ್ ಎಚ್ಚರಿಸಿದ್ದಾರೆ.