ಕಳ್ಳಸಾಗಣೆ ಪ್ರಕರಣ: ಡಿಜಿಪಿ ರಾಮಚಂದ್ರ ರಾವ್ ವಿರುದ್ಧ ತನಿಖೆಗೆ ಆದೇಶ

Spread the love

ಬೆಂಗಳೂರು: ಸುಮಾರು 15 ಕೋಟಿ ರೂಪಾಯಿ ಮೌಲ್ಯದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ಕನ್ನಡದ ನಟಿ ರನ್ಯಾ ರಾವ್ ಅವರ ಮಲತಂದೆ ಡಿಜಿಪಿ ರಾಮಚಂದ್ರ ರಾವ್ ಅವರ ವಿರುದ್ಧ ತನಿಖೆಗೆ ಸರ್ಕಾರ ಆದೇಶಿಸಿದೆ.

ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡಿದ ನಟಿ ರನ್ಯಾಗೆ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಪ್ರೋಟೋಕಾಲ್ ನೀಡಿದ ಬಗ್ಗೆ ತನಿಖೆ ನಡೆಸಿ ಒಂದು ವಾರದಲ್ಲಿ ವರದಿ ಸಲ್ಲಿಸುವಂತೆ ಕರ್ನಾಟಕ ಗೃಹ ಇಲಾಖೆ ಆದೇಶಿಸಿದೆ.

ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಹಿರಿಯ ಐಪಿಎಸ್ ಅಧಿಕಾರಿ ರಾಮಚಂದ್ರ ರಾವ್ ಪಾತ್ರದ ಬಗ್ಗೆ ತನಿಖೆ ನಡೆಸಲು ಹಿರಿಯ ಐಪಿಎಸ್ ಅಧಿಕಾರಿ ಗೌರವ್ ಗುಪ್ತಾ ಅವರನ್ನು ತನಿಖಾ ಅಧಿಕಾರಿಯಾಗಿ ನೇಮಿಸಲಾಗಿದೆ.

ತನಿಖಾಧಿಕಾರಿಯು ತಕ್ಷಣ ತನಿಖೆಯನ್ನು ಪ್ರಾರಂಭಿಸಿ ಒಂದು ವಾರದೊಳಗೆ ತನಿಖಾ ವರದಿಯನ್ನು ಸಲ್ಲಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಪೊಲೀಸ್ ಮಹಾನಿರ್ದೇಶಕರು ಮತ್ತು ಪೊಲೀಸ್ ಮಹಾನಿರ್ದೇಶಕರು (ಪೊಲೀಸ್ ಪಡೆಗಳ ಮುಖ್ಯಸ್ಥರು) ಮತ್ತು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿಗೆ ಈ ತನಿಖೆಗೆ ಅಗತ್ಯವಿರುವ ಎಲ್ಲಾ ದಾಖಲೆಗಳು ಮತ್ತು ಸಹಾಯವನ್ನು ಒದಗಿಸುವಂತೆ ಸೂಚಿಸಲಾಗಿದೆ.

ದುಬೈನಿಂದ ಬೆಂಗಳೂರಿಗೆ ಚಿನ್ನ ಸಾಗಿಸುವಾಗ ಶಿಷ್ಟಾಚಾರ ದುರ್ಬಳಕೆ ಆಗಿರುವುದರಲ್ಲಿ ರಾಮಚಂದ್ರ ರಾವ್ ಅವರ ಕೈವಾಡ ಇದೆಯೇ ಎಂಬ ಬಗ್ಗೆ ಒಂದು ವಾರದ ಒಳಗೆ ತನಿಖೆ ನಡೆಸಲು ಸೂಚಿಸಲಾಗಿದೆ.

ರಾಮಚಂದ್ರ ರಾವ್ ಪ್ರಸ್ತುತ ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ರನ್ಯಾ ರಾವ್ ಅವರು ತಾವು ಐಪಿಎಸ್ ಅಧಿಕಾರಿಯ ಪುತ್ರಿ ಎಂದು ಹೇಳಿಕೊಂಡು ವಿಮಾನ ನಿಲ್ದಾಣಗಳಲ್ಲಿ ಶಿಷ್ಠಾಚಾರ ನಿಮಯ ಉಲ್ಲಂಘನೆ ಮಾಡಿ, ತಪಾಸಣೆಯಿಂದ ತಪ್ಪಿಸಿಕೊಳ್ಳುತ್ತಿದ್ದರು ಎಂದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಗೌರವ್ ಗುಪ್ತಾ ಸಮಿತಿ ರಚಿಸಿ ತನಿಖೆಗೆ ಆದೇಶ ನೀಡಲಾಗಿದೆ.