ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಡ್ಡಗಾಡು ಪ್ರದೇಶ, ದುರ್ಗಮ ಪ್ರದೇಶದ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡುವ ಆರೋಗ್ಯ ಸಂಪರ್ಕ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಶ್ರೀರೂಪ ಅವರು ಮಲೆ ಮಹದೇಶ್ವರಬೆಟ್ಟದಲ್ಲಿ ಇಂದು ಉದ್ಘಾಟಿಸಿದರು.
ಮಲೆ ಮಹದೇಶ್ವರ ಬೆಟ್ಟದ ಪ್ರಾಥಮಿಕ ಆರೋಗ್ಯ ಕೇಂದ್ರ ಆವರಣದಲ್ಲಿ ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜೆಎಸ್ಎಸ್ ಮಹಾವಿದ್ಯಾಪೀಠ, ಜೆಎಸ್ಎಸ್ ನರ್ಸಿಂಗ್ ಸ್ಕೂಲ್ ಮತ್ತು ಕಾಲೇಜು ಸಹಯೋಗದಲ್ಲಿ ಆಯೋಜಿಸಲಾಗಿದ್ದ ಆರೋಗ್ಯ ಸಂಪರ್ಕ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಚಾಲನೆ ನೀಡಿದರು.
ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಸಮರ್ಪಕ ಆರೋಗ್ಯ ಸೇವೆಗಾಗಿ ಇಲ್ಲಿನ ನಿವಾಸಿಗಳು ತೊಂದರೆ ಅನುಭವಿಸುತ್ತಿದ್ದಾರೆ. ತುರ್ತು ಸಂದರ್ಭಗಳಲ್ಲಿ ನೆರವಾಗಬೇಕಿದೆ. ಜೆಎಸ್ಎಸ್ ಮಹಾವಿದ್ಯಾಪೀಠ ದವರ ಸಹಯೋಗದಲ್ಲಿ ಪ್ರತಿ ಗ್ರಾಮಗಳಿಗೂ ಭೇಟಿ ನೀಡಿ ತಪಾಸಣೆ ನಡೆಸಿ ಅಗತ್ಯ ಗುಣಮಟ್ಟದ ಆರೋಗ್ಯ ಸೇವೆ ನೀಡಲು ಕ್ರಮ ವಹಿಸಲಾಗುತ್ತಿದೆ. ಹಾಡಿಗಳ ಪ್ರತಿಯೊಬ್ಬರು ಇದರ ಸದ್ಬಳಕೆ ಮಾಡಿಕೊಂಡು ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಶ್ರೀರೂಪ ತಿಳಿಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜೇಶ್ ಮಾತನಾಡಿ ಜಿಲ್ಲಾಧಿಕಾರಿ ಶ್ರೀರೂಪ ಅವರು ಗುಡ್ಡಗಾಡು ಪ್ರದೇಶ ಹಾಗೂ ದುರ್ಗಮ ಪ್ರದೇಶದಲ್ಲಿರುವ ನಿವಾಸಿಗಳಿಗೆ ವಾರದಲ್ಲಿ ಕನಿಷ್ಠ ಎರಡು ದಿನಗಳ ಕಾಲ ವೈದ್ಯಕೀಯ ಸೇವೆ ಒದಗಿಸುವ ನಿಟ್ಟಿನಲ್ಲಿ ಹೊಸ ಕಾರ್ಯಕ್ರಮ ಜಾರಿಗೆ ತಂದಿರುವುದು ಈ ಭಾಗದ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಹೇಳಿದರು.
ಮಲೆ ಮಹದೇಶ್ವರ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ.ಇ. ರಘು, ತಾಲೂಕು ಆರೋಗ್ಯಾಧಿಕಾರಿ ಡಾ. ಪ್ರಕಾಶ್, ವೈದ್ಯಾಧಿಕಾರಿಗಳಾದ ಡಾ. ಉಲ್ಲಾಸ್, ಅನುರಾಗ, ಜೆಎಸ್ಎಸ್ ಮಹಾವಿದ್ಯಾಪೀಠದ ವಿನಯ್, ನರ್ಸಿಂಗ್ ಕಾಲೇಜು ಪ್ರಾಂಶುಪಾಲರಾದ ಉಷಾ, ಇನ್ನಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.
