ಸರಕಾರ ದಿವಾಳಿ;ಉಪ ಚುನಾವಣೆ ನಂತರ ಗೃಹಲಕ್ಷ್ಮಿ ಬಂದ್ -ದೇವೇಗೌಡರು

Spread the love

ಚನ್ನಪಟ್ಟಣ: ರಾಜ್ಯ ಕಾಂಗ್ರೆಸ್ ಸರ್ಕಾರದ ಖಜಾನೆ ದಿವಾಳಿಯಾಗಿದೆ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಗೃಹಲಕ್ಷ್ಮಿ ಹಣವಿಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಟೀಕಿಸಿದರು.

ಚುನಾವಣೆ ದೃಷ್ಟಿಯಿಂದ ಚನ್ನಪಟ್ಟಣ ಕ್ಷೇತ್ರದ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಮಾತ್ರ ಹಣ ಜಮೆ ಮಾಡಿದ್ದಾರೆ ಎಂದು ಆರೋಪಿಸಿದರು.

ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಅವರ ಪರವಾಗಿ ಪ್ರಚಾರ ನಡೆಸಿದ ಗೌಡರು; ಕಾಂಗ್ರೆಸ್ ಸರಕಾರ ಚುನಾವಣಾ ಅಕ್ರಮಗಳನ್ನು ಎಸಗುತ್ತಿದೆ. ಅದಕ್ಕೆ ಗ್ಯಾರಂಟಿ ಯೋಜನೆಗಳನ್ನು ಕೂಡ ಬಳಕೆ ಮಾಡಿಕೊಳ್ಳುತ್ತಿದೆ ಎಂದು ದೂರಿದರು.

ಈ ಸರಕಾರ ದಿವಾಳಿಯಾಗಿದೆ. ಚುನಾವಣೆ ಮುಗಿದ ಮೇಲೆ‌ ಹಣ ಜಮೆ ಮಾಡುವುದನ್ನು ಮತ್ತೆ ನಿಲ್ಲಿಸುತ್ತಾರೆ ಬೆಂಗಳೂರಿನಲ್ಲಿ ರಸ್ತೆ ಗುಂಡಿ ಮುಚ್ಚೋಕೆ ಕಾಸಿಲ್ಲ, ಜನ ಉಗಿಯುತ್ತಿದ್ದಾರೆ ಎಂದು ಟೀಕಿಸಿದರು.

ನಿಖಿಲ್ ಅವರನ್ನು ವಿಧಾನಸೌಧಕ್ಕೆ ಕಳಿಸಿ. ಆ ಹುಡುಗ ನಿಮ್ಮ ಪರವಾಗಿ ದನಿ ಎತ್ತುತ್ತಾನೆ. ಇದರಲ್ಲಿ ನಿಮಗೆ ಯಾವುದೇ ಸಂಶಯ ಬೇಡ , ನಾನು ಒಬ್ಬ ರೈತನ ಮಗ, ನೀವು ರೈತನ ಮಕ್ಕಳು. ಇಗ್ಗಲೂರು ಅಣೆಕಟ್ಟು ಕಟ್ಟಿಸಿದ್ದು ಈ ದೇವೇಗೌಡ, ಬದುಕಿದ್ದಾನೆ. ಹದಿನೇಳು ಕೆರಗಳಿಗೆ ನೀರು ಹರಿಸಿದ್ದ ವ್ಯಕ್ತಿಯನ್ನು ಭಗೀರಥ ಅಂತಾರೆ. ಈ ಅಣೆಕಟ್ಟು ಕಟ್ಟಿಲ್ಲ ಅಂದರೆ ನೀರು ಹರಿಸೋಕೆ ಸಾಧ್ಯ ಆಗುತ್ತಿತ್ತಾ ಎಂದು ಪ್ರಶ್ನಿಸಿದರು.

ಚನ್ನಪಟ್ಟಣ ಕ್ಷೇತ್ರದಲ್ಲಿ ಕುಮಾರಸ್ವಾಮಿ ಅವರು 1600 ಕೋಟಿಯಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಈಗಿರುವ ಸರ್ಕಾರ ಸಣ್ಣಪುಟ್ಟ ಕೆಲಸ ಮಾಡುತ್ತಿದೆ. ಪ್ರತಿಗ್ರಾಮಕ್ಕೆ ನೀರಾವರಿ ಸೌಲಭ್ಯ ಕೋಡಬೇಕಾದ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಅವರು ಇಷ್ಟು ಹಣವನ್ನು ಕ್ಷೇತ್ರಕ್ಕೆ ಕೊಟ್ಟರು. ರಾಷ್ಟ್ರದ ಹಿತದೃಷ್ಟಿಯಿಂದ, ಮೋದಿ ಅವರ ಒತ್ತಾಸೆಯಿಂದ ಕುಮಾರಸ್ವಾಮಿ ಅವರು ದೆಹಲಿಗೆ ಹೋಗಿ ಸಚಿವರಾಗಿದ್ದಾರೆ ಎಂದು ಅವರು ಹೇಳಿದರು.

ಕುಮಾರಸ್ವಾಮಿ ಅವರು ಚನ್ನಪಟ್ಟಣ ಕ್ಷೇತ್ರಕ್ಕೆ ರಾಜೀನಾಮೆ ಕೊಟ್ಟ ಮೇಲೆ ಯಾರು ಅಭ್ಯರ್ಥಿಯಾಗಿ ನಿಲ್ಲಬೇಕು ಎಂದು ಚರ್ಚೆ ನಡೆಯಿತು. ಡಿ.ಕೆ.ಶಿವಕುಮಾರ್ ನಾನೇ ಅಭ್ಯರ್ಥಿ ಎಂದು ಹೇಳಿಕೊಂಡು ಓಡಾಡಿದರು. ಹಾಗಂತ ಎಲ್ಲರನ್ನೂ ನಂಬಿಸಿದರು. ನಾಮಪತ್ರ ಸಲ್ಲಿಸುವ ಒಂದು ದಿನಕ್ಕೆ ಮೊದಲು ಇದ್ದಕ್ಕಿದ್ದ ಹಾಗೆ ತಮ್ಮ ತೀರ್ಮಾನ ಬದಲಾಯಿಸಿ ಮತ್ತೊಬ್ಬ ಸ್ನೇಹಿತರನ್ನು ನಿಲ್ಲಿಸಿದ್ದಾರೆ. ಬಿಜೆಪಿಯಿಂದ ಅಭ್ಯರ್ಥಿಯನ್ನು ಹೈಜಾಕ್ ಮಾಡಿಕೊಂಡು ಹೋಗಿದ್ದಾರೆ ಎಂದು ದೇವೇಗೌಡರು ಟೀಕಿಸಿದರು.