ಹಾಸನ: ಗಣೇಶ ವಿಸರ್ಜನೆ ಸಂದರ್ಭದಲ್ಲಿ ಸಂಭವಿಸಿದ ಭೀಕರ ಅಪಘಾತದ ಹಿನ್ನೆಲೆಯಲ್ಲಿ ಮೃತರು ಮತ್ತು ಗಾಯಾಳುಗಳ ಕುಟುಂಬಕ್ಕೆ ಸ್ಪಂದಿಸುವಂತೆ ಸಿಎಂ ಮತ್ತು ಜಿಲ್ಲಾ ಉಸ್ತುವಾರಿ ಸಚಿವರು
ಸೂಚಿಸಿದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಂಡಿತು.
ಸಿದ್ದರಾಮಯ್ಯ ಹಾಗೂ ಕೃಷ್ಣಬೈರೇಗೌಡರ ಸೂಚನೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ರಾತ್ರಿಯಿಡೀ ಅಗತ್ಯ ಕ್ರಮ ತೆಗೆದುಕೊಂಡಿದೆ.
ಘಟನೆ ನಡೆದ ಕ್ಷಣದಿಂದ ರಾತ್ರಿಯಿಡೀ ಅಧಿಕಾರಿಗಳ ತಂಡ-ವೈದ್ಯರ ತಂಡಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದು ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡರು ತೀವ್ರ ನಿಗಾ ವಹಿಸಿದ್ದಾರೆ.
ಮೃತರ ಕುಟುಂಬಗಳ ಜೊತೆ ಸತತ ಸಂಪರ್ಕದಲ್ಲಿದ್ದ ಅಧಿಕಾರಿಗಳು ಮೃತರ ಮರಣೋತ್ತರ ಪರೀಕ್ಷೆ ರಾತ್ರಿಯೇ ನಡೆಯಲು ಅಗತ್ಯ ಕ್ರಮ ಕೈಗೊಂಡರು. ವೈದ್ಯರ ತಂಡ ಬೆಳಗಿನತನಕ ಕಾಯದೇ ರಾತ್ರಿಯೇ ಮರಣೋತ್ತರ ಪರೀಕ್ಷೆ ಮತ್ತು ಕಾನೂನು ಪ್ರಕ್ರಿಯೆ ಮುಗಿಸಿ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದೆ.
ಗಾಯಾಳುಗಳ ಚಿಕಿತ್ಸೆಗೆ ಖುದ್ದಾಗಿ ಜಿಲ್ಲಾ ವೈದ್ಯಾಧಿಕಾರಿಗಳೇ ಉಸ್ತುವಾರಿ ವಹಿಸಿದ್ದು, ಅಗತ್ಯ ವೈದ್ಯರ ತಂಡವನ್ನು ರಚಿಸಿದ್ದಾರೆ. ಅಗತ್ಯವಾದ ಎಲ್ಲಾ ಆಧುನಿಕ ಚಿಕಿತ್ಸಾ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ.
ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ವೈದ್ಯಾಧಿಕಾರಿಯವರ ಜೊತೆ ನಿರಂತರ ಸಂಪರ್ಕದಲ್ಲಿರುವ ಉಸ್ತುವಾರಿ ಸಚಿವರು ಆಸ್ಪತ್ರೆಗಳಿಗೆ ಭೇಟಿ ನೀಡಿ,ಮೃತರ ಕುಟುಂಬದವರಿಗೆ ಸಾಂತ್ವಾನ ಹೇಳಿದ್ದಾರೆ.