ಮೈಸೂರು: ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿ ಮಾಡಿದ ಆರೋಪದ ಮೇಲೆ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ಸೇರಿ ಎಂಟು ಮಂದಿಯನ್ನು ಹುಣಸೂರು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಆರೋಪಗಳನ್ನು ಬಂಧಿಸಿ, ಎರಡು ಕಾರುಗಳನ್ನು ವಶಕ್ಕೆ ಪಡೆದಿದ್ದಾರೆ.
ತಾಲೂಕಿನ ಕಟ್ಟೆಮಳಲವಾಡಿಯಲ್ಲಿ
ಹಿಂದೂ ರಾಷ್ಟ್ರೀಯ ರಕ್ಷಣಾ ವೇದಿಕೆ ಅಧ್ಯಕ್ಷ ಬೆಂಗಳೂರು ಉತ್ತರಹಳ್ಳಿಯ ರಾಮಕೃಷ್ಣ ಮತ್ತು ಬೆಂಗಳೂರಿನ ವಿವಿಧ ಬಡಾವಣೆ ನಿವಾಸಿಗಳಾದ ಶಿವಕುಮಾರ್, ಲಿಂಗರಾಜು, ಕಿಶೋರ್, ಪ್ರೇಮಕುಮಾರ್, ಪುಷ್ಪಲತಾ ಹಾಗೂ ಕೆ.ಆರ್.ಪೇಟೆ ತಾಲೂಕಿನ ಮಾರಗೌಡನಹಳ್ಳಿಯ ಸ್ವಾಮಿ ಎಂಬವರನ್ನು ಬಂಧಿಸಲಾಗಿದೆ.
ತಾಲೂಕಿನ ರತ್ನಪುರಿಯ ಕಿರಣ್ ಎಂಬವರು ಮೊನ್ನೆ ಸಾಲಿಗ್ರಾಮ ತಾಲೂಕಿನ ಚುಂಚನಕಟ್ಟೆ ಸಂತೆಯಲ್ಲಿ ಮೂರು ಜಾನುವಾರುಗಳನ್ನು ಖರೀದಿಸಿ ವಾಹನದಲ್ಲಿ ಸಾಗಿಸುತ್ತಿದ್ದರು.
ಈ ವೇಳೆ ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದ ಆರೋಪಿಗಳು, ಕಟ್ಟೆಮಳಲವಾಡಿ ಬಳಿ ವಾಹನ ಅಡ್ಡಗಟ್ಟಿ ಕಸಾಯಿಖಾನೆಗೆ ಜಾನುವಾರು ಸಾಗಿಸುತ್ತಿದ್ದೀರಾ ಎಂದು ಚಾಲಕ ಕಿರಣ್‌ನನ್ನು ಬೆದರಿಸಿ 25ಸಾವಿರ ರೂ ನೀಡುವಂತೆ ಧಮ್ಕಿ ಹಾಕಿದ್ದಾರೆ.
ನಾನು ವ್ಯವಸಾಯಕ್ಕಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದೇನೆಂದು ಹೇಳಿದರೂ ಕೇಳದೆ ಕೊನೆಗೆ 20 ಸಾವಿರ ಕೊಟ್ಟರೆ ಬಿಡುತ್ತೇವೆ,ಇಲ್ಲದಿದ್ದರೆ ಪೊಲೀಸರಿಗೆ ಮಾಹಿತಿ ನೀಡುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ.
ಈ ವೇಳೆ ಏನೋ ನಡೆಯುತ್ತಿದೆ ಎಂದು ರಸ್ತೆಯಲ್ಲಿ ಹೋಗುತ್ತಿದ್ದ ಜನ ಧಾವಿಸಿ ವಿಚಾರಿಸಿದ್ದಾರೆ.
ವಿಷಯ ತಿಳಿದು ಜನರೆಲ್ಲ ಆರೋಪಿಗಳ ವಿರುದ್ದ ತಿರುಗಿ ಬಿದ್ದು ತರಾಟೆ ತೆಗೆದುಕೊಂಡು 112 ಗೆ ಮಾಹಿತಿ ನೀಡಿದ್ದಾರೆ.
ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದಾಗ ಇವರ ಬಣ್ಣ ಬಯಲಾಗಿದೆ.
ಈ ಸಂಬಂಧ ಕಿರಣ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆರೋಪಗಳನ್ನು ವಿಚಾರಣೆಗೆ ಒಳಪಡಿಸಲಾಗಿದೆ.
ಅಡಿಷನಲ್ ಎಸ್.ಪಿ.ಮಲ್ಲಿಕ್ ಭೇಟಿ ನೀಡಿ ವಿಚಾರಣೆ ನಡೆಸಿದರು. ಡಿವೈಎಸ್‌ಪಿ ಗೋಪಾಲಕೃಷ್ಣ, ಇನ್ಸ್ಪೆಕ್ಟರ್ ಮುನಿಯಪ್ಪ ಹಾಜರಿದ್ದರು.