ಚಾಮರಾಜನಗರ: ಚಾಮರಾಜನಗರ ತಾಲೂಕಿನ ಹೊಂಗನೂರು ಗ್ರಾಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರವಿದ್ದ ನಾಮಫಲಕಕ್ಕೆ ಕಿಡಿಗೇಡಿಗಳು ಸಗಣಿ ಎರಚಿ ಅಪಮಾನ ಮಾಡಿದ ಘಟನೆ ಬೆಳಕಿಗೆ ಬಂದಿದೆ.
ಗ್ರಾಮದ ಪ್ರಮುಖ ಸ್ಥಳದಲ್ಲಿದ್ದ ಅಂಬೇಡ್ಕರ್ ಭಾವಚಿತ್ರ ಹೊಂದಿರುವ ನಾಮಫಲಕಕ್ಕೆ ದುಷ್ಕರ್ಮಿಗಳು ಸಗಣಿ ಎರಚಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.
ಘಟನೆ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಗ್ರಾಮಸ್ಥರು ಕೃತ್ಯವನ್ನು ಖಂಡಿಸಿ, ತಪ್ಪಿತಸ್ಥರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿದರು.
ಇತ್ತೀಚೆಗಷ್ಟೇ ಯಳಂದೂರು ತಾಲೂಕಿನ ಮಸಣಾಪುರ ಗ್ರಾಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ಜಿಲ್ಲೆಯಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದ ಬೆನ್ನಲ್ಲೇ, ಇದೀಗ ಹೊಂಗನೂರಿನಲ್ಲೂ ಇದೇ ರೀತಿಯ ಘಟನೆ ಸಂಭವಿಸಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.
ಘಟನೆಯ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕೃತ್ಯ ಎಸಗಿರುವವರ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.
ತಪ್ಪಿತಸ್ಥರನ್ನು ಶೀಘ್ರವಾಗಿ ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಗ್ರಾಮಸ್ಥರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಆಗ್ರಹಿಸಿದ್ದಾರೆ. ಈ ಘಟನೆ ಬೆಳಕಿಗೆ ಬಂದ ಕೂಡಲೇ ಗ್ರಾಮದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣ ವಾಗಿತ್ತು.
