ವಿದ್ಯಾರ್ಥಿ ನಿಲಯಗಳಿಗೆ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಟಿ. ಶ್ಯಾಮ ಭಟ್ ಭೇಟಿ

Spread the love

ಮೈಸೂರು,ಮಾ.1: ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಟಿ. ಶ್ಯಾಮ ಭಟ್ ಅವರು ಮೈಸೂರಿನ ವಿವಿಧ ವಿದ್ಯಾರ್ಥಿನಿಲಯಗಳಿಗೆ ಭೇಟಿನೀಡಿದರು.

ವಿದ್ಯಾರ್ಥಿನಿಲಯಗಳಲ್ಲಿನ ಸ್ವಚ್ಚತೆ ಮತ್ತಿತರ ವಿಚಾರಗಳ ಬಗ್ಗೆ ಪರಿಶೀಲನೆ ನಡೆಸಿದರು.

ಜಿಲ್ಲಾ ಪಂಚಾಯತ್ ಬಳಿಯ ಡಿ.ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ, ಡಾ.ಬಿ.ಆರ್. ಅಂಬೇಡ್ಕರ್ ಸರ್ಕಾರಿ ವೃತ್ತಿಪರ ಕಾಲೇಜು ಬಾಲಕರ ವಿದ್ಯಾರ್ಥಿ ನಿಲಯ ಹಾಗೂ ಚಾಮುಂಡೇಶ್ವರಿ ನಗರದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಸರ್ಕಾರಿ ವೃತ್ತಿಪರ ನಿಲಯ ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಟಿ. ಶ್ಯಾಮ ಭಟ್ ಹಾಗೂ ಸದಸ್ಯರಾದ ಎಸ್. ಕೆ. ವಂಟಿಗೋಡಿ ಅವರು ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಅಡುಗೆ ಮನೆಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಬೆಳಿಗ್ಗೆ ಸಿದ್ಧಪಡಿಸಿದ್ದ ಉಪಹಾರದ ಬಗ್ಗೆ ಮಾಹಿತಿ ಪಡೆದುಕೊಂಡು ವಿದ್ಯಾರ್ಥಿಗಳಿಗೆ ಶುಚಿ ಹಾಗೂ ರುಚಿಯಾದ ಆಹಾರ ನೀಡಬೇಕು ಎಂದು ವಾರ್ಡನ್ ಗೆ ಸೂಚಿಸಿದರು.

ವಿದ್ಯಾರ್ಥಿಗಳ ಬಳಿ ಮೆಸ್ ಸಮಿತಿ ರಚನೆಯಾಗಿರುವ ಬಗ್ಗೆ ಮಾಹಿತಿ ಪಡೆದುಕೊಂಡರು. ಮೆಸ್ ಸಮಿತಿಯು ಪ್ರತಿ ದಿನ ಆಹಾರ ಸಾಮಗ್ರಿಗಳನ್ನು ಅಡುಗೆ ಮಾಡುವ ಸಿಬ್ಬಂದಿಗಳಿಗೆ ನೀಡುವಾಗ ಪರಿಶೀಲನೆ ನಡೆಸಬೇಕು. ಯಾವುದೇ ತೊಂದರೆ ಇದ್ದಲ್ಲಿ ಮೇಲಾಧಿಕಾರಿಗಳ ಗಮನಕ್ಕೆ ತರಬೇಕು ಎಂದು ಸೂಚಿಸಿದರು.

ಅಡುಗೆ ತಯಾರಿಸುವ ಸಿಬ್ಬಂದಿ, ಸ್ವಚ್ಛತಾ ಸಿಬ್ಬಂದಿಗಳ ಜೊತೆ ಮಾತನಾಡಿ ಪ್ರತಿ ಮಾಹೆ ಸಂಬಳ ದೊರಕುತ್ತಿರುವ ಬಗ್ಗೆ ಖಾತ್ರಿ ಪಡೆಸಿಕೊಂಡ ಶ್ಯಾ‍ಮ್ ಭಟ್ ಅವರು, ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಆದೇಶಿಸಿದರು.

ವಿದ್ಯಾರ್ಥಿಗಳ ಕೊಠಡಿಗೆ ತೆರಳಿ ಅಲ್ಲಿನ ಸೌಲಭ್ಯಗಳನ್ನು ವೀಕ್ಷಿಸಿದರು.ಹಾಸ್ಟೆಲ್ ಗಳಲ್ಲಿ ವಿದ್ಯಾರ್ಥಿಗಳಿಗೆ ಸೊಳ್ಳೆ ಪರದೆಗಳು ಹಾಗೂ ಚಳಿಗಾಲದಲ್ಲಿ ಗೀಸರ್ ಅವಶ್ಯಕತೆ ಇದ್ದು, ಈ ಕುರಿತು ಜಿಲ್ಲಾ ಪಂಚಾಯತ್ ಅಥವಾ ಜಿಲ್ಲಾಡಳಿತದೊಂದಿಗೆ ಚರ್ಚಿಸುವುದಾಗಿ ಭರವಸೆ ನೀಡಿದರು.

ಇಂಜಿನಿಯರಿಂಗ್ ಹಾಗೂ ವೃತ್ತಿಪರ ಕೋರ್ಸ್ ಗಳಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳ ದಾಖಲಾತಿ ಎರಡು ಹಾಸ್ಟೆಲ್ ಗಳಲ್ಲಿ ಹೆಚ್ಚಿದ್ದು, ಶೌಚಾಲಯಗಳ ಅವಶ್ಯಕತೆ ಇರುವ ಕುರಿತು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಈ ವೇಳೆ ಹಾಜರಾತಿ ಹಾಗೂ ಸ್ಟಾಕ್ ರಿಜಿಸ್ಟರ್ ಗಳನ್ನು ಸಹ ವೀಕ್ಷಿಸಿದರು.

ಈ ಸಂದರ್ಭದಲ್ಲಿ ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಅರುಣ್ ಪೂಜರ್, ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಂಗಾಧರ್ ಸ್ವಾಮಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಮಂಜುಳ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಸಿದ್ದಲಿಂಗೇಶ್ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು ಹಾಜರಿದ್ದರು.