ಬೆಂಗಳೂರು: ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿ ಹಗರಣ ಪ್ರಕರಣದಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಸಂಕಷ್ಟ ಎದುರಾಗಿದೆ.
ರೋಹಿಣಿ ಸಿಂಧೂರಿ ವಿರುದ್ಧ ಎಫ್ಐಆರ್ ದಾಖಲಿಸಿ ಲೋಕಾಯುಕ್ತ ಪೊಲೀಸರು ತನಿಖೆ ನಡೆಸಲು ಅನುಮತಿ ನೀಡಬೇಕೆಂದು ಉಚ್ಚ ನ್ಯಾಯಾಲಯ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಮೈಸೂರು ಜಿಲ್ಲಾಧಿಕಾರಿ ಆಗಿದ್ದ ಸಂದರ್ಭದಲ್ಲಿ ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿಯಲ್ಲಿ ನಿಯಮ ಉಲ್ಲಂಘಿಸಿದ್ದಾರೆ ಎಂದು ಅವರ ವಿರುದ್ಧ ನ್ಯಾಯಾಲಯದಲ್ಲಿ ದೂರು ದಾಖಲಿಸಲಾಗಿತ್ತು.
ವಾದ ಮತ್ತು ಪ್ರತಿವಾದ ಆಲಿಸಿ ತೀರ್ಪನ್ನು ಕಾಯ್ದಿರಿಸಿದ್ದ ಉಚ್ಚ ನ್ಯಾಯಾಲಯ ಏಕ ಸದಸ್ಯ ಪೀಠದ ನ್ಯಾಯಮೂರ್ತಿ ನಾಗಪ್ರಸನ್ನ ಅವರು ರೋಹಿಣಿ ಸಿಂಧೂರಿ ವಿರುದ್ಧ ಭ್ರಷ್ಟಾಚಾರ ತಡೆಗಟ್ಟುವಿಕೆ ಕಾಯ್ದೆ, 1988 ರ ಸೆಕ್ಷನ್ 17(ಎ) ಅಡಿಯಲ್ಲಿ ಎಫ್ಐಆರ್ ದಾಖಲಿಸಿ ತನಿಖೆಗೆ ಅನುಮತಿ ನೀಡುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನಿಶ್ ಅವರಿಗೆ ಸೂಚಿಸಿದ್ದಾರೆ.
ಇದೇ ವೇಳೆ ಹಾಲಿ ಕರ್ನಾಟಕ ಕೈಮಗ್ಗ ನಿಗಮದ ವ್ಯವಸ್ಥಾಪಕ ನಿರ್ದೇಶಕರ ವಿರುದ್ಧ ತನಿಖೆಗೆ ಉಚ್ಚ ನ್ಯಾಯಾಲಯ ಹಸಿರು ನಿಶಾನೆ ತೋರಿದೆ.
ಈ ಹಿಂದೆ ಬಟ್ಟೆ ಬ್ಯಾಗ್ ಖರೀದಿಯಲ್ಲಿ ನಿಯಮ ಉಲ್ಲಂಘಿಸಿದ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅವರ ವಿರುದ್ಧ ಇಲಾಖಾ ತನಿಖೆಗೆ ಆದೇಶಿಸಿತ್ತು.
ರೋಹಿಣಿ ಸಿಂಧೂರಿ ಅವರು ನಿಯಮಗಳನ್ನು ಮೀರಿ ಇಲಾಖೆ ಅನುಮತಿ ಪಡೆಯದೆ ದುಡ್ಡು ಖರ್ಚು ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು.
ಈ ಕುರಿತ ಪ್ರಾಥಮಿಕ ತನಿಖೆಯಲ್ಲಿ ಅವರು ಅಸಮರ್ಪಕ ಉತ್ತರ ನೀಡಿದ್ದರು ಮತ್ತು ಯಾವುದೇ ದಾಖಲೆ ನೀಡಿರಲಿಲ್ಲ.ಬಟ್ಟೆ ಬ್ಯಾಗ್ ಖರೀದಿಯಲ್ಲಿ 9.ರೂಗೆ ಆಗುವ ಒಂದು ಬ್ಯಾಗ್ಗೆ 52ರೂ ಕೊಟ್ಟು ಖರೀದಿ ಮಾಡಿದ್ದಾರೆ. ಖರೀಗೆ ಒಟ್ಟು 7 ಕೋಟಿ ಖರ್ಚು ಮಾಡಿದ್ದಾರೆ. ಖರೀದಿಯಲ್ಲಿ ಕಿಕ್ ಬ್ಯಾಕ್ ನಡೆದಿದೆ ಎಂಬ ಆರೋಪ ಅವರ ಮೇಲಿದೆ.
ಯಾವುದೇ ಜಿಲ್ಲಾಧಿಕಾರಿಗೆ ಆಡಳಿತಾತ್ಮಕವಾಗಿ 2 ಕೋಟಿ ರೂಪಾಯಿಗೆ ಅನುಮೋದನೆ ನೀಡಲು ಅವಕಾಶ ಇದೆ. ಆದರೆ ರೋಹಿಣಿ ಅವರು 7 ಕೋಟಿ ರೂಪಾಯಿ ಅಧಿಕ ಮೊತ್ತಕ್ಕೆ ಅನುಮೋದನೆ ನೀಡಿದ್ದಾರೆ ಎಂದು ಸಾ.ರಾ.ಮಹೇಶ್ ನೇರ ಆರೋಪ ಮಾಡಿದ್ದರು.
ಮೈಸೂರು ಮೂಲದ ಎನ್.ಆರ್.ರವಿ ಚಂದ್ರೇಗೌಡ ಎಂಬವರು ರೋಹಿಣಿ ಸಿಂಧೂರಿ ವಿರುದ್ಧ ತನಿಖೆ ನಡೆಸಬೇಕೆಂದು ಕೋರಿ ಉಚ್ಚ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು.
