ಮೈಸೂರು: ಜಿಲ್ಲಾಡಳಿತ ವತಿಯಿಂದ ಆಗಸ್ಟ್ 15 ರಂದು ನಡೆಯುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಸಂಬಂಧಪಟ್ಟ ಇಲಾಖೆಗಳು ಜವಾಬ್ದಾರಿಯಿಂದ ಕೆಲಸ ನಿಭಾಯಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಆಚರಿಸುವ ಬಗ್ಗೆ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು.
ಪ್ರತಿ ವರ್ಷದಂತೆ ಈ ಬಾರಿಯೂ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಯಾವುದೇ ಲೋಪದೋಷಗಳಿಲ್ಲದೆ ನಡೆಸುವಲ್ಲಿ ಎಲ್ಲ ಇಲಾಖೆಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ಅವರು ತಿಳಿಸಿದರು.
ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು ಸ್ವಾಗತ, ವೇದಿಕೆ ವ್ಯವಸ್ಥೆ, ಪಥಸಂಚಲನ, ಬಹುಮಾನ ಆಯ್ಕೆ, ಉಪಹಾರ, ಕುಡಿಯುವ ನೀರಿನ ವ್ಯವಸ್ಥೆಯನ್ನು ಸರಿಯಾಗಿ ನಿರ್ವಹಿಸುವಂತೆ ಆಯಾಯ ಸಮಿತಿಗಳಿಗೆ ಅವರು ಸೂಚಿಸಿದರು.
ಅಂದು ಕರ್ನಾಟಕದ ಅಸ್ಮಿತೆಯನ್ನು ಬಿಂಬಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಸಂಜೆ ಕಲಾಮಂದಿರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಸಾಂಸ್ಕೃತಿಕ ಸೌರಭ ಕಾರ್ಯಕ್ರಮ ಹಮ್ಮಿಕೊಂಡಿದ್ದು ಎಲ್ಲಾ ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಾಗಬೇಕು ಎಂದು ಸೂಚಿಸಿದರು.
ಸ್ವಾತಂತ್ರ ದಿನಾಚರಣೆಯ ಹಿಂದಿನ ಒಂದು ದಿನಕ್ಕೆ ಕ್ರೀಡಾಂಗಣದಲ್ಲಿ ಪೂರ್ವಾಭ್ಯಾಸ ಮಾಡುವ ಮಕ್ಕಳಿಗೆ, ಸಿಬ್ಬಂದಿಗಳಿಗೆ ಅಗತ್ಯ ಕುಡಿಯುವ ನೀರು, ಆಹಾರ ನೀಡಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಗಳ ಮುದ್ರಣ, ಕಾರ್ಯಕ್ರಮದ ವೇದಿಕೆ ನಿರ್ಮಾಣ ವ್ಯವಸ್ಥೆ, ಸಾಂಸ್ಕೃತಿಕ ಕಾರ್ಯಕ್ರಮ, ಪಥಸಂಚಲನ, ಉಪಹಾರ ಹಾಗೂ ಕುಡಿಯುವ ನೀರಿನ ವ್ಯವಸ್ಥೆ, ಅಗ್ನಿಶಾಮಕ, ಆಂಬುಲೆನ್ಸ್ ವ್ಯವಸ್ಥೆ ಸೇರಿದಂತೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಅಪರ ಶಿವರಾಜು ತಿಳಿಸಿದರು.
ಬನ್ನಿಮಂಟಪದ ಮೈದಾನದಲ್ಲಿ ಅಂದು ಬೆಳಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸಿ, ಪಥ ಸಂಚಲನ ಗೌರವರಕ್ಷೆ ಸ್ವೀಕರಿಸಲಿದ್ದಾರೆ. ಬಳಿಕ ಸ್ವಾತಂತ್ರ್ಯ ಸಂದೇಶ ನೀಡಲಿದ್ದಾರೆ. ಕಾರ್ಯಕ್ರಮದ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಸಭೆಯಲ್ಲಿ ತಿಳಿಸಿದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ ಸುದರ್ಶನ್, ಡಿವೈಎಸ್ಪಿ ವೀರಣ್ಣ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಟಿ.ಕೆ. ಹರೀಶ್ , ವಿವಿಧ ಸಂಘ ಸಂಸ್ಥೆಯವರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
