ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಯ ವಿರುದ್ಧ ಗ್ರೇಟರ್ ಬೆಂಗಳೂರು ಜನತಾದಳ (ಜಾತ್ಯತೀತ) ಪಕ್ಷದ ಅಧ್ಯಕ್ಷ ಹೆಚ್.ಎಂ. ರಮೇಶ್ ಗೌಡ ನೇತೃತ್ವದಲ್ಲಿ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ದಿನಬಳಕೆಯ ಅಗತ್ಯ ವಸ್ತುಗಳು, ಹಾಲು ಮತ್ತು ಹಾಲಿನ ಉತ್ಪನ್ನಗಳು ಹಾಗೂ ಬಸ್ ಪ್ರಯಾಣ ದರವನ್ನು ಏಕಾಏಕಿ ಹೆಚ್ಚಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಖಂಡಿಸಿ ಹೋರಾಟ ಹಮ್ಮಿಕೊಳ್ಳಲಾಗಿತ್ತು.
ಪ್ರತಿಭಟನೆ ವೇಳೆ ಮಾತನಾಡಿದ ರಮೇಶ್ ಗೌಡ ಅವರು,ಕರ್ನಾಟಕ ಹಾಲು ಒಕ್ಕೂಟಗಳ ಮಹಾಮಂಡಳಿ ವತಿಯಿಂದ ಹಾಲು, ಮೊಸರು, ತುಪ್ಪ, ಬೆಣ್ಣೆ, ಪನೀರ್ ಸೇರಿದಂತೆ ಇತರೆ ಹಾಲಿನ ಉತ್ಪನ್ನಗಳ ಬೆಲೆಯನ್ನು 8 ರಿಂದ 35 ರೂ ವರೆಗೆ ಹೆಚ್ಚಿಸಿದೆ. ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಬಡ, ಕೆಳ ಮಧ್ಯಮ ಹಾಗೂ ಮಧ್ಯಮ ವರ್ಗದ ಕುಟುಂಬಗಳ ಮೇಲೆ ಈ ಏರಿಕೆ ಮತ್ತಷ್ಟು ಆರ್ಥಿಕ ಹೊರೆ ಹೊರಿಸಿದೆ,ಇದು ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ರೀತಿ ಹಾಲು ಮತ್ತು ಉತ್ಪನ್ನಗಳ ಮೇಲಿನ ಬೆಲೆ ಏರಿಕೆಯಿಂದ ಹೋಟೆಲ್ಗಳು, ಖಾನಾವಳಿಗಳು ಮತ್ತು ಇತರೆ ವಿತರಕರು ತಾವು ತಯಾರಿಸಿ ಒದಗಿಸುವ ಆಹಾರ ಪದಾರ್ಥಗಳ ಬೆಲೆಯನ್ನು ಗಗನಕ್ಕೇರಿಸಿದ್ದಾರೆ ಎಂದು ಅವರು ಕಿಡಿಕಾರಿದರು.
ಇದೇ ವೇಳೆ ರಾಜ್ಯದ ಬಹುತೇಕ ಭಾಗಗಳಲ್ಲಿ ತೀವ್ರ ಬರ ಪರಿಸ್ಥಿತಿ ಉಂಟಾಗಿದ್ದು, ರೈತರು ಹಾಗೂ ಗ್ರಾಮೀಣ ಜನತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕುಡಿಯುವ ನೀರಿನ ಅಭಾವ, ಜಾನುವಾರುಗಳಿಗೆ ಮೇವು ಹಾಗೂ ನೀರಿನ ಕೊರತೆ, ಕೃಷಿ ಉತ್ಪಾದನೆಯಲ್ಲಿ ಕುಸಿತ ಉಂಟಾಗಿದೆ. ಇದರ ಪರಿಣಾಮವಾಗಿ ಅಕ್ಕಿ, ಸಕ್ಕರೆ, ಬೇಳೆಕಾಳುಗಳು ಸೇರಿದಂತೆ ಅಗತ್ಯ ವಸ್ತುಗಳ ಬೆಲೆಗಳು ಏರಿಕೆಯಾಗಿವೆ ಎಂದು ಹೇಳಿದರು.
ಇದರ ಜತೆಗೆ ಸಾರಿಗೆ ನಿಗಮಗಳ ಬಸ್ ಪ್ರಯಾಣ ದರವನ್ನು ಶೇಕಡಾ 23 ರಿಂದ 30 ರವರೆಗೆ ಹೆಚ್ಚಿಸಿರುವುದು ದಿನನಿತ್ಯ ಪ್ರಯಾಣಿಸುವ ಕಾರ್ಮಿಕರು, ವಿದ್ಯಾರ್ಥಿಗಳು, ನೌಕರರು, ಹಿರಿಯ ನಾಗರಿಕರು ಹಾಗೂ ಸಾಮಾನ್ಯ ಜನರ ಮೇಲೆ ಭಾರೀ ಹೊರೆ ಹಾಕಿದೆ. ಸಾರ್ವಜನಿಕ ಸಾರಿಗೆ ವ್ಯವಸ್ಥೆ ಜನಸಾಮಾನ್ಯರ ಜೀವನಾಡಿಯಾಗಿದ್ದು, ದರ ಏರಿಕೆಯಿಂದ ಕುಟುಂಬಗಳ ಮಾಸಿಕ ಖರ್ಚು ಹೆಚ್ಚಾಗಿದೆ ಎಂದು ಅವರು ಹೇಳಿದರು.
ಕೂಡಲೇ ಹಾಲು, ಮೊಸರು, ತುಪ್ಪ, ಬೆಣ್ಣೆ, ಪನೀರ್ ಹಾಗೂ ಇತರೆ ಹಾಲಿನ ಉತ್ಪನ್ನಗಳ ಬೆಲೆ ಏರಿಕೆಯನ್ನು ತಕ್ಷಣ ಹಿಂಪಡೆಯಬೇಕು, ಬಸ್ ಪ್ರಯಾಣ ದರ ಹೆಚ್ಚಳವನ್ನು ಹಿಂಪಡೆಯಬೇಕು,
ಬರಪೀಡಿತ ರೈತರು, ಗ್ರಾಮೀಣ ಕುಟುಂಬಗಳು ಹಾಗೂ ಜಾನುವಾರು ಸಾಕಾಣಿಕೆದಾರರಿಗೆ ವಿಶೇಷ ಪರಿಹಾರ ಕ್ರಮಗಳನ್ನು ಘೋಷಿಸಬೇಕು,
ಬರ ಪೀಡಿತ ಗ್ರಾಮಗಳಲ್ಲಿ ಜನಸಾಮಾನ್ಯರಿಗೆ ಕುಡಿಯುವ ನೀರು ಹಾಗೂ ಜಾನುವಾರುಗಳ ಮೇವು ಮತ್ತು ನೀರಿನ ಲಭ್ಯತೆಯನ್ನು ಖಚಿತಪಡಿಸಬೇಕು,
ಅಕ್ಕಿ, ಸಕ್ಕರೆ, ಬೇಳೆ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ನಿಯಂತ್ರಣಕ್ಕೆ ತುರ್ತು ಕ್ರಮ ಕೈಗೊಳ್ಳಬೇಕು,ಬಡ, ಕೆಳ ಮಧ್ಯಮ ಹಾಗೂ ಮಧ್ಯಮ ವರ್ಗದ ಜನರ ಹಿತಾಸಕ್ತಿಯನ್ನು ರಕ್ಷಿಸುವ ನಿಟ್ಟಿನಲ್ಲಿ ಬೆಲೆ ನಿಯಂತ್ರಣ ಕ್ರಮಗಳನ್ನು ಜಾರಿಗೊಳಿಸಬೇಕು ಎಂದು ರಮೇಶ್ ಗೌಡ ಆಗ್ರಹಿಸಿದರು.
ಒಂದು ವೇಳೆ ರಾಜ್ಯ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಹಿಂಪಡೆಯುವಲ್ಲಿ ವಿಫಲವಾದರೆ, ಜನತಾದಳ (ಜಾತ್ಯತೀತ) ವತಿಯಿಂದ ರಾಜ್ಯದಂತ ತೀವ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಎಂ ಕೃಷ್ಣಾರೆಡ್ಡಿ, ವಿಧಾನ ಪರಿಷತ್ ಸದಸ್ಯ ಜವರಾಯಿ ಗೌಡ, ಮಾಜಿ ಎಂಎಲ್ಸಿಗಳಾದ ಕೆ.ಎ.ತಿಪ್ಪೇಸ್ವಾಮಿ, ಈ. ಕೃಷ್ಣಪ್ಪ, ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಸೇರಿದಂತೆ ನೂರಾರು ಕಾರ್ಯಕರ್ತರು, ಮುಖಂಡರು ಭಾಗವಹಿಸಿದ್ದರು.
ಪ್ರತಿಭಟನೆಯ ನಂತರ ಹೆಚ್.ಎಂ.ರಮೇಶ್ ಗೌಡ ಅವರ ನೇತೃತ್ವದಲ್ಲಿ ಮುಖಂಡರ ನಿಯೋಗವು ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಮನವಿ ಪತ್ರವನ್ನು ಸಲ್ಲಿಸಿತು.
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಅವಿವೇಕಿ, ಹಳ್ಳಿಗುಗ್ಗು ಎಂದು ನಾಲಿಗೆ ಹರಿಯಬಿಟ್ಟಿರುವ ಪ್ರಿಯಾಂಕ್ ಖರ್ಗೆ, ತನ್ನ ವಾಚಾಳಿತನವನ್ನು ಬದಲಿಸಿಕೊಳ್ಳದಿದ್ದರೆ ತಕ್ಕ ಪಾಠ ಕಲಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ರಮೇಶ್ ಗೌಡ ಎಚ್ಚರಿಕೆ ನೀಡಿದರು.
