ಜುಲೈ 19 ರಂದು ಮೈಸೂರಿನಲ್ಲಿ ಸಾಧನಾ ಸಮಾವೇಶ

Spread the love

ಮೈಸೂರು: ಜುಲೈ 19ರಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ರಾಜ್ಯ ಸರ್ಕಾರ ಎರಡು ವರ್ಷಗಳಲ್ಲಿ ಮೈಸೂರು ನಗರಕ್ಕೆ ನೀಡಿದ ಕೊಡುಗೆಗಳು,ಹಲವಾರು ಐತಿಹಾಸಿಕ ಯೋಜನೆಗಳಿಗೆ ಶಂಕುಸ್ಥಾಪನೆಗೆ ಸಂಬಂಧಪಟ್ಟಂತೆ ಬೃಹತ್ ಮಟ್ಟದ ಸಾಧನ ಸಮಾವೇಶ ಹಮ್ಮಿಕೊಳ್ಳಲಾಗಿದೆ

ಈ ಹಿನ್ನೆಲೆಯಲ್ಲಿ ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯನವರ ನೇತೃತ್ವದಲ್ಲಿ ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾಂಗ್ರೆಸ್ ಮುಖಂಡರ ಸಭೆ ನಡೆಸಿ ಚರ್ಚಿಸಲಾಯಿತು.

ಈ ಮಾತನಾಡಿದ ಡಾ. ಯತೀಂದ್ರ ಸಿದ್ದರಾಮಯ್ಯ,ಯಶಸ್ವಿಯಾಗಿ ಎರಡು ವರ್ಷಗಳನ್ನು ಪೂರೈಸಿರುವ ಕಾಂಗ್ರೆಸ್ ಸರ್ಕಾರ ಈಗಾಗಲೇ ಮೂರ್ನಾಲ್ಕು ಭಾಗಗಳಲ್ಲಿ ಕಾಂಗ್ರೆಸ್ ಸರ್ಕಾರದ ಸಾಧನ ಸಮೇವೇಶವನ್ನ ಯಶಸ್ವಿಯಾಗಿ ಪೂರ್ಣಗೊಳಿಸಿದೆ ಎಂದು ಹೇಳಿದರು.

ಜುಲೈ 19ರಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಮೈಸೂರು ನಗರ ಪ್ರಾಂತ್ಯಕ್ಕೆ ಸರ್ಕಾರ ನೀಡಿರುವ ಹಲವಾರು ಐತಿಹಾಸಿಕ ಕೊಡುಗೆಗಳು, ಬಹಳಷ್ಟು ವರ್ಷಗಳಿಂದ ಮೈಸೂರು ನಗರದ ಜನತೆಯ ಬೇಡಿಕೆ ಹಾಗೂ ಜನಕಲ್ಯಾಣ ಕಾರ್ಯಕ್ರಮಗಳಿಗೆ ಮುಖ್ಯಮಂತ್ರಿಗಳು ಹಾಗೂ ಇತರ ಇಲಾಖೆ ಮಂತ್ರಿಗಳು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ತಿಳಿಸಿದರು.

ಮೈಸೂರು ನಗರ ಭಾಗದ ಕೆಆರ್ ವಿಧಾನಸಭಾ ಕ್ಷೇತ್ರ, ಚಾಮರಾಜ ವಿಧಾನಸಭಾ ಕ್ಷೇತ್ರ ಹಾಗೂ ಎನ್ಆರ್. ವಿಧಾನಸಭಾ ಕ್ಷೇತ್ರ ಜನತೆ, ಕಾರ್ಯಕರ್ತರು ಭಾಗವಹಿಸಲಿದ್ದು ವರುಣಾ ವಿಧಾನಸಭಾ ಕ್ಷೇತ್ರದ ಮಹಾಜನತೆ, ಕಾರ್ಯಕರ್ತರು ಹಾಗೂ ಇತರ ಇಲಾಖೆಗಳ ಫಲಾನುಭವಿಗಳು ಭಾಗವಹಿಸಬೇಕೆಂದು ಡಾ. ಯತೀಂದ್ರ ಸಿದ್ದರಾಮಯ್ಯ ಮನವಿ ಮಾಡಿದರು.

ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ. ಬಿ. ಜೆ ವಿಜಯ್ ಕುಮಾರ್, ಮುಖ್ಯಮಂತ್ರಿಗಳು ಮೈಸೂರು ನಗರ ಹಾಗೂ ಜಿಲ್ಲೆಯ ಶಾಸಕರ ಸಭೆ ಕರೆದು ವ್ಯವಸ್ಥಿತ ಸಿದ್ಧತೆ ಮಾಡಲು ಮೈಸೂರು ನಗರ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿಸಿದರು.

ಅವರ ಸೂಚನೆ ಮೇರೆಗೆ ಇದೇ ತಿಂಗಳು 12 ರಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್ ಸಿ ಮಹದೇವಪ್ಪ ಅವರ ನೇತೃತ್ವದಲ್ಲಿ ಮೈಸೂರು ಜಿಲ್ಲೆ ಹಾಗೂ ನಗರ ವ್ಯಾಪ್ತಿಯ ಶಾಸಕರು, ಸಂಸದರು ಹಾಗೂ ಮಾಜಿ ಶಾಸಕರಸಭೆ ಕರೆಯಲಾಗಿದೆ.ಇದು ಸೀಮಿತವಾಗಿ ಮೈಸೂರು ನಗರ ವ್ಯಾಪ್ತಿಗೆ ಸಂಬಂಧಿಸಿದ ಸರ್ಕಾರದ ಸಾಧನಾ ಸಮಾವೇಶ ಮಾತ್ರವೇ ವಿನಃ ರಾಜ್ಯದ ಎರಡು ವರ್ಷದ ಸಾಧನ ಸಮಾವೇಶವಲ್ಲ ಎಂದು ಸ್ಪಷ್ಟಪಡಿಸಿದರು.

ಬಹಳ ವರ್ಷಗಳ ಮೈಸೂರು ಭಾಗದ ಕಾಂಗ್ರೆಸ್ ಕಾರ್ಯಕರ್ತರ ಬಹುದೊಡ್ಡ ಕನಸು ಮೈಸೂರಿನಲ್ಲಿ ಶ್ರೀಮತಿ ಇಂದಿರಾ ಗಾಂಧಿ ಕಾಂಗ್ರೆಸ್ ಭವನದ ಭೂಮಿ ಪೂಜೆಯನ್ನು ಇದೇ ತಿಂಗಳು ಕೊನೆಯ ವಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ನೆರವೇರಿಸಲಿದ್ದಾರೆ ಎಂದು ಅವರು ತಿಳಿಸಿದರು‌.

ಕಾರ್ಯಕರ್ತರು, ಸ್ಥಳೀಯ ಮುಖಂಡರು ಮುಂಬರುವ ದಿನಗಳಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗೆ ಬೂತ್ ಮಟ್ಟದಲ್ಲಿ ಸಿದ್ಧತೆ ಆರಂಭಿಸಲು ಬಿ.ಜೆ.ವಿಜಯಕುಮಾರ್ ಕರೆ ನೀಡಿದರು.

ಸಭೆಯಲ್ಲಿ ನಂಜನಗೂಡು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಕಳೆಲೆ ಕೇಶವಮೂರ್ತಿ, ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮರಿಸ್ವಾಮಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಸವರಾಜ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತಗಡೂರು ರಂಗಸ್ವಾಮಿ, ವರುಣ ವಿಧಾನಸಭಾ ಕ್ಷೇತ್ರದ ಪುರಸಭಾ ಸದಸ್ಯರು ವಿವಿಧ ಹಂತದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.