ಬೆಂಗಳೂರು: ಮುಂಬರುವ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಆಮ್ ಆದ್ಮಿ ಪಕ್ಷದಿಂದ ಜಿಲ್ಲಾಧ್ಯಕ್ಷ ಕೆ. ಎಸ್. ಶಿವಕುಮಾರಪ್ಪ ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಲಾಗುತ್ತಿದೆ.
ಶಿವಕುಮಾರಪ್ಪ ಕಳೆದ ಮೂರು ದಶಕಗಳಿಂದ ಲೆಕ್ಕ ಪರಿಶೋಧಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಮೂಲತಃ ರೈತಾಪಿ ಕುಟುಂಬದಿಂದ ಬಂದಿರುವ ಕೆ. ಎಸ್. ಶಿವಕುಮಾರಪ್ಪ ದಾವಣಗೆರೆ ಜಿಲ್ಲಾ ಲೆಕ್ಕ ಪರಿಶೋಧಕರ ಸಂಘದ ಅಧ್ಯಕ್ಷರಾಗಿ ಅನೇಕ ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ.
ಜಿಲ್ಲಾ ರೋಟರಿ ಸಂಸ್ಥೆಯ ಅಧ್ಯಕ್ಷರಾಗಿ ಅನೇಕ ಸಾಮಾಜಿಕ ಚಟುವಟಿಕೆಗಳನ್ನು ಮಾಡುತ್ತಾ ಜನಾನುರಾಗಿ ಗಳಾಗಿದ್ದಾರೆ.
ಆಮ್ ಆದ್ಮಿ ಪಕ್ಷದಲ್ಲಿ ಕಳೆದ ಮೂರು ವರ್ಷಗಳಿಂದ ಜಿಲ್ಲಾಧ್ಯಕ್ಷರಾಗಿ ದೇಶದ, ರಾಜ್ಯದ ಹಾಗೂ ದಾವಣಗೆರೆ ಜಿಲ್ಲೆಯ ಅನೇಕ ಜನಪರ ಹೋರಾಟಗಳನ್ನು ರೂಪಿಸುವ ಮೂಲಕ ಸರ್ಕಾರಕ್ಕೆ ಕಿವಿ ಹಿಂಡುವ ಕಾರ್ಯವನ್ನು ಅವರು ಮಾಡಿಕೊಂಡು ಬಂದಿದ್ದಾರೆ.
ಇಂತಹ ವಿದ್ಯಾವಂತ, ದಕ್ಷ ಹಾಗೂ ಪ್ರಾಮಾಣಿಕ ಅಭ್ಯರ್ಥಿಯನ್ನು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಜನತೆ ಆಯ್ಕೆ ಮಾಡುವ ಮೂಲಕ ವಂಶಪಾರಂಪರ್ಯ ರಾಜಕಾರಣಕ್ಕೆ ತಿಲಾಂಜಲಿ ಹಾಡಿ ಪರ್ಯಾಯ ರಾಜಕಾರಣಕ್ಕೆ ಮುನ್ನುಡಿ ಬರೆಯಬೇಕೆಂದು ಪಕ್ಷವು ಪ್ರಕಟಣೆಯಲ್ಲಿ ಮನವಿ ಮಾಡಿದೆ.
