ಮೈಸೂರು: ಮುಂದಿನ 15 ದಿನಗಳವರೆಗೆ ತಮಿಳುನಾಡಿಗೆ ಪ್ರತಿನಿತ್ಯ 12,000 ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ನೀಡಿರುವ ಆದೇಶ ವಿರೋಧಿಸಿ ರಾಜ್ಯ ಕಬ್ಬು ಬೆಳೆಗಾರರ ಸಂಘದವರು ಪ್ರತಿಭಟನೆ ನಡೆಸಿದರು.
ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಮೈಸೂರಿನಲ್ಲಿ ರೈತರು ಪ್ರತಿಭಟನೆ ನಡೆಸಿ,ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡಬಾರದು ಎಂದು ಆಗ್ರಹಿಸಿದರು.
ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆ ಕಡಿಮೆಯಾಗಿದೆ. ಇದರಿಂದ ಕಾವೇರಿ ಜಲಾನಯನ ಪ್ರದೇಶದ ಕೆ.ಆರ್.ಎಸ್, ಕಬಿನಿ ಸೇರಿದಂತೆ ಇತರ ಜಲಾಶಯಗಳು ಸಂಪೂರ್ಣ ಭರ್ತಿಯಾಗಿಲ್ಲ.
ಈ ಪರಿಸ್ಥಿತಿಯಲ್ಲಿ ಪ್ರತಿನಿತ್ಯ 12,000 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಬಿಡುವಂತೆ ಸಿಡಬ್ಲ್ಯೂಆರ್ಸಿ ಆದೇಶಿಸಿರುವುದು ಸರಿಯಲ್ಲ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘ, ರಾಜ್ಯ ರೈತ ಸಂಘ ಹಾಗೂ ವಿವಿಧ ಕನ್ನಡಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದವು.
ಸಮರ್ಪಕ ಮಳೆಯಾಗದೆ ರಾಜ್ಯದಲ್ಲಿ ಬರದ ಛಾಯೆ ಕಾಣುತ್ತಿದೆ. ಕಾವೇರಿ ಭಾಗದ ಕಬಿನಿ, ಕೆ.ಆರ್.ಎಸ್, ಹಾರಂಗಿ ಹಾಗೂ ಹೇಮಾವತಿ ಸೇರಿದಂತೆ ಇತರ ಜಲಾಶಯಗಳಿಂದ ರೈತರ ಬೆಳೆಗಳಿಗೆ ನೀರು ಹರಿಸಿಲ್ಲ. ಅಕಾಲಿಕ ಮಳೆಯಿಂದ ಕೆಲವು ಜಲಾಶಯಗಳು ಸಂಪೂರ್ಣ ಭರ್ತಿಯಾಗಿಲ್ಲ. ಈ ನಡುವೆ ನೀರು ಬಿಡುವಂತೆ ಆದೇಶ ಮಾಡಿರುವುದು ಸರಿಯಲ್ಲ ಎಂದು ರೈತರು ಬೇಸರ ವ್ಯಕ್ತಪಡಿಸಿದರು.
ಕೂಡಲೇ ರಾಜ್ಯ ಸರ್ಕಾರ ತಮಿಳುನಾಡು ಸರ್ಕಾರಕ್ಕೆ ವಾಸ್ತವ ಸ್ಥಿತಿಯನ್ನು ಅರ್ಥ ಮಾಡಿಸಬೇಕು. ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡಬಾರದು ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್, ಹತ್ತಿಹಳ್ಳಿ ದೇವರಾಜ್ ಸೇರಿದಂತೆ ಹಲವು ರೈತರು ಒತ್ತಾಯಿಸಿದರು.
ಆಗಸ್ಟ್ 13 ರಂದು ಕರ್ನಾಟಕ ಬಂದ್ಗೆ ಕರೆ ನೀಡಲಾಗಿದೆ. ಈ ಬಗ್ಗೆ ಬೆಂಬಲ ನೀಡುವ ವಿಚಾರದಲ್ಲಿ ಸಭೆ ಸೇರಿ ತೀರ್ಮಾನ ಕೈಗೊಳ್ಳುವುದಾಗಿ ಕುರುಬೂರು ಶಾಂತಕುಮಾರ್ ತಿಳಿಸಿದರು.
