ಮಂಡ್ಯ: ಸಮಾಜದಲ್ಲಿರುವ ಲಿಂಗಾಧಾರಿತ ತಾರತಮ್ಯ ಮತ್ತು ರೂಢಿಗತ ನಂಬಿಕೆಗಳನ್ನು ದೂರ ಮಾಡಿದಾಗ ಮಾತ್ರ ಮಹಿಳೆಯರಿಗೆ ಸುರಕ್ಷಿತ ವಾತಾವರಣ ನಿರ್ಮಾಣವಾಗಲು ಸಾಧ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಲಿಂಗ ತಜ್ಞೆ ಟಿ.ಎಂ.ಸೌಮ್ಯಾ ಹೇಳಿದರು.
ಮಳವಳ್ಳಿ ತಾಲ್ಲೂಕಿನ ಕಂದೇಗಾಲ ಸರ್ಕಾರಿ ಪ್ರೌಢಶಾಲೆಯಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆ ಮತ್ತು ಲಿಂಗ ಸಂವೇದನೆ ಕುರಿತ ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸಮಾಜದಲ್ಲಿ ಗಂಡು ಮತ್ತು ಹೆಣ್ಣಿಗೆ ಯಾವುದೇ ಭೇದವಿಲ್ಲ. ಎಲ್ಲ ಕ್ಷೇತ್ರಗಳಲ್ಲೂ ಮಹಿಳೆಯರು ಸಾಧನೆ ಮಾಡುತ್ತಿದ್ದಾರೆ. ಆದರೂ ಇಂದಿಗೂ ಕೆಲವೆಡೆ ಲಿಂಗ ಆಧಾರಿತ ತಾರತಮ್ಯ ಮುಂದುವರಿದಿದೆ. ಪ್ರಸ್ತುತ ಲಿಂಗಾನುಪಾತದ ಕೊರತೆಯಿಂದ ಅನೇಕ ಸಾಮಾಜಿಕ ಸಮಸ್ಯೆಗಳು ಉಂಟಾಗುತ್ತಿವೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.
ಲಿಂಗ ಸಮಾನತೆಯನ್ನು ಉತ್ತೇಜಿಸುವುದು, ಲಿಂಗಾಧಾರಿತ ತಾರತಮ್ಯವನ್ನು ತೊಡೆದು ಹಾಕುವುದು ಮತ್ತು ಎಲ್ಲರಿಗೂ ಸುರಕ್ಷಿತ ವಾತಾವರಣ ಕಲ್ಪಿಸುವುದೇ ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ಇದಕ್ಕಾಗಿ ಶಾಲಾ ಮಟ್ಟದಿಂದಲೇ ಜಾಗೃತಿ ಮೂಡಿಸುವುದು ಅಗತ್ಯ ಎಂದು ತಿಳಿಹೇಳಿದರು
ಪುರುಷ, ಮಹಿಳೆ ಮತ್ತು ಇತರೆ ಲಿಂಗಗಳ ಕುರಿತು ಸಮಾಜದಲ್ಲಿರುವ ತಪ್ಪು ಕಲ್ಪನೆಗಳು ಹಾಗೂ ರೂಢಿಗತ ನಂಬಿಕೆಗಳನ್ನು ಬದಲಾಯಿಸಬೇಕು. ಮಕ್ಕಳು ಬಾಲ್ಯದಿಂದಲೇ ಲಿಂಗ ಸಮಾನತೆಯ ಮಹತ್ವವನ್ನು ಅರ್ಥಮಾಡಿಕೊಳ್ಳಬೇಕು. ಆಗ ಮಾತ್ರ ಸಮಾನತೆಯ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಸೌಮ್ಯ ಅಭಿಪ್ರಾಯಪಟ್ಟರು.
ಮಹಿಳೆಯರ ಮೇಲಿನ ದೌರ್ಜನ್ಯ ತಡೆಗಟ್ಟುವುದು ಮತ್ತು ಅವರ ಹಕ್ಕುಗಳ ಬಗ್ಗೆ ಅರಿವು ಮೂಡಿಸುವುದು ಶಿಕ್ಷಕರು, ಪೋಷಕರು ಮತ್ತು ಸಮಾಜದ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಶಾಲೆಗಳು ಈ ನಿಟ್ಟಿನಲ್ಲಿ ಮಹತ್ವದ ಪಾತ್ರ ವಹಿಸಬೇಕು ಎಂದು ಸಲಹೆ ನೀಡಿದರು.
ಎಲ್ಲೇ ಆಗಲಿ ಲೈಂಗಿಕ ದೌರ್ಜನ್ಯ ಅಥವಾ ಮಹಿಳೆಯರ ಮೇಲಿನ ದೌರ್ಜನ್ಯ ಕಂಡು ಬಂದಲ್ಲಿ ಕೂಡಲೇ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು. ಹೆದರದೆ ದೂರು ನೀಡುವ ಮೂಲಕ ಇಂತಹ ಘಟನೆಗಳನ್ನು ತಡೆಯಬಹುದು. ಮಹಿಳಾ ಸಹಾಯವಾಣಿ 181 ಕೂಡ ಲಭ್ಯವಿದೆ ಎಂದು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕ ಎಚ್.ಬಿ.ರಾಜು, ಶಿಕ್ಷಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು. ಕೊನೆಯಲ್ಲಿ ಲಿಂಗ ಸಮಾನತೆಯ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು.
