ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರದಲ್ಲಿ ಕರ್ನಾಟಕದ ಹಿತಾಸಕ್ತಿಯನ್ನು ಯಾವುದೇ ಕಾರಣಕ್ಕೂ ಬಲಿಕೊಡಲು ಸಾಧ್ಯವಿಲ್ಲ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷರಾದ ಡಾ. ಮುಖ್ಯಮಂತ್ರಿ ಚಂದ್ರು ಅವರು ತಿಳಿಸಿದ್ದಾರೆ.
ರಾಜ್ಯದ ಕುಡಿಯುವ ನೀರಿನ ಅವಶ್ಯಕತೆ, ರೈತರ ಹಿತಾಸಕ್ತಿ ಹಾಗೂ ಭದ್ರತೆಯನ್ನು ಕಡೆಗಣಿಸಿ ತಮಿಳುನಾಡಿಗೆ ನೀರನ್ನು ಹರಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.
ಕರ್ನಾಟಕದ ರೈತರು ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಹಾಗೂ ಬೆಂಗಳೂರು ಸೇರಿದಂತೆ ಕಾವೇರಿ ನೀರನ್ನು ಅವಲಂಬಿಸಿರುವ ಲಕ್ಷಾಂತರ ಜನರ ಅಗತ್ಯತೆಗಳನ್ನು ಪರಿಗಣಿಸಿದಾಗ, ರಾಜ್ಯದ ಅಗತ್ಯಗಳನ್ನು ಪೂರೈಸುವುದೇ ಮೊದಲ ಆದ್ಯತೆಯಾಗಬೇಕು.
ಕಾವೇರಿ ವಿಚಾರದಲ್ಲಿ ಕನ್ನಡಿಗರ ಹಿತಾಸಕ್ತಿಯನ್ನು ರಕ್ಷಿಸಲು ರಾಜ್ಯ ಸರ್ಕಾರವು ಯಾವುದೇ ರಾಜಿ ಮಾಡಿಕೊಳ್ಳಬಾರದು ಎಂದು ಆಗ್ರಹಿಸಿದ್ದಾರೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಕಾವೇರಿ ಕೊಳ್ಳದ ಪ್ರದೇಶಗಳ ಭವಿಷ್ಯದ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಬಲ್ಲ ಮೇಕೆದಾಟು ಸಮತೋಲನ ಜಲಾಶಯ ಯೋಜನೆಗೆ ಕೇಂದ್ರ ಸರ್ಕಾರದ ಜಲಶಕ್ತಿ ಸಚಿವಾಲಯವು 2019ರಿಂದಲೂ ಅಡ್ಡಿಪಡಿಸುತ್ತಿರುವುದು ಅತ್ಯಂತ ಖಂಡನೀಯ. ಯೋಜನೆಯ ಸವಿವರ ಯೋಜನಾ ವರದಿಯನ್ನು (ಡಿಪಿಆರ್) ಪದೇ ಪದೇ ವಾಪಸ್ ಕಳುಹಿಸುವ ಮೂಲಕ ಕೇಂದ್ರ ಸರ್ಕಾರವು ಕರ್ನಾಟಕದ ಜನರ ಆಶೋತ್ತರಗಳಿಗೆ ದ್ರೋಹ ಎಸಗುತ್ತಿದೆ ಎಂದು ಮುಖ್ಯ ಮಂತ್ರಿ ಚಂದ್ರು ಆರೋಪಿಸಿದ್ದಾರೆ.
ರಾಜ್ಯ ಸರ್ಕಾರ ಕರೆದಿರುವ ಸರ್ವಪಕ್ಷಗಳ ಸಭೆಯಲ್ಲಿ, ಮೇಕೆದಾಟು ಯೋಜನೆಯ ಡಿಪಿಆರ್ ಅನ್ನು ಕೇಂದ್ರ ಸರ್ಕಾರವು ಕೂಡಲೇ ಇತ್ಯರ್ಥಗೊಳಿಸಿ ಯೋಜನೆಗೆ ಅನುಮೋದನೆ ನೀಡಬೇಕೆಂದು ಸರ್ವಾನುಮತದ ನಿರ್ಣಯವನ್ನು ಕೈಗೊಳ್ಳಬೇಕು ಎಂದು ಅವರು ಸಲಹೆ ನೀಡಿದ್ದಾರೆ.
ಕಾವೇರಿ ನೀರಿನ ವಿಚಾರದಲ್ಲಿ ಕರ್ನಾಟಕದ ಹಕ್ಕುಗಳನ್ನು ರಕ್ಷಿಸುವುದು ಹಾಗೂ ಮೇಕೆದಾಟು ಯೋಜನೆಯನ್ನು ತ್ವರಿತವಾಗಿ ಜಾರಿಗೊಳಿಸುವ ವಿಷಯದಲ್ಲಿ ಎಲ್ಲ ರಾಜಕೀಯ ಪಕ್ಷಗಳು ಒಂದೇ ಧ್ವನಿಯಲ್ಲಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕಾಗಿದೆ,ಕನ್ನಡಿಗರ ಕುಡಿಯುವ ನೀರಿನ ಹಕ್ಕು ಮತ್ತು ರಾಜ್ಯದ ಜಲ ಭದ್ರತೆಯ ವಿಚಾರದಲ್ಲಿ ಆಮ್ ಆದ್ಮಿ ಪಕ್ಷವು ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಚಂದ್ರು ತಿಳಿಸಿದ್ದಾರೆ.
