ಮೈಸೂರು: ಕಿರುಕುಳ ಹಾಗೂ ಮಾನಸಿಕ ಹಿಂಸೆ ತಾಳಲಾರದೆ ತಂದೆ, ತಾಯಿ, ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲ್ಲೂಕಿನಲ್ಲಿ ನಡೆದಿದೆ.
ತಿ.ನರಸೀಪುರ ತಾಲೂಕಿನ ಕೆಂಪಯ್ಯನ ಹುಂಡಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಶಿವಣ್ಣ, ನಾಗರತ್ನ ಹಾಗೂ ಅವರ ಮಗಳು ರಕ್ಷಿತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅದೇ ಗ್ರಾಮದ ಉಲ್ಲಾಸ್ ಗೌಡ ಎಂಬಾತನ ಕಿರುಕುಳ ಹಾಗೂ ಮಾನಸಿಕ ಹಿಂಸೆಯಿಂದ ಬೇಸತ್ತು ಮೂವರು ವಿಷ ಸೇವಿಸಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ
ಮೃತ ರಕ್ಷಿತಾಳಿಗೆ ಮದುವೆ ನಿಶ್ಚಯವಾಗಿತ್ತು. ಆರೋಪಿ ಉಲ್ಲಾಸ್ ಗೌಡ, ರಕ್ಷಿತಾ ತನಗೆ ಕಳುಹಿಸಿದ್ದ ಮೆಸೇಜ್ ಹಾಗೂ ಕೆಲವು ಫೋಟೋಗಳನ್ನು ಇಟ್ಟುಕೊಂಡು ನಿರಂತರ ಕಿರುಕುಳ ನೀಡುತ್ತಿದ್ದ ಎಂದು ದೂರಲಾಗಿದೆ. ಅಲ್ಲದೆ, ಮದುವೆ ನಿಶ್ಚಯವಾಗಿದ್ದ ಯುವಕನಿಗೂ ಉಲ್ಲಾಸ್ ಗೌಡ ಆ ಮೆಸೇಜ್ ಹಾಗೂ ಫೋಟೋಗಳನ್ನು ಕಳುಹಿಸಿದ್ದ ಎಂಬ ಆರೋಪ ಕೇಳಿಬಂದಿದೆ.
ಇದೆಲ್ಲದರಿಂದ ಮನನೊಂದು ತಂದೆ,ತಾಯಿ ಮಗಳು ಮನೆಯಲ್ಲೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಾವಿಗೆ ಉಲ್ಲಾಸ್ ಗೌಡನೇ ನೇರ ಕಾರಣ ಎಂದು ಡೆತ್ ನೋಟ್ನಲ್ಲಿ ಉಲ್ಲೇಖಿಸಲಾಗಿದೆ.
ವಿಷಯ ತಿಳಿಯುತ್ತಿದ್ದಂತೆ ವರುಣಾ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿ,ಪ್ರಕರಣ ದಾಖಲಿಸಿಕೊಂಡು ಆರೋಪಿ ಉಲ್ಲಾಸನ ಬಂಧನಕ್ಕೆ ಹುಡುಕಾಟ ನಡೆಸಿದ್ದಾರೆ.
