ಕೋಲ್ಕತ್ತಾ: ಕೋಲ್ಕತ್ತಾದ ಬರುಯಿಪುರದ ಸುರ್ಜಾಪುರ ಹಾತ್ ಬಳಿ 11 ವರ್ಷದ ಮುಗ್ದ ಬಾಲಕಿಯನ್ನು ಕಾಮ ಪಿಶಾಚಿಗಳು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿ ಹತ್ಯೆ ಮಾಡಿ ಬಿಸಾಡಿರುವ ಅತ್ಯಂತ ಕ್ರೂರ ಘಟನೆ ನಡೆದಿದ್ದು,ಇದನ್ನು ಖಂಡಿಸಿ ಭಾರೀ ಪ್ರತಿಭಟನೆ ನಡೆದಿದೆ.
ಕೆರೆಯಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿದ್ದು, ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಬಳಿಕ ಹತ್ಯೆ ಮಾಡಲಾಗಿದೆ ಎಂದು ಆಕೆಯ ಕುಟುಂಬದವರು ಹಾಗೂ ಸ್ಥಳೀಯರು ಆರೋಪಿಸಿದ್ದಾರೆ.
ಜತೆಗೆ ಆಕ್ರೋಶಗೊಂಡ ಸ್ಥಳೀಯರು ಸಾರ್ವಜನಿಕ ಸ್ಥಳದಲ್ಲಿ ಟೈರ್ ಗೆ ಬೆಂಕಿ ಹಚ್ಚಿ ಭಾರೀ ಪ್ರತಿಭಟನೆ ನಡೆಸಿದರು ಅಲ್ಲದೆ ಪೊಲೀಸರು ಹಾಗೂ ಕೇಂದ್ರ ಭದ್ರತಾ ಪಡೆಯ ಸಿಬ್ಬಂದಿ ಮೇಲೂ ಕಲ್ಲು ತೂರಾಟ ನಡೆಸಿದ್ದಾರೆ.ಜತೆಗೆ ಉದ್ರಿಕ್ತರು ಶಂಕಿತ ವ್ಯಕ್ತಿಯನ್ನು ಹಿಡಿದು ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಅತ್ಯಾಚಾರ ಮತ್ತು ಕೊಲೆ ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದ್ದು, ಹೆಚ್ಚುವರಿ ಪೊಲೀಸ್ ಅಧೀಕ್ಷಕರ ನೇತೃತ್ವದಲ್ಲಿ ಆರು ಸದಸ್ಯರ ವಿಶೇಷ ತನಿಖಾ ತಂಡ (ಎಸ್ ಐಟಿ) ರಚಿಸಲಾಗಿದೆ.
ಪೊಲೀಸರು ಕೊಲೆ ಪ್ರಕರಣ ದಾಖಲಿಸಿದ್ದು, ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಅತ್ಯಾಚಾರಕ್ಕೆ ಸಂಬಂಧಿಸಿದ ಆರೋಪಗಳನ್ನು ಸೇರಿಸಲಾಗುವುದು ಎಂದು ತಿಳಿಸಿದ್ದಾರೆ.
ಬಾಲಕಿ ಶನಿವಾರ ಸಂಜೆ ಸುಮಾರು 4 ಗಂಟೆಗೆ ತನ್ನ ಸ್ನೇಹಿತೆಯ ಹುಟ್ಟುಹಬ್ಬಕ್ಕೆ ಉಡುಗೊರೆ ಖರೀದಿಸಲು ಮನೆಯಿಂದ ಹೊರಟಿದ್ದಳು. ಆದರೆ ಆಕೆ ಮನೆಗೆ ಮರಳಿ ಬಂದಿರಲಿಲ್ಲ. ಪೋಷಕರು ಹಾಗೂ ಸ್ಥಳೀಯರು ವ್ಯಾಪಕ ಹುಡುಕಾಟ ನಡೆಸಿದರೂ ಆಕೆಯನ್ನು ಪತ್ತೆಹಚ್ಚಲು ಸಾಧ್ಯವಾಗಿರಲಿಲ್ಲ. ರವಿವಾರ ಬೆಳಿಗ್ಗೆ ಧೋಪಧೋಪಿ-2 ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಆಕೆಯ ಮನೆಯ ಸಮೀಪದ ಕೆರೆಯಲ್ಲಿ ಮೃತದೇಹ ಪತ್ತೆಯಾಗಿದೆ. ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕುತ್ತಿಗೆ ಹಿಸುಕಿ ಹತ್ಯೆ ಮಾಡಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಬಾಲಕಿಯ ಕುಟುಂಬವು ದಾಖಲಿಸಿದ ಎಫ್ಐಆರ್ ನಲ್ಲಿ ಸ್ಥಳೀಯ ನಾಲ್ವರು ನಿವಾಸಿಗಳ ಹೆಸರನ್ನು ಉಲ್ಲೇಖಿಸಿದೆ.
ನಾಲ್ವರಿಂದ ಐವರು ಶಂಕಿತರು ಬಾಲಕಿಯನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರ ಎಸಗಿ, ಬಳಿಕ ಹತ್ಯೆ ಮಾಡಿ ಮೃತದೇಹವನ್ನು ಬಿಸಾಡಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
