(ವರದಿ:ಸಿದ್ದರಾಜು,ಕೊಳ್ಳೇಗಾಲ)
ಕೊಳ್ಳೇಗಾಲ: ತಾಲ್ಲೂಕಿನ ಸತ್ತೇಗಾಲ ಜಾಗೇರಿಯ ಬೂದಗಟ್ಟೆ ದೊಡ್ಡಿ ಸಮೀಪ ಕಾವೇರಿ ನದಿ ದಡದಲ್ಲಿ ಸುಮಾರು 50-60 ವರ್ಷದ ಅಪರಿಚಿತ ಗಂಡಸಿನ ಶವದ ಅಸ್ಥಿಪಂಜರ ಪತ್ತೆಯಾಗಿದೆ.
ಭರಚುಕ್ಕಿ ಜಲಪಾತದ ಹಿಂದಿನ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು ಈ ಅನುಮಾನಾಸ್ಪದ ಸಾವಿನ ಬಗ್ಗೆ ಸ್ಥಳೀಯ ಅರಣ್ಯ ಇಲಾಖೆಯ ಅಧಿಕಾರಿ ಲಿಂಗರಾಜು ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಙಬಳಿಕ, ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ಸುಪ್ರೀತ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ನಂತರ ಸಮಾಜಸೇವಕ ರಾಜೇಶ್ ಅಂಬ್ಯುಲೆನ್ಸ್ ಮೂಲಕ ಶವವನ್ನು ಚಾಮರಾಜನಗರ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.
ಕ್ರೈಂ ಸೀನ್ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ಮೃತದೇಹವು ಸುಮಾರು ಎರಡರಿಂದ ಮೂರು ತಿಂಗಳ ಹಿಂದೆಯೇ ಮೃತಪಟ್ಟಿರಬಹುದು ಎಂದು ಪ್ರಾಥಮಿಕವಾಗಿ ಶಂಕಿಸಿದ್ದಾರೆ.
ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಮೃತ ವ್ಯಕ್ತಿಯ ಗುರುತು ಹಾಗೂ ವಾರಸುದಾರರ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ. ಯಾರಿಗಾದರೂ ಈ ಬಗ್ಗೆ ಮಾಹಿತಿ ಇದ್ದರೆ ಸಮೀಪದ ಪೊಲೀಸ್ ಠಾಣೆಯನ್ನು ಸಂಪರ್ಕಿಸಲು ಪೊಲೀಸರು ಮನವಿ ಮಾಡಿದ್ದಾರೆ.
