ಮೈಸೂರು: ಲಯನ್ಸ್ ಕ್ಲಬ್ ಆಫ್ ಮೈಸೂರು ಅಂಬಾಸಿಡರ್ ವತಿಯಿಂದ ಹೆಬ್ಬಾಳದ ಶ್ರೀ ಲಕ್ಷ್ಮಿಕಾಂತ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಂಡಿದ್ದ ವೃಕ್ಷಾರೋಪಣ ಕಾರ್ಯಕ್ರಮದಲ್ಲಿ 120 ವಿವಿಧ ಜಾತಿಯ ಗಿಡಗಳನ್ನು ನೆಟ್ಟು ಪರಿಸರ ಸಂರಕ್ಷಣೆಯ ಸಂದೇಶವನ್ನು ಸಾರಲಾಯಿತು.
ಕಾರ್ಯಕ್ರಮದಲ್ಲಿ ಲಯನ್ ಜಿಲ್ಲಾ (ಪರಿಸರ) ಲಯನ್ ಶಿವಕುಮಾರ್ ಮಾತನಾಡಿ,ಇಂದಿನ ದಿನಗಳಲ್ಲಿ ಪರಿಸರ ಮಾಲಿನ್ಯ, ಹವಾಮಾನ ವೈಪರೀತ್ಯ ಹಾಗೂ ಅರಣ್ಯ ನಾಶದಿಂದ ಅನೇಕ ಸಮಸ್ಯೆಗಳು ಎದುರಾಗುತ್ತಿವೆ. ಇವುಗಳಿಗೆ ಪರಿಹಾರ ಕಂಡುಕೊಳ್ಳಲು ಹೆಚ್ಚಿನ ಸಂಖ್ಯೆಯಲ್ಲಿ ಗಿಡಗಳನ್ನು ನೆಡುವುದು ಮತ್ತು ಅವುಗಳನ್ನು ಮರಗಳಾಗಿ ಬೆಳೆಸುವುದು ಅತ್ಯಗತ್ಯ ಎಂದು ತಿಳಿಸಿದರು.
ಪ್ರತಿಯೊಬ್ಬ ನಾಗರಿಕರೂ ವರ್ಷಕ್ಕೆ ಕನಿಷ್ಠ ಒಂದು ಗಿಡವನ್ನಾದರೂ ನೆಟ್ಟು ಅದರ ಸಂಪೂರ್ಣ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಜಿಲ್ಲಾ ಅಧ್ಯಕ್ಷ (ಅರಣ್ಯ) ಲಯನ್ ಎಚ್.ಸಿ. ಕಾಂತರಾಜು ಮಾತನಾಡಿ, ದೇವಸ್ಥಾನಗಳು, ಶಾಲೆಗಳು, ಸಾರ್ವಜನಿಕ ಸ್ಥಳಗಳು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಹಸಿರು ವಾತಾವರಣ ನಿರ್ಮಾಣವಾಗಬೇಕಾದರೆ ಇಂತಹ ವೃಕ್ಷಾರೋಪಣ ಕಾರ್ಯಕ್ರಮಗಳು ನಿರಂತರವಾಗಿ ನಡೆಯಬೇಕು. ಗಿಡ ನೆಡುವುದಷ್ಟೇ ಅಲ್ಲ, ಅವುಗಳ ಸಂರಕ್ಷಣೆಯೂ ಅಷ್ಟೇ ಮುಖ್ಯ ಎಂದು ತಿಳಿಸಿದರು.
ಸಂಸ್ಥೆಯ ಅಧ್ಯಕ್ಷ ಲಯನ್ ಎಚ್.ಕೆ. ಪ್ರಸನ್ನ ಮಾತನಾಡಿ, ಲಯನ್ಸ್ ಕ್ಲಬ್ ಸದಾ ಸಮಾಜಮುಖಿ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದು, ಪರಿಸರ ಸಂರಕ್ಷಣೆ, ಆರೋಗ್ಯ, ಶಿಕ್ಷಣ ಮತ್ತು ಮಾನವೀಯ ಸೇವೆಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು ಹೇಳಿದರು.
ಜಿಲ್ಲಾ ಸಂಪುಟ ಕಾರ್ಯದರ್ಶಿ ಲಯನ್ ಟಿ.ಹೆಚ್.ವೆಂಕಟೇಶ್ ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿ, ಪರಿಸರ ರಕ್ಷಣೆಯಲ್ಲಿ ಪ್ರತಿಯೊಬ್ಬರೂ ಕೈಜೋಡಿಸಿದಾಗ ಮಾತ್ರ ಮುಂದಿನ ಪೀಳಿಗೆಗೆ ಆರೋಗ್ಯಕರ ಮತ್ತು ಹಸಿರು ಭೂಮಿಯನ್ನು ನೀಡಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಜಿಲ್ಲಾ ಸಾರ್ವಜನಿಕ ಸಂಪರ್ಕ ಅಧಿಕಾರಿ ಲಯನ್ ಸಿ.ಆರ್. ದಿನೇಶ್ ಅವರು ಮಾತನಾಡಿ, ಲಯನ್ಸ್ ಸಂಸ್ಥೆಯ ಸೇವಾ ಚಟುವಟಿಕೆಗಳು ಸಮಾಜದಲ್ಲಿ ಉತ್ತಮ ಬದಲಾವಣೆಗೆ ಕಾರಣವಾಗುತ್ತಿದ್ದು, ಪರಿಸರ ಸಂರಕ್ಷಣೆಯಂತಹ ಕಾರ್ಯಗಳಲ್ಲಿ ಸಾರ್ವಜನಿಕರು ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಕೋರಿದರು.
ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ಸದಸ್ಯರಾದ ಶ್ರೀಧರ್, ರವಿ ,ಮನು, ವರದಾ, ಅಂಬಾಡಿ ಮಾಧವ್, ಪುಟ್ಟಸ್ವಾಮಿ ಮಲ್ಲಿಕಾರ್ಜುನಪ್ಪ, ತನುಜಾ, ಮಹೇಶ್ ,ಅರುಣ್ ವಿಷ್ಣು ಉಪಸ್ಥಿತರಿದ್ದರು .
ಮಠದಲ್ಲಿ ಇರುವ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು.
ಮಕ್ಕಳಲ್ಲಿ ಪರಿಸರದ ಬಗ್ಗೆ ಇರುವ ಕಾಳಜಿಯನ್ನು ಲಯನ್ಸ ಜಿಲ್ಲೆ 317 ಜಿ ಯ ಜಿಲ್ಲಾ ಸಂಪರ್ಕ ಅಧಿಕಾರಿ ಲಯನ್ ಸಿ.ಆರ್ ದಿನೇಶ್ ಪ್ರಶಂಸಿಸಿದರು.
