ಮೈಸೂರು: ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲಿನ ಲಾಠಿ ಪ್ರಹಾರ ಖಂಡಿಸಿ ಕನ್ನಡಾಂಬೆ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.
ದೆಹಲಿಯಲ್ಲಿ ನೀಟ್ ಪರೀಕ್ಷೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದು ಸರಿಯಲ್ಲ ಎಂದು ಖಂಡಿಸಿದರು.
ಕನ್ನಡಾಂಬೆ ರಕ್ಷಣಾ ವೇದಿಕೆ ವತಿಯಿಂದ ಮೈಸೂರು ನಗರದ ಹಳೆ ಡಿ ಸಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆ ವೇಳೆ ಕನ್ನಡಾಂಬೆ ರಕ್ಷಣಾ ವೇದಿಕೆ ಸಂಸ್ಥಾಪಕ ರಾಜ್ಯಾಧ್ಯಕ್ಷ ರಾಜಶೇಖರ್ ಮಾತನಾಡಿ, ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ವ್ಯವಸ್ಥೆಯಲ್ಲಿನ ಅವ್ಯವಸ್ಥೆಯಿಂದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಸಂಕಷ್ಟಕ್ಕೀಡಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.
ತಮ್ಮ ನ್ಯಾಯಯುತ ಬೇಡಿಕೆಗಳಿಗಾಗಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಅಮಾನವೀಯವಾಗಿ ಲಾಠಿ ಪ್ರಹಾರ ನಡೆಸಿರುವುದು ಅತ್ಯಂತ ಖಂಡನೀಯ ಎಂದು ಹೇಳಿದರು.
ವಿದ್ಯಾರ್ಥಿಗಳ ರಕ್ತ ಹರಿಯುವಂತೆ ಹಲ್ಲೆ ನಡೆಸಿರುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನಾಕಾರರು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಕೂಡಲೇ ಅಮಾನತು ಮಾಡಿ, ಅವರ ವಿರುದ್ಧ ಕಠಿಣ ಶಿಸ್ತು ಹಾಗೂ ಕಾನೂನು ಕ್ರಮ ಕೈಗೊಳ್ಳಬೇಕೆಂದು ರಾಜಶೇಖರ್ ಆಗ್ರಹಿಸಿದರು.
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ನೀಟ್ ಪರೀಕ್ಷೆ ಸಂಬಂಧ ಉಂಟಾಗಿರುವ ಗೊಂದಲ ಮತ್ತು ವಿದ್ಯಾರ್ಥಿಗಳ ಆತಂಕಕ್ಕೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಹೋರಾಟಗಾರರಿಗೆ ಬೆಂಬಲ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ದೇಶದ ಯುವಜನರ ಭವಿಷ್ಯವನ್ನು ಹಾಳುಮಾಡುವ ಯಾವುದೇ ನೀತಿ ಹಾಗೂ ಆಡಳಿತವನ್ನು ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ಸಾಮಾಜಿಕ ಜಾಲತಾಣಗಳಲ್ಲಿ ವಿದ್ಯಾರ್ಥಿಗಳ ವಿರುದ್ಧ ದ್ವೇಷ ಮತ್ತು ತಪ್ಪು ಮಾಹಿತಿ ಹರಡುವವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಯಿತು.
ಕೇಂದ್ರ ಸರ್ಕಾರವು ಪ್ರತಿಭಟನೆ ನಡೆಸುವ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ನಡೆಸುವುದನ್ನು ಬಿಟ್ಟು, ಅವರ ನ್ಯಾಯಸಮ್ಮತ ಬೇಡಿಕೆಗಳನ್ನು ಆಲಿಸಿ, ಶಿಕ್ಷಣ ವ್ಯವಸ್ಥೆಯಲ್ಲಿ ಪಾರದರ್ಶಕತೆ ಹಾಗೂ ವಿಶ್ವಾಸವನ್ನು ಮರುಸ್ಥಾಪಿಸುವ ಕೆಲಸ ಮಾಡಬೇಕೆಂದು ಕನ್ನಡಾಂಬೆ ರಕ್ಷಣಾ ವೇದಿಕೆ ಒತ್ತಾಯಿಸಿತು.
ಪ್ರತಿಭಟನೆಯ ವೇಳೆ ವಿದ್ಯಾರ್ಥಿ ವಿರೋಧಿ ನೀತಿಗಳ ವಿರುದ್ಧ ಹಾಗೂ ಪೊಲೀಸ್ ದೌರ್ಜನ್ಯದ ವಿರುದ್ಧ ಘೋಷಣೆಗಳನ್ನು ಕೂಗಲಾಯಿತು.
ಪ್ರತಿಭಟನೆಯಲ್ಲಿ ಕನ್ನಡಾಂಬೆ ರಕ್ಷಣಾ ವೇದಿಕೆಯ ರಾಜ್ಯ ಖಜಾಂಚಿ ನಂಜುಂಡ, ಮಹಿಳಾ ಘಟಕದ ಅಧ್ಯಕ್ಷೆ ವತ್ಸಲ, ರಶ್ಮಿ ಸಿಂಗ್ , ಶಶಿಕಲಾ ,ರಾಧಾ, ಗಂಗಾಧರ್, ಕಾವ್ಯ, ಪವನ್, ನಿತಿನ್,ನಾಗರಾಜ್ ಇ.ವಿ, ಸಿಂಧುವಳ್ಳಿ ಶಿವಕುಮಾರ್, ಮಹೇಂದ್ರ, ಮೈಸೂರು ಹೃದಯವಂತ ಕನ್ನಡಿಗರ ಬಳಗದ ಅಧ್ಯಕ್ಷ ಡಿಪಿಕೆ ಪರಮೇಶ್ , ಮೈಸೂರು ನಗರ ಅಧ್ಯಕ್ಷ ಹೊನ್ನೇಗೌಡ, ಪರಿಸರ ವಾದಿಗಳಾದ ಭಾನು ಮೋಹನ್, ಹರೀಶ, ನಾಗರಾಜ್ , ಮೋಹನ್ , ವಿಷ್ಣು, ಕನ್ನಡಾಂಬೆ ರಕ್ಷಣಾ ವೇದಿಕೆ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
