ಮ. ಬೆಟ್ಟದಲ್ಲಿ ಪ್ರತಿಭಾ ಪುರಸ್ಕಾರ:ಎಂ.ಆರ್ ಮಂಜುನಾಥ್ ಸಂತಸ

Spread the love

(ವರದಿ:ಸಿದ್ದರಸಜು,ಕೊಳ್ಳೇಗಾಲ)

ಹನೂರು: ತಾಲೂಕಿನ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ, ಪವಾಡ ಪುರುಷ ಮಹದೇಶ್ವರರು ತಪಸ್ಸು ಮಾಡಿದ ಮಹದೇಶ್ವರ ಬೆಟ್ಟದಲ್ಲಿ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜನೆ ಮಾಡಿರುವುದು ಸಂತಸ ಎಂದು ಶಾಸಕ ಎಂ.ಆರ್ ಮಂಜುನಾಥ್ ತಿಳಿಸಿದರು.

ಹನೂರು ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ನಾಗಮಲೆ ಅತಿಥಿಗೃಹದ ಸಮೀಪ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಸ್ಥಳ ಪರಿಶೀಲನೆ ನಡೆಸಿ ನಂತರ ಅವರು ಮಾತನಾಡಿದರು.

ಕಳೆದ ತಿಂಗಳು ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಐತಿಹಾಸಿಕ ಸಚಿವ ಸಂಪುಟ ಸಭೆಯೂ ಯಶಸ್ವಿಯಾಗಿದೆ. ಇದೇ ನಿಟ್ಟಿನಲ್ಲಿ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಶ್ರೀ ಕ್ಷೇತ್ರದಲ್ಲಿ ಆಯೋಜನೆ ಮಾಡಿರುವುದು ಹೆಮ್ಮೆ ಪಡುವ ವಿಚಾರ ಎಂದರು.

ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದು ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರತಿಭಾ ಪುರಸ್ಕಾರ ಪಡೆಯುತ್ತಿರುವ ವಿದ್ಯಾರ್ಥಿಗಳೇ ಧನ್ಯರು. ಶ್ರೀ ಕ್ಷೇತ್ರಕ್ಕೆ ಬರುವ ವಿದ್ಯಾರ್ಥಿಗಳು ಮಲೆಮಹದೇಶ್ವರರ ದರ್ಶನ ಪಡೆದ ನಂತರ ತಮ್ಮ ಜೀವನದಲ್ಲಿ ಬದಲಾವಣೆಯಾಗಲಿದೆ. ಅವರ ಮುಂದಿನ ಭವಿಷ್ಯ ಉಜ್ವಲವಾಗಲಿದೆ ಎಂದು ತಿಳಿಸಿದರು.

ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿಯಲ್ಲಿ ಉತ್ತಮ ಫಲಿತಾಂಶ ಪಡೆದು ಪ್ರಶಸ್ತಿಗೆ ಭಾಜನರಾಗಿದ್ದೀರಿ ಮುಂದಿನ ದಿನಗಳಲ್ಲಿ ಉನ್ನತ ಶಿಕ್ಷಣ ಪಡೆದು ಪ್ರತಿಯೊಬ್ಬ ಪತ್ರಕರ್ತರ ಮಕ್ಕಳು ಸರ್ಕಾರಿ ಉದ್ಯೋಗಗಳನ್ನು ಪಡೆಯುವ ಮೂಲಕ ಇತರರಿಗೆ ಮಾದರಿಯಾಗಬೇಕು ಎಂದು ಮಂಜುನಾಥ್ ಸಲಹೆ ನೀಡಿದರು.

ಚಾಮರಾಜನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ದೇವರಾಜು ಕಪ್ಪಸೋಗೆ ಅವರಿಂದ ಕಾರ್ಯಕ್ರಮ ಸಂಬಂಧ ಅಗತ್ಯ ಮಾಹಿತಿ ಪಡೆದುಕೊಂಡರು.

ಸ್ಥಳದಲ್ಲಿಯೇ ಇದ್ದ ಪ್ರಾಧಿಕಾರದ ಕಾರ್ಯದರ್ಶಿ ಎ ಇ ರಘು ಅವರಿಗೆ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಸಂಬಂಧ ಪತ್ರಕರ್ತರಿಗೆ ಪ್ರಾಧಿಕಾರದ ವತಿಯಿಂದ ಎಲ್ಲಾ ರೀತಿಯ ಸಹಕಾರ ನೀಡಿ ಕಾರ್ಯಕ್ರಮವನ್ನು ಯಶಸ್ವಿಯಾಗಲು ಶ್ರಮಿಸುವಂತೆ ತಿಳಿಸಿದರು.

ಪ್ರಾಧಿಕಾರದ ಕಾರ್ಯದರ್ಶಿ ಎಇ ರಘು ಮಾತನಾಡಿ ಮಲೆಮಾದೇಶ್ವರ ಬೆಟ್ಟದಲ್ಲಿ ನಡೆಯುವ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಸಂಬಂಧ ಪ್ರಾಧಿಕಾರದ ವತಿಯಿಂದ ವಸತಿ, ದರ್ಶನ, ದಾಸೋಹ ಸೇರಿದಂತೆ ಎಲ್ಲಾ ರೀತಿಯ ಸೌಕರ್ಯ ಒದಗಿಸಿಕೊಡಲು ಈಗಾಗಲೇ ಚರ್ಚೆ ನಡೆಸಲಾಗಿದೆ ಎಂದು ತಿಳಿಸಿದರು.

ಅತಿಥಿ ಗಣ್ಯರನ್ನು ಗೌರವದಿಂದ ಸತ್ಕರಿಸಿ:

ರಾಜ್ಯದ ವಿವಿಧ ಜಿಲ್ಲೆಗಳಿಂದ ನಮ್ಮ ಕ್ಷೇತ್ರಕ್ಕೆ ಅತಿಥಿ ಗಣ್ಯರು, ಪತ್ರಕರ್ತರು, ಪ್ರಶಸ್ತಿ ಪುರಸ್ಕೃತರು ಆಗಮಿಸುತ್ತಿರುವುದರಿಂದ ಬರುವ ಗಣ್ಯರನ್ನು ಯಾವುದೇ ಲೋಪದೋಷಗಳು ಆಗದಂತೆ ಸತ್ಕಾರ ಮಾಡಬೇಕು.

ಧಾರ್ಮಿಕ ಕ್ಷೇತ್ರದಲ್ಲಿ ಕಾರ್ಯಕ್ರಮ ನಡೆಯುತ್ತಿರುವುದರಿಂದ ಅಚ್ಚುಕಟ್ಟಾಗಿ ನಿರ್ವಹಿಸಿ ಈ ಕಾರ್ಯಕ್ರಮವು ಜನ ಮಾನಸದಲ್ಲಿ ಉಳಿದು ಇತಿಹಾಸ ಪುಟದಲ್ಲಿ ಸೇರುವಂತೆ ಕಾರ್ಯಕ್ರಮ ಆಯೋಜನೆ ಮಾಡಬೇಕು. ನಿಮ್ಮ ಈ ಕಾರ್ಯಕ್ರಮಕ್ಕೆ ಎಲ್ಲಾ ರೀತಿಯ ಸಹಕಾರ ನೀಡುತ್ತೇನೆ. ನನ್ನ ಕಡೆಯಿಂದ ಯಾವ ಕೆಲಸಗಳು ಆಗಬೇಕು ಎಂಬುದನ್ನು ಪಟ್ಟಿ ಮಾಡಿಕೊಟ್ಟರೆ ಎಲ್ಲಾವನ್ನು ಮಾಡಿಕೊಡುತ್ತೇನೆ. ನೀವು ಕಾರ್ಯಕ್ರಮವನ್ನು ಅಚ್ಚು ಕಟ್ಟಾಗಿ ಮಾಡಲು ಎಲ್ಲಾ ತಯಾರಿ ಮಾಡಿಕೊಳ್ಳಿ ಎಂದು ಮಂಜುನಾಥ್ ತಿಳಿಸಿದರು.

ಜಿಲ್ಲಾಧ್ಯಕ್ಷ ದೇವರಾಜು ಕಪ್ಪಸೋಗೆ ಮಾತನಾಡಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ್ ತಗಡೂರು ಅವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ಸಿದ್ಧತೆ ಬಗ್ಗೆ ಈಗಾಗಲೇ ಎರಡು ಸಭೆ ನಡೆಸಲಾಗಿದ್ದು ,ರೂಪುರೇಷೆಗಳನ್ನು ಮಾಡಿಕೊಳ್ಳಲಾಗಿದೆ. ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ಹಲವು ಸಮಿತಿಗಳನ್ನು ರಚನೆ ಮಾಡಲಾಗಿದೆ ಎಂದು ತಿಳಿಸಿದರು.

ಈ ವೇಳೆ ಪ್ರಾಧಿಕಾರದ ಉಪ ಕಾರ್ಯದರ್ಶಿ ಚಂದ್ರಶೇಖರ್,ಎಇಇ ಚಿನ್ನಣ್ಣ ಮತ್ತಿತರರು ಹಾಜರಿದ್ದರು.