ಕೊಳ್ಳೇಗಾಲ: ಸುಪ್ರಸಿದ್ಧ ಪಣ್ಯಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಮಹದೇಶ್ವರನ ಹುಂಡಿಯಲ್ಲಿ 33 ದಿನಗಳ ಅವಧಿಯಲ್ಲಿ 3.13 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ.
ಸಾಲೂರು ಬೃಹನ್ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆದು ಏಣಿಕೆ ಮಾಡಲಾಯಿತು.
ಗುರುವಾರ ಬೆಳಿಗ್ಗೆ 7 ಗಂಟೆಯಿಂದ ಸಂಜೆವರೆಗೂ ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆಯಿತು.
ಒಟ್ಟು 3,13,12,118ರೂ. ನಗದು, 64 ಗ್ರಾಂ ಚಿನ್ನ ಹಾಗೂ 2 ಕೆಜಿ 50 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ. ಇದಲ್ಲದೇ ಚಲಾವಣೆಯಲ್ಲಿ ಇಲ್ಲದ 2,000 ಮುಖಬೆಲೆಯ 100 ನೋಟುಗಳನ್ನು ಭಕ್ತರು ಹುಂಡಿಯಲ್ಲಿ ಹಾಕಿರುವುದು ಕಂಡುಬಂದಿದೆ.
ಅಮಾವಾಸ್ಯೆ ಹಾಗೂ ವಿಶೇಷ ದಿನಗಳ ಹಿನ್ನೆಲೆಯಲ್ಲಿ ಮಾದಪ್ಪನ ಸನ್ನಿಧಿಯಲ್ಲಿ ನಡೆದ ವಿಶೇಷ ಪೂಜಾ ಮಹೋತ್ಸವ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡಿದ್ದರಿಂದ ಹರಕೆಯ ರೂಪದಲ್ಲಿ ಅಪಾರ ಹಣ ಹರಿದು ಬಂದಿದೆ.
ಎಣಿಕೆ ಕಾರ್ಯದಲ್ಲಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ.ಈ. ರಘು, ಪ್ರಾಧಿಕಾರದ ಸಹಾಯಕ ಕಾರ್ಯದರ್ಶಿ ಚಂದ್ರಶೇಖರ್, ನಾಮ ನಿರ್ದೇಶಿತ ಸದಸ್ಯರಾದ ಮರಿಸ್ವಾಮಿ, ಭಾಗ್ಯಮ್ಮ, ಹಣಕಾಸು ಸಲಹಾ ಸಮಿತಿಯ ಮಹದೇವಪ್ಪ, ಜಿಲ್ಲಾಧಿಕಾರಿ ಕಚೇರಿಯ ಮುಜರಾಯಿ ಇಲಾಖೆಯ ವಿಭಾಗದ ಭಾರತಿ, ಕೊಳ್ಳೇಗಾಲ ಬ್ಯಾಂಕ್ ಆಫ್ ಬರೋಡದ ವ್ಯವಸ್ಥಾಪಕರು ಮತ್ತು ಸಿಬ್ಬಂದಿ ಹಾಜರಿದ್ದರು.
