ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ವ್ಯಾಪ್ತಿಯಲ್ಲಿ ಚಿರತೆ ಸೆರೆ ಹಿಡಿಯುವ ಕಾರ್ಯಾಚರಣೆಗೆ ತೊಂದರೆಯಾಗ ಬಾರದೆಂಬ ಕಾರಣಕ್ಕೆ ಇದೇ ಬುಧವಾರದಿಂದ ನಾಲ್ಕು ದಿನ ಪಾದಯಾತ್ರೆ ನಿಷೇಧಿಸಲಾಗಿದೆ.
ಮಹದೇಶ್ವರ ಬೆಟ್ಟಕ್ಕೆ ಭಕ್ತಾಧಿಗಳು, ಸಾರ್ವಜನಿಕರು ಪಾದಯಾತ್ರೆ ಅಥವಾ ಕಾಲ್ನಡಿಗೆಯಲ್ಲಿ ತೆರಳುವುದನ್ನು ಹಾಗೂ ದ್ವಿಚಕ್ರ ವಾಹನಗಳಲ್ಲಿ ಸಂಚರಿಸುವುದನ್ನು ಜನವರಿ 21 ರಿಂದ 24ರ ಮಧ್ಯರಾತ್ರಿ ವರೆಗೆ ತಾತ್ಕಾಲಿಕವಾಗಿ ನಿರ್ಬಂಧಿಸಿ, ನಿಷೇಧಾಜ್ಞೆ ಹೊರಡಿಸಿ ಜಿಲ್ಲಾಧಿಕಾರಿಯವರು ಆದೇಶಿಸಿದ್ದಾರೆ.
ಈ ನಿಷೇಧಾಜ್ಞೆಯು ಚಿರತೆ ಸೆರೆ ಹಿಡಿಯುವ ಕಾರ್ಯಾಚರಣೆಯಲ್ಲಿ ಭಾಗವಹಿಸುವ ಅರಣ್ಯ ಅಧಿಕಾರಿಗಳು, ಸಿಬ್ಬಂದಿ, ಪಶು ವೈದ್ಯಾಧಿಕಾರಿಗಳು ಹಾಗೂ ಬಂದೋಬಸ್ತ್ ಗೆ ನಿಯೋಜನೆಗೊಂಡ ಪೊಲೀಸ್ ಸಿಬ್ಬಂದಿಗೆ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.
