(ವರದಿ:ಸಿದ್ದರಾಜು)
ಕೊಳ್ಳೇಗಾಲ: ಪಟ್ಟಣದ ಶ್ರೀ ಮಹದೇಶ್ವರ ಕ್ರೀಡಾಂಗಣ ದಲ್ಲಿ ಗಣರಾಜ್ಯೋತ್ಸವ ಆಚರಣೆ ಮಾಡಲು ತಾ.ಪಂ ಕಚೇರಿಯಲ್ಲಿ ಕರೆದಿದ್ದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.
ಸಭೆಯಲ್ಲಿ ತಹಶಿಲ್ದಾರ್ ಬಸವರಾಜು ಮಾತನಾಡಿ, ಜ.26 ರ ಬೆಳಿಗ್ಗೆ 9 ಗಂಟೆಗೆ ಸರಿಯಾಗಿ ಉಪವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾರವರು ಧ್ವಜಾರೋಹಣ ನಡೆಸಿ ಬಳಿಕ ಸಂದೇಶ ಸಾರಲಿದ್ದಾರೆ ಎಂದು ತಿಳಿಸಿದರು.
ನಂತರ ಪಥಸಂಚಲನ ನಡೆಸಿ, ಬಾಬಾ ಸಾಹೇಬ್ ಡಾ.ಅಂಬೇಡ್ಕರ್ ಹಾಗೂ ಮಹಾತ್ಮ ಗಾಂಧಿಜೀ ಅವರ ಭಾವಚಿತ್ರಕ್ಕೆ ಪುಷ್ಪನಮನ ಮಾಡಲಿದ್ದಾರೆ. ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.
ತಾಲ್ಲೂಕಿನ ಎಲ್ಲಾ ಕಚೇರಿಯಲ್ಲಿ ಗಣರಾಜ್ಯೋತ್ಸವ ಅಂಗವಾಗಿ ಧ್ವಜಾರೋಹಣ ನಡೆಸಿ ಸರಿಯಾದ ಸಮಯಕ್ಕೆ ಅಧಿಕಾರಿಗಳು ತಾಲ್ಲೂಕು ಆಡಳಿತ ನಡೆಯುವ ಕಾರ್ಯಕ್ರಮಕ್ಕೆ ತಪ್ಪದೇ ಆಗಮಿಸಬೇಕು. ಗೈರುಹಾಜರಾದ ಅಧಿಕಾರಿಗಳಿಗೆ ಕ್ರಮ ಜರುಗಿಸಲು ಮೇಲಾಧಿಕಾರಿಗಳಿಗೆ ಸೂಚಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸಭೆಯಲ್ಲಿ ಕ್ಷೇತ್ರಾ ಶಿಕ್ಷಣಾಧಿಕಾರಿ ಮಂಜುಳಾ, ನಗರಸಭೆ ಪೌರಯುಕ್ತರಾದ ರುದ್ರಮ್ಮ ಶರಣಯ್ಯ ಹಾಗೂ ಅಧಿಕಾರಿಗಳು, ವಿವಿಧ ಸಂಘಟನೆಯ ಪದಾಧಿಕಾರಿಗಳು, ಮುಖಂಡರು ಹಾಜರಿದ್ದರು.
