ಸುಳ್ಳು ಜಾಹಿರಾತು ಪ್ರಕರಣ: ಬಿಜೆಪಿ ವಿರುದ್ಧ ಕೇಸು ದಾಖಲಿಸಲು ನಿರ್ಧಾರ-ಸಿಎಂ

ಮಂಗಳ್ ವೇಡ (ಮಹಾರಾಷ್ಟ್ರ): ಕಾಂಗ್ರೆಸ್ ಬಗ್ಗೆ ಪತ್ರಿಕೆಗಳಿಗೆ ಸುಳ್ಳು ಜಾಹಿರಾತು ನೀಡಿದ ಬಿಜೆಪಿ ವಿರುದ್ಧ ಕೇಸು ದಾಖಲಿಸಲು ಕಾರ್ನಾಟಕ ಸರ್ಕಾರ‌ ನಿರ್ಧರಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು.

ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯ ಪಂಡರಪುರ ಮಂಗಳ್ ವೇಡಾ ದಲ್ಲಿ ಮಹಾರಾಷ್ಟ್ರ ರಾಜ್ಯ ಕಾಂಗ್ರೆಸ್ ಆಯೋಜಿಸಿದ್ದ ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಸಿದ್ದು ಮಾತನಾಡಿದರು.

ಕರ್ನಾಟಕ ಸರ್ಕಾರ ರಾಜ್ಯದಲ್ಲಿ ಗ್ಯಾರಂಟಿಗಳನ್ನು ಜಾರಿ ಮಾಡದೆ ವಂಚಿಸಿದೆ ಎನ್ನುವ ಸುಳ್ಳು ಜಾಹಿರಾತನ್ನು ಪುಟಗಟ್ಟಲೆ ನೀಡಿದ್ದ ಬಿಜೆಪಿ ವಿರುದ್ಧ ಕರ್ನಾಟಕ ಸರ್ಕಾರ ಕೇಸು ದಾಖಲಿಸಿ ಸರಿಯಾದ ಪಾಠ ಕಲಿಸಲಿದೆ ಎಂದು ಹೇಳಿದರು.

ಕಾಂಗ್ರೆಸ್ ಮೂಲಕ ಬಹುತ್ವದ ಸಂಸ್ಕೃತಿಯನ್ನು ಉಳಿಸಲು ನಡೆಯುತ್ತಿರುವ ರಾಜಕೀಯ ಚಳವಳಿಯಲ್ಲಿ ನೀವೆಲ್ಲಾ ಒಟ್ಟಾಗಬೇಕು ಕಾಂಗ್ರೆಸ್ ಗೆಲ್ಲಿಸಬೇಕು ಎಂದು ಕರೆ ನೀಡಿದರು.

ಪಂಡರಪುರ ಮಂಗಲ್ ವೇಡ ಪಾಂಡುರಂಗ, ವಿಠ್ಠಲ ಭಗವಾನ್ ಅವರ ಮೌಲ್ಯಗಳನ್ನು ಆಚರಿಸುವ ಅತ್ಯಂತ ಪವಿತ್ರವಾದ ಸ್ಥಳ,
ಶರಣ ಬಸವೇಶ್ವರರು 14 ವರ್ಷ ಮಂತ್ರಿಯಾಗಿದ್ದ ಸ್ಥಳ ಇದು
ಜಾತಿ ತಾರತಮ್ಯ ಹೋಗಲಾಡಿಸಲು, ಮನುಷ್ಯ ತಾರತಮ್ಯ ನಿವಾರಿಸಲು ಬಸವೇಶ್ವರರು ಲಿಂಗಾಯತ ಧರ್ಮವನ್ನು ಸ್ಥಾಪಿಸಿದರು. ಇಂತಹ ಪವಿತ್ರವಾದ ಸ್ಥಳದಲ್ಲಿ ಬಿಜೆಪಿ ಗೆಲ್ಲಬಾರದು ಎಂದು ಹೇಳಿದರು.

ದೇಶದಲ್ಲಿ ಬಡವರು ಮತ್ತು ಶ್ರೀಮಂತರ ನಡುವಿನ ಅಂತರ ಕಡಿಮೆ ಮಾಡುತ್ತಾ ಬಂದಿದ್ದು ಕಾಂಗ್ರೆಸ್. ಆದರೆ ಬಿಜೆಪಿ ಶ್ರೀಮಂತ ಮತ್ತು ಮೇಲ್ವರ್ಗದವರ ಪಕ್ಷವಾಗಿದ್ದು ಈ ಕಾರಣಕ್ಕೇ ಬಿಜೆಪಿ ಬಡವರ ಮತ್ತು ಶ್ರೀಮಂತರ ನಡುವಿನ ಅಂತರವನ್ನು ಹೆಚ್ಚಿಸುತ್ತಿದೆ ಎಂದು ಸಿದ್ದು ಟೀಕಿಸಿದರು.

ಪ್ರಧಾನಿ ನರೇಂದ್ರ ಮೋದಿ ಕೇವಲ ಅಂಬಾನಿ ಅದಾನಿಯವರ ಸಂಪತ್ತು ಹೆಚ್ಚಿಸಲು ಕೆಲಸ ಮಾಡಿದರೇ ಹೊರತು ಬಡವರ, ರೈತರ, ಕಾರ್ಮಿಕರ, ಶ್ರಮಿಕರ ಬದುಕನ್ನು ಸುಧಾರಿಸಲು ಒಂದೇ ಒಂದು ಕಾರ್ಯಮವನ್ನೂ ರೂಪಿಸಲಿಲ್ಲ,
ಅಚ್ಛೇ ದಿನ್ ಆಯೆಗಾ ಎಂದರು. ಕಹಾಂ ಹೈ ಅಚ್ಛೆ ದಿನ್, ಬೆಲೆ ಏರಿಕೆಗೆ ಬ್ರೇಕ್ ಹಾಕುವುದಾಗಿ ಭಾಷಣ ಮಾಡಿದರು ಆದರೆ ಬೆಲೆ ಏರಿಕೆ ಮುಗಿಲು ಮುಟ್ಟಿದೆ ಎಂದು ಸಿದ್ದರಾಮಯ್ಯ ಆಕ್ರೋಶ‌ ವ್ಯಕ್ತಪಡಿಸಿದರು.

ಅಬಕಾರಿ ಇಲಾಖೆಯಲ್ಲಿ 700 ಕೋಟಿ ಲಂಚ ಪಡೆದು ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಚುನಾವಣೆ ನಡೆಸುತ್ತಿದೆ ಎನ್ನುವ ಹಸಿ ಸುಳ್ಳನ್ನು ಇದೇ ಮಹಾರಾಷ್ಟ್ರದಲ್ಲಿ ಮೋದಿ ಹೇಳಿದ್ದಾರೆ. ಮೋದಿಯವರೇ ನಾನು ನೀವು ಸುಳ್ಳು ಭಾಷಣ ಮಾಡಿದ ಮಹಾರಾಷ್ಟ್ರಕ್ಕೇ ಬಂದು ನಿಮಗೆ ನೇರ ಸವಾಲು ಹಕುತ್ತಿದ್ದೇನೆ. ನಿಮ್ಮ ಭಾಷಣದ ಸುಳ್ಳನ್ನು ಸಾಬೀತು ಮಾಡಿದರೆ ನಾನು ಆ ಕ್ಷಣ ರಾಜಕೀಯ ನಿವೃತ್ತಿ ಪಡೆಯಲು ಸಿದ್ದ. ಇಲ್ಲದಿದ್ದರೆ ನೀವು ರಾಜಕೀಯ ನಿವೃತ್ತಿ ಘೋಷಿಸುತ್ತೀರಾ ಎಂದು ಸಿಎಂ ಸಿದ್ದರಾಮಯ್ಯ ನೇರ ಸವಾಲು ಹಾಕಿದರು.

ನಿಮಗೆ ಭ್ರಷ್ಟಾಚಾರದ ವಿರುದ್ಧ ಮಾತನಾಡುವ ನೈತಿಕತೆ ಇಲ್ಲ. ಇದ್ದರೆ ನನ್ನ ಸವಾಲನ್ನು ಸ್ವೀಕರಿಸಿ ಎಂದು ಮೋದಿಯವರಿಗೆ ಕರೆ ನೀಡಿದರು.

ಏಕನಾಥ್ ಶಿಂಧೆ ಮಹಾರಾಷ್ಟ್ರ ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬರಲಿಲ್ಲ. ಆಪರೇಷನ್ ಕಮಲದ ಮೂಲಕ ಅಧಿಕಾರಕ್ಕೆ ಬಂದರು. ಈ ಆಪರೇಷನ್ ಗೆ ಬಳಸಿದ ಹಣ ಯಾವುದುಭ್ರಷ್ಟಾಚಾರದ್ದು ಅಲ್ವಾ, ಆ ಹಣ ಎಲ್ಲಿಂದ ಬಂತು ಎಂಬುದನ್ನು ಮಹಾರಾಷ್ಟ್ರ ಜನತೆಗೆ ಹೇಳಬಲ್ಲಿರಾ ಎಂದು ಪ್ರಶ್ನಿಸಿದರು.

ಆಪರೇಷನ್ ಕಮಲದ ಬಿಜೆಪಿಯ ಹೊಲಸು ಸಂಸ್ಕಾರವನ್ನು ಕರ್ನಾಟಕ ಜನತೆ ತಿರಸ್ಕರಿಸಿದ್ದಾರೆ. ಈಗ ಮಹಾರಾಷ್ಟ್ರ ಜನತೆಯ ಸರದಿ. ನೀವೂ ಆಪರೇಷನ್ ಕಮಲದ ಸಂಸ್ಕಾರವನ್ನು ತಿರಸ್ಕರಿಸಿ ಸೆಡ್ಡು ಹೊಡೆಯಿರಿ ಎಂದು ಕರೆ ನೀಡಿದರು.

ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಜಾರಿ ಆಗದೆ ಕಾಂಗ್ರೆಸ್ ಕರ್ನಾಟಕ ಜನತೆಗೆ ವಂಚಿಸಿದ್ದಾಗಿ ಮಹಾರಾಷ್ಟ್ರ ಬಿಜೆಪಿ ಸುಳ್ಳು ಜಾಹಿರಾತು ನೀಡಿದೆ,ಇವರಿಗೆ ನಾಚಿಕೆ ಇಲ್ಲ.
ಬಿಜೆಪಿಯ ಮೋದಿ ಮತ್ತು ಸುಳ್ಳಿನ ಸರದಾರರೇ ಕರ್ನಾಟಕಕ್ಕೆ ಬಂದು ನೋಡಿ. ನಿಮಗೆ ವಿಶೇಷ ವಿಮಾನದ ವ್ಯವಸ್ಥೆ ನಾನೇ ಮಾಡುತ್ತೇನೆ,ಕರ್ನಾಟಕದಲ್ಲಿ ಗ್ಯಾರಂಟಿಗಳು ಜಾರಿ ಆಗಿಲ್ಲ ಎಂದರೆ ನಾನು ರಾಜೀನಾಮೆ ಕೊಡ್ತೀನಿ. ನಮ್ಮ ನೆಲದಲ್ಲಿ ಗ್ಯಾರಂಟಿಗಳು ಜಾರಿ ಆಗಿರುವುದು ಸತ್ಯ ಆದರೆ ನಿಮ್ಮ ಸುಳ್ಳುನ ಜಾಹಿರಾತನ್ನು ವಾಪಾಸ್ ಪಡೆದು ಮಹಾರಾಷ್ಟ್ರ ಜನತೆಯ ಕ್ಷಮೆ ಕೇಳಬೇಕು. ಈ ಸವಾಲು ಸ್ವೀಕರಿಸುತ್ತೀರಾ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ವರ್ಷಕ್ಕೆ 56 ಸಾವಿರ ಕೋಟಿ ರೂಪಾಯಿಯನ್ನು ಗ್ಯಾರಂಟಿಗಳ ಮೂಲಕ ನನ್ನ ರಾಜ್ಯದ ಕೋಟಿ ಕೋಟಿ ಜನರ ಖಾತೆಗೆ ನೇರವಾಗಿ ಹಣ ಹಾಕುತ್ತಿದ್ದೇವೆ

ಮಹಾರಾಷ್ಟ್ರದಲ್ಲೂ ಕಾಂಗ್ರೆಸ್ ಮತ್ತು ಮಹಾ ವಿಕಾಸ್ ಅಘಾಡಿ ಗ್ಯಾರಂಟಿಗಳನ್ನು ಘೋಷಣೆ ಮಾಡಿದೆ. ಇಲ್ಲೂ ಮಹಾ ಆಘಾಡಿ ಅಧಿಕಾರಕ್ಕೆ ಬಂದು ಎಲ್ಲಾ ಭರವಸೆಗಳನ್ನು ಈಡೇರಿಸುವುದು ಶತಸಿದ್ದ. ಏಕೆಂದರೆ ನುಡಿದಂತೆ ನಡೆದ ಚರಿತ್ರೆ ಕಾಂಗ್ರೆಸ್ ಪಕ್ಷಕ್ಕೆ ಇದೆ ಎಂದು ಹೇಳಿದರು.

ಲಕ್ಷಾಂತರ ಭಕ್ತರ ಸನ್ನಿಧಿಯಾಗಿರುವ ಮಂಗಳವೇಡಾ ಮಹಾಲಿಂಗರಾಯ ಕ್ಷೇತ್ರಕ್ಕೆ ಬರುವ ಭಕ್ತರಿಗಾಗಿ ರಾಜ್ಯ ಸರ್ಕಾರ ಯಾತ್ರಿ ನಿವಾಸ ಸ್ಥಾಪಿಸಲಿದೆ ಎಂದು ಇದೇ ಸಂದರ್ಭದಲ್ಲಿ ಸಿಎಂ ಭರವಸೆ ನೀಡಿದರು.

ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಸುಶೀಲ್ ಕುಮಾರ್ ಶಿಂಧೆ, ಸಂಸದೆ ಪ್ರಣತಿ ಶಿಂಧೆ, ಸಚಿವರಾದ ಎಂ.ಬಿ.ಪಾಟೀಲ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.