ಮೈಸೂರು: ಮೈಸೂರಿನ ಗೋಕುಲಂ ಬಡಾವಣೆಯಲ್ಲಿ 40 ವರ್ಷದ ವ್ಯಕ್ತಿಯೊಬ್ಬರನ್ನು ಹಾಡಹಗಲೇ ಗುಂಪೊಂದು ಸಾರ್ವಜನಿಕವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದ್ದು,ಈ ಪ್ರದೇಶದ ಜನ ಬೆಚ್ಚಿಬಿದ್ದಿದ್ದಾರೆ.
ಕೊಲೆಯಾದ ವ್ಯಕ್ತಿಯನ್ನು ಮೈಸೂರು ನಿವಾಸಿ ಮಹೇಶ್ ಟಿ (40) ಎಂದು ಗುರುತಿಸಲಾಗಿದೆ.
ಗೋಕುಲಂನಲ್ಲಿ ಸಾರ್ವಜನಿಕವಾಗಿ 6 ಜನರ ಗುಂಪು ಮಾರಕಾಸ್ತ್ರಗಳಿಂದ ಮಹೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿ ಪರಾರಿಯಾಯಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ವಿ.ವಿ. ಪುರಂ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಮಹಜರು ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಮಹಿಳೆಯೊಂದಿಗಿನ ಅಕ್ರಮ ಸಂಬಂಧದ ವಿಚಾರಕ್ಕೆ ಸಂಬಂಧಿಸಿದಂತೆ ಈ ಹತ್ಯೆ ನಡೆದಿರಬಹುದೆಂಬ ಶಂಕೆ ವ್ಯಕ್ತವಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಆರೋಪಿಗಳ ಪತ್ತೆಗಾಗಿ ಪೊಲೀಸರು 2 ವಿಶೇಷ ತಂಡಗಳನ್ನು ರಚಿಸಿದ್ದಾರೆ.
