ಮಾರ್ಚ್ 3 ರಿಂದ ಅಧಿವೇಶನ: 7 ರಂದು ಬಜೆಟ್- ಸಿಎಂ ಸಿದ್ದರಾಮಯ್ಯ

Spread the love

ಬೆಂಗಳೂರು: ವಿಧಾನಮಂಡಲದ ಅಧಿವೇಶನ ಮಾರ್ಚ್ 3 ರಿಂದ ಪ್ರಾರಂಭವಾಗಲಿದ್ದು,7 ರಂದು ಬಜೆಟ್ ಮಂಡಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಸೋಮವಾರ ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ‌ ಸಿಎಂ,ನೂತನ ವರ್ಷದ ಮೊದಲನೇ ಅಧಿವೇಶನವಾದ್ದರಿಂದ ರಾಜ್ಯಪಾಲರು ಮೂರನೇ ತಾರೀಖಿನಂದು ಜಂಟಿ ಸದನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ ಎಂದು ಹೇಳಿದರು.

ಮಂಗಳವಾರದಿಂದ ಗುರುವಾರದವರೆಗೆ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆದು, ಮಾರ್ಚ್ 7 ರಂದು, 2025-2026 ನೇ ಸಾಲಿನ ಆಯವ್ಯಯವನ್ನು ಮಂಡಿಸಲಾಗುವುದು ಎಂದು ತಿಳಿಸಿದರು.

ಆಯವ್ಯಯದ ಮೇಲೆ ಚರ್ಚೆ ನಡೆದು ಉತ್ತರವನ್ನು ಮಾರ್ಚ್ ತಿಂಗಳ ಕೊನೆಯಲ್ಲಿ ನೀಡಲಾಗುವುದು. ಅಧಿವೇಶನ ಎಷ್ಟು ದಿನದವರೆಗೆ ನಡೆಸಬೇಕೆಂದು ವ್ಯವಹಾರ ಸಲಹಾ ಸಮಿತಿಯಲ್ಲಿ ತೀರ್ಮಾನ ಮಾಡಲಾಗುವುದು ಎಂದು ಸಿಎಂ ಹೇಳಿದರು.

ವಿವಿಧ ಇಲಾಖೆಗಳೊಂದಿಗೆ ಆಯವ್ಯಯ ಪೂರ್ವಭಾವಿ ಸಭೆ ನಡೆಸಲಾಗಿದೆ, ಇಂದು ರೈತ ಮುಖಂಡರೊಂದಿಗೆ ಸಭೆ ನಡೆಸಿದ್ದು, ಅವರ ಸಲಹೆಗಳನ್ನು ಗಮನದಲ್ಲಿಟ್ಟುಕೊಂಡು ಬಜೆಟ್ ತಯಾರಿಸುವಾಗ ಇತಿಮಿತಿಯೊಳಗೆ ಸಲಹೆಗಳನ್ನು ಸೇರ್ಪಡೆ ಮಾಡಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಸಿಎಂ ಉತ್ತರಿಸಿದರು.

ಮೆಟ್ರೋ ರೈಲಿನ ದರ ನಿಗದಿ ಮಾಡುವುದು ಕೇಂದ್ರ ಸರ್ಕಾರ ನೇಮಕ ಮಾಡಿರುವ ಸಮಿತಿ. ಮೆಟ್ರೋ ಸ್ವಾಯತ್ತ ಸಂಸ್ಥೆಯಾದರೂ, ಸಮಿತಿಯಲ್ಲಿ ಇಬ್ಬರು ಕೇಂದ್ರ ಸರ್ಕಾರದ ಪ್ರತಿನಿಧಿಗಳು ಹಾಗೂ ಇಬ್ಬರು ರಾಜ್ಯ ಸರ್ಕಾರದ ಪ್ರತಿನಿಧಿಗಳಿರುತ್ತಾರೆ. ಬೆಲೆ ನಿಗದಿ ಮಾಡಲು ರಾಜ್ಯ ಸರ್ಕಾರ ಪ್ರಸ್ತಾವನೆ ನೀಡುತ್ತದೆ. ಬೆಲೆ ನಿಗದಿ ಮಾಡುವುದು ಸಮಿತಿ. ಅಧ್ಯಕ್ಷರನ್ನು ನೇಮಕ ಮಾಡುವುದು ಕೇಂದ್ರ ಸರ್ಕಾರ. ಪ್ರಸ್ತುತ ತಮಿಳುನಾಡು ರಾಜ್ಯದ ನಿವೃತ್ತ ನ್ಯಾಯಾಧೀಶರು ಅಧ್ಯಕ್ಷರಾಗಿದ್ದಾರೆ ಎಂದು ತಿಳಿಸಿದರು.

ಅನ್ನಭಾಗ್ಯ ಯೋಜನೆಯ ಮೊತ್ತ ಐದು ತಿಂಗಳಿನಿಂದ ಹಾಗೂ ಗೃಹಲಕ್ಷ್ಮೀ ಯೋಜನೆಯ ಮೊತ್ತ ಮೂರು ತಿಂಗಳಿನಿಂದ ಜಮಾ ಆಗಿಲ್ಲ ಎಂಬ ಆರೋಪ ಇದೆಯಲ್ಲಾ ಎಂಬ ಸುದ್ದಿಗಾರರ ಪ್ರಶ್ನೆಗೆ ಯಾವ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.