ಬೆಂಗಳೂರು: ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಹೋರಾಟ ಮುಂದುವರಿಸುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದರು.
ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಾಯುಕ್ತ ಮತ್ತು ಇಡಿ ತನಿಖೆ ನಡೆಯುತ್ತಿದ್ದು, ಸದ್ಯಕ್ಕೆ ಸಿದ್ದರಾಮಯ್ಯನವರಿಗೂ ಸ್ವಲ್ಪ ರಿಲೀಫ್ ಸಿಕ್ಕಿದೆ, ಹೈಕೋರ್ಟ್ ಆದೇಶವನ್ನು ನಾವು ಒಪ್ಪಲೇಬೇಕಾಗುತ್ತದೆ. ಸಿದ್ದರಾಮಯ್ಯ ವಿಚಾರದಲ್ಲಿ ಕಾನೂನು ಹೋರಾಟ ಮುಂದುವರಿಸುತ್ತೇವೆ ಎಂದು ಸ್ಪಷ್ಟಪಡಿಸಿದರು.
ಕಾಂಗ್ರೆಸ್ ಆಡಳಿತದ 20 ತಿಂಗಳಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ನಡೆದಿಲ್ಲ. ಇದನ್ನು ಕಾಂಗ್ರೆಸ್ ಶಾಸಕರೇ ಒಪ್ಪಿಕೊಂಡಿದ್ದಾರೆ. ರಾಜ್ಯ ಸುಭದ್ರವಾಗಿರಬೇಕಾದರೆ ಕಾನೂನು ಸುವ್ಯವಸ್ಥೆ ಸರಿಯಾಗಿರಬೇಕು. ಆದರೆ ರಾಜ್ಯದಲ್ಲಿ ಬ್ಯಾಂಕ್ ದರೋಡೆ ಗೋವುಗಳಿಗೆ ಕಿರುಕುಳ,ಅತ್ಯಾಚಾರ ಪ್ರಕರಣ ಹೆಚ್ಚಾಗುತ್ತಿವೆ. ಕಾನೂನು ಸುವವ್ಯಸ್ಥೆ ಹದಗೆಟ್ಟು ಹೋಗಿದೆ ಎಂದು ಕಿಡಿಕಾರಿದರು.
ಬೆಳಗಾವಿಯಲ್ಲಿ ಅಷ್ಟು ದೊಡ್ಡ ಅಧಿವೇಶನ ಮಾಡಲು ದುಡ್ಡು ಎಲ್ಲಿಂದ ಬಂತು ಎಂದು ಅಶೋಕ್ ಪ್ರಶ್ನಿಸಿದರು.
ಬಿಜೆಪಿ ಅವಧಿಯಲ್ಲಿ 25 ಸಾವಿರ ಕೋಟಿಯಷ್ಟು ಸಾಲ ಪಡೆಯಲು ಅವಕಾಶ ಇದ್ದರೂ ಜನರ ಮೇಲೆ ಹೊರೆ ಬರಬಾರದು ಎಂದು ಸಾಲ ತೆಗೆದುಕೊಂಡಿಲ್ಲ.ಆದರೆ ಕಾಂಗ್ರೆಸ್ ಸರ್ಕಾರ ಸಾಲಗಾರರ ರಾಜ್ಯ ಮಾಡಲು ಹೊರಟಿದೆ ಎಂದು ಟೀಕಾಪ್ರಹಾರ ನಡೆಸಿದರು.
ಪಕ್ಷದ ಆಂತರಿಕ ವಿಚಾರವನ್ನು ನಾಲ್ಕು ಗೋಡೆಗಳ ಮಧ್ಯೆ ಮಾತಾಡಬೇಕು. ನಾವೆಲ್ಲರೂ ಒಟ್ಟಿಗೆ ಹೋರಾಟ ಮಾಡಿದರೆ ಕಾಂಗ್ರೆಸ್ ಸರ್ಕಾರವನ್ನು ಬಗ್ಗು ಬಡಿಯಬಹುದಾಗಿತ್ತು. ಹದಿನೈದು-ಇಪ್ಪತ್ತು ದಿನಗಳಲ್ಲಿ ಇದಕ್ಕೆ ಅಂತಿಮ ತೀರ್ಮಾನವನ್ನು ಕೇಂದ್ರದ ನಾಯಕರು ಕೊಡುತ್ತಾರೆ ಎಂದು ಅಶೋಕ್ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.