ಮೈಸೂರು: ಮೈಸೂರು ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಜಿಲ್ಲೆಯಾಗಿ ಮಾಡಲು ಅಧಿಕಾರಿಗಳು ಶ್ರಮಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ಪಿ.ಶಿವರಾಜ್ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಬಾಲ್ಯ ವಿವಾಹ ಸಮಾಜದ ಪಿಡುಗಾಗಿದೆ. ಬಾಲ್ಯ ವಿವಾಹವನ್ನು ತಡೆಗಟ್ಟಲು ಸಾರ್ವಜನಿಕರು ಅಧಿಕಾರಿಗಳೊಂದಿಗೆ ಕೈಜೋಡಿಸಬೇಕು. ಬಾಲ್ಯವಿವಾಹ ಪ್ರಕರಣಗಳು ಕಂಡು ಬಂದಲ್ಲಿ ತಕ್ಷಣ ಅಧಿಕಾರಿಗಳ ಗಮನಕ್ಕೆ ತಂದು ತಡೆಗಟ್ಟಬೇಕು ಎಂದು ಮನವಿ ಮಾಡಿದರು.
2025 – 26 ನೇ ಸಾಲಿನಲ್ಲಿ ಮೈಸೂರು ಜಿಲ್ಲೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಚಲಿತ ಮಕ್ಕಳ ಸಮಸ್ಯೆಗಳನ್ನು ಕುರಿತು ಒಂದು ದಿನದ ತರಬೇತಿ ಕಾರ್ಯಗಾರವನ್ನು ಫೆಬ್ರವರಿ 11 ರಂದು ಆಯೋಜಿಸಲಾಗುವುದು ಎಂದು ತಿಳಿಸಿದರು.
ಈ ಕಾರ್ಯಾಗಾರಕ್ಕೆ ಎಲ್ಲಾ ಇಲಾಖೆಗಳಿಂದ ಸರ್ಕಾರದಿಂದ ನೇಮಿಸಲ್ಪಟ್ಟಿರುವ ಎಲ್ಲಾ ಬಾಲ್ಯ ವಿವಾಹ ನಿಷೇಧ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗಿ ತರಬೇತಿಯನ್ನು ಪಡೆದು ಮೈಸೂರು ಜಿಲ್ಲೆಯನ್ನು ಬಾಲ್ಯ ವಿವಾಹ ಮುಕ್ತ ಜಿಲ್ಲೆಯನ್ನಾಗಿ ಮಾಡಬೇಕು ಎಂದು ಶಿವರಾಜ್ ನಿರ್ದೇಶನ ನೀಡಿದರು.
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಎಸ್ ಮಂಜು ರವರು ಮಾತನಾಡಿ 18 ವರ್ಷದ ಒಳಗಿನ ಮಕ್ಕಳ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ ಆಗಿದ್ದು, ಪ್ರತಿಯೊಬ್ಬ ಅಧಿಕಾರಿಯು ಮಕ್ಕಳ ಹಕ್ಕುಗಳನ್ನ ರಕ್ಷಣೆ ಮಾಡುವುದರ ಮೂಲಕ ಬಾಲ್ಯ ವಿವಾಹ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಸಹಕರಿಸಬೇಕು ಎಂದು ಕರೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಯೋಗೇಶ್ ಎನ್ ಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರ್ಯಕ್ರಮ ಸಂಯೋಜನಾಧಿಕಾರಿ ವಿಜಯ್ ಕುಮಾರ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಉದಯ್ ಕುಮಾರ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ರಾಘವೇಂದ್ರ, ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ರವಿಚಂದ್ರ, ಸದಸ್ಯ ಮಹದೇವ್ ಕೋಟೆ ಮತ್ತಿತರರು ಉಪಸ್ಥಿತರಿದ್ದರು.
