ಮೈಸೂರು: ಆರೋಗ್ಯವೇ ಮಾನವನ ಜೀವನದ ನಿಜವಾದ ಸಂಪತ್ತು. ಉತ್ತಮ ಆರೋಗ್ಯವಿಲ್ಲದೆ ಯಾವುದೇ ಸಾಧನೆ ಮಾಡಲು ಸಾಧ್ಯವಿಲ್ಲ ಎಂದು ಎರಡನೇ ಜಿಲ್ಲಾ ಉಪ ರಾಜ್ಯಪಾಲರಾದ ಲಯನ್ ಎಂ ಸಿದ್ದೇಗೌಡ ಅವರು ತಿಳಿಸಿದರು.
ನಗರದ ಸರ್ಕಾರಿ ಮಹಾರಾಜ ಪದವಿ ಪೂರ್ವ ಕಾಲೇಜು ಆವರಣದಲ್ಲಿ
ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಬೋಧಕೇತರ ನೌಕರರ ಸಂಘ, ಮೈಸೂರು ಹಾಗೂ ಮೈಸೂರು ಗ್ರೀನ್ ಸಿಟಿ ಮತ್ತು ಅಂಬಾಸಿಡರ್ಸ ಲಯನ್ಸ್ ಸಂಸ್ಥೆ ,ಅನ್ನಪೂರ್ಣ ಕಣ್ಣಿನ ಆಸ್ಪತ್ರೆ ,ಮಾತಾ ಆಸ್ಪತ್ರೆ ಸಂಯುಕ್ತ ಆಶ್ರಯದಲ್ಲಿ ಆರೋಗ್ಯ ಜಾಗೃತಿ ಮೂಡಿಸುವ ಉದ್ದೇಶದಿಂದ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣೆ, ರಕ್ತದಾನ ಮತ್ತು ನೇತ್ರ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಜೀವನಶೈಲಿಯ ಬದಲಾವಣೆಯಿಂದಾಗಿ ಮಧುಮೇಹ, ರಕ್ತದೊತ್ತಡ, ಹೃದಯ ಸಂಬಂಧಿ ಕಾಯಿಲೆಗಳು ಸೇರಿದಂತೆ ಹಲವಾರು ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಇಂತಹ ಸಂದರ್ಭದಲ್ಲಿ ಆರೋಗ್ಯ ತಪಾಸಣಾ ಶಿಬಿರಗಳು ಜನರಲ್ಲಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವುದರ ಜೊತೆಗೆ ಆರಂಭಿಕ ಹಂತದಲ್ಲಿಯೇ ಕಾಯಿಲೆಗಳನ್ನು ಪತ್ತೆಹಚ್ಚಲು ನೆರವಾಗುತ್ತವೆ ಎಂದು ಹೇಳಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಎಂ.ಪಿ. ನಾಗಮ್ಮ ಅವರು ಮಾತನಾಡಿ, ಆರೋಗ್ಯದ ಬಗ್ಗೆ ಪ್ರತಿಯೊಬ್ಬರೂ ವಿಶೇಷ ಕಾಳಜಿ ವಹಿಸಬೇಕು. ಆರೋಗ್ಯ ಸಮಸ್ಯೆಗಳು ಗಂಭೀರ ಸ್ವರೂಪ ಪಡೆಯುವ ಮೊದಲು ಅವುಗಳನ್ನು ಗುರುತಿಸಿ ಸೂಕ್ತ ಚಿಕಿತ್ಸೆ ಪಡೆಯುವುದು ಅತ್ಯಂತ ಮುಖ್ಯ ಎಂದು ಹೇಳಿದರು.
ಆರೋಗ್ಯ ತಪಾಸಣೆಯ ಮೂಲಕ ಹಲವು ರೋಗಗಳನ್ನು ಆರಂಭಿಕ ಹಂತದಲ್ಲಿಯೇ ಪತ್ತೆಹಚ್ಚಬಹುದಾಗಿದೆ. ನೇತ್ರ ತಪಾಸಣೆ ವಿಶೇಷವಾಗಿ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗೆ ಅತ್ಯಂತ ಅಗತ್ಯವಾಗಿದ್ದು, ದೃಷ್ಟಿದೋಷಗಳನ್ನು ಸರಿಯಾದ ಸಮಯದಲ್ಲಿ ಗುರುತಿಸುವುದರಿಂದ ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ನಂಜನಗೂಡಿನ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಿ.ಆರ್ ದಿನೇಶ್ ಅವರು ಮಾತನಾಡಿ,
ಲಯನ್ಸ್ ಸಂಸ್ಥೆಯು ವಿಶ್ವದಾದ್ಯಂತ ಆರೋಗ್ಯ, ಶಿಕ್ಷಣ ಮತ್ತು ಮಾನವೀಯ ಸೇವೆಗಳ ಮೂಲಕ ಸಮಾಜದ ಅಭಿವೃದ್ಧಿಗೆ ಶ್ರಮಿಸುತ್ತಿದ್ದು, ಮೈಸೂರಿನಲ್ಲಿಯೂ ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸುತ್ತಿದೆ. ರಕ್ತದಾನ ಶಿಬಿರಗಳು ಮತ್ತು ನೇತ್ರ ತಪಾಸಣಾ ಕಾರ್ಯಕ್ರಮಗಳು ಸಾವಿರಾರು ಜನರ ಜೀವನದಲ್ಲಿ ಹೊಸ ಆಶಾಕಿರಣ ಮೂಡಿಸಿವೆ. ರಕ್ತದಾನವು ಒಂದು ಮಹಾನ್ ದಾನವಾಗಿದ್ದು, ಒಬ್ಬ ವ್ಯಕ್ತಿಯ ರಕ್ತದಾನದಿಂದ ಹಲವಾರು ಜೀವಗಳನ್ನು ಉಳಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ನಿಯೋಜಿತ ಪ್ರಾಂತೀಯ ಅಧ್ಯಕ್ಷ ಲಯನ್ ಜಯಕುಮಾರ್ ಅವರು ಮಾತನಾಡಿ, ರಕ್ತವನ್ನು ಯಾವುದೇ ಕಾರ್ಖಾನೆಯಲ್ಲಿ ಉತ್ಪಾದಿಸಲು ಸಾಧ್ಯವಿಲ್ಲ,ಅದು ಮಾನವನಿಂದ ಮಾನವನಿಗೆ ಮಾತ್ರ ದೊರೆಯುವ ಅಮೂಲ್ಯ ಜೀವದ್ರವ್ಯ. ಆದ್ದರಿಂದ ಆರೋಗ್ಯವಂತ ಯುವಕರು ಹಾಗೂ ಸಾರ್ವಜನಿಕರು ನಿಯಮಿತವಾಗಿ ರಕ್ತದಾನ ಮಾಡುವ ಮೂಲಕ ಸಮಾಜಕ್ಕೆ ಸೇವೆ ಸಲ್ಲಿಸಬೇಕು ಎಂದು ಕರೆ ನೀಡಿದರು.
ಕಾಲೇಜಿನ ಪ್ರಾಂಶುಪಾಲರಾದ ಉದಯ ಶಂಕರ್ ತನ್ನ ಸದಸ್ಯರ ಕಲ್ಯಾಣದ ಜೊತೆಗೆ ಸಾಮಾಜಿಕ ಜವಾಬ್ದಾರಿಯ ಕಾರ್ಯಕ್ರಮಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡಿರುವುದು ಶ್ಲಾಘನೀಯ. ಲಯನ್ಸ್ ಸಂಸ್ಥೆಯ ಸಹಯೋಗದಲ್ಲಿ ಆಯೋಜಿಸಲಾದ ಈ ಶಿಬಿರವು ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಮಹತ್ವದ ಕೊಡುಗೆಯಾಗಿದೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಇಲಾಖೆ ಬೋಧಕೇತರ ನೌಕರರ ಸಂಘದ ಅಧ್ಯಕ್ಷ ಕೃಪಾಕರ್, ಅನ್ನಪೂರ್ಣ ಕಣ್ಣಿನ ಆಸ್ಪತ್ರೆಯ ಅಧ್ಯಕ್ಷರಾದ ಲಯನ್ ಅಶ್ವಥ್ ,ಜಿಲ್ಲಾ ಸರ್ಕಾರಿ ನೌಕರರ ನಿರ್ದೇಶಕರಾದ ಮಂಜೇಗೌಡ , ಉಪನ್ಯಾಸಕರ ಸಂಘದ ಅಧ್ಯಕ್ಷರಾದ ಮಹದೇವ್,ಚಂದ್ರಮ್ಮ, ಸಮೃದ್, ರಮೇಶ್ ಇತರರು ಉಪಸ್ಥಿತರಿದ್ದರು.
