ನಂಜನಗೂಡು: ನಂಜನಗೂಡು ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಹಿರಿಯ ಉಪನ್ಯಾಸಕ ಲಿಂಗಣ್ಣಸ್ವಾಮಿ ಅವರು, ಗಾಂಧೀಜಿಯವರ ಜೀವನವೇ ವಿದ್ಯಾರ್ಥಿಗಳಿಗೆ ಒಂದು ಪಾಠಶಾಲೆಯಾಗಿದೆ. ಸತ್ಯ, ಅಹಿಂಸೆ, ಶಿಸ್ತು, ಸರಳತೆ ಮತ್ತು ಸ್ವಚ್ಛತೆಯಂತಹ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಗಾಂಧೀಜಿಯವರನ್ನು ಸ್ಮರಿಸುವುದು ಸಾರ್ಥಕವಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ವ್ಯಕ್ತಿತ್ವವನ್ನು ಬೆಳೆಸಿಕೊಂಡು ಸಮಾಜಕ್ಕೆ ಮಾದರಿಯಾಗಬೇಕು ಎಂದು ತಿಳಿಹೇಳಿದರು.
ಆಂಗ್ಲ ಭಾಷೆ ಉಪನ್ಯಾಸಕ ಶ್ರೀರಂಗಸ್ವಾಮಿ ಅವರು ಮಾತನಾಡಿ, ಶಾಸ್ತ್ರಿ ರವರ‘ ಸರಳ ಜೀವನ ತತ್ವಗಳು ಇಂದಿಗೂ ಪ್ರಸ್ತುತವಾಗಿದ್ದು, ವಿದ್ಯಾರ್ಥಿಗಳು ಪರಸ್ಪರ ಗೌರವ, ಸಹಬಾಳ್ವೆ ಮತ್ತು ಶಾಂತಿಯ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರು ಮತ್ತು ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.
