ಮೈಸೂರು: ರೈಲ್ವೆಯಲ್ಲಿ ಅಕ್ಟೋಬರ್ 26ರಿಂದ ನವೆಂಬರ್ 1ರವರೆಗೆ ಜಾಗೃತಿ ಅರಿವು ಸಪ್ತಾಹವನ್ನು ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ನೈಋತ್ಯ ರೈಲ್ವೆಯ ಮೈಸೂರು ವಿಭಾಗದ ವತಿಯಿಂದ ಮೈಸೂರು ವಿಭಾಗೀಯ ಕಚೇರಿಯಲ್ಲಿ ವಿಶೇಷ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಸಾರ್ವಜನಿಕ ಸೇವೆಯಲ್ಲಿ ಪ್ರಾಮಾಣಿಕತೆ, ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಉತ್ತೇಜಿಸುವ ಹಾಗೂ ಭ್ರಷ್ಟಾಚಾರ ತಡೆಗಟ್ಟುವ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಮೈಸೂರು ವಿಭಾಗದ ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಶಮ್ಮಾಸ್ ಹಮೀದ್ ಅವರು ವಿಭಾಗೀಯ ಕಚೇರಿಯ ತೆರೆದ ಸಭಾಂಗಣದಲ್ಲಿ ನೆರೆದಿದ್ದ ಅಧಿಕಾರಿಗಳು, ರೈಲ್ವೆ ಸಿಬ್ಬಂದಿ, ಸ್ಕೌಟ್ಸ್ ಮತ್ತು ಗೈಡ್ಸ್ ಸದಸ್ಯರು ಹಾಗೂ ಲಲಿತಾ ಶಾಲೆಯ ವಿದ್ಯಾರ್ಥಿಗಳಿಗೆ ಜಾಗೃತಿ ಪ್ರತಿಜ್ಞೆಯನ್ನು ಬೋಧಿಸಿದರು.
ಜಾಗೃತಿ ಕಾರ್ಯಕ್ರಮದ ಅಂಗವಾಗಿ ಸ್ಕೌಟ್ಸ್ ಮತ್ತು ಗೈಡ್ಸ್ ಸದಸ್ಯರು ಪ್ರಾಮಾಣಿಕತೆ, ನೈತಿಕ ಮೌಲ್ಯಗಳು ಹಾಗೂ ಭ್ರಷ್ಟಾಚಾರ ವಿರೋಧಿ ಸಂದೇಶ ಸಾರುವ ಬೀದಿ ನಾಟಕವನ್ನು ಪ್ರದರ್ಶಿಸಿದರು. ಲಲಿತಾ ಶಾಲೆಯ ವಿದ್ಯಾರ್ಥಿಗಳಿಗಾಗಿ ಚಿತ್ರಕಲಾ ಸ್ಪರ್ಧೆಯನ್ನೂ ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳು ತಮ್ಮ ಕಲಾಕೃತಿಗಳ ಮೂಲಕ ಜಾಗೃತಿ ಮತ್ತು ನೈತಿಕ ಮೌಲ್ಯಗಳ ಮಹತ್ವವನ್ನು ಅಭಿವ್ಯಕ್ತಪಡಿಸಿದರು.
ನಂತರ ಶಮ್ಮಾಸ್ ಹಮೀದ್ ಅವರು ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ, ವಿದ್ಯಾರ್ಥಿಗಳು ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ಸದಸ್ಯರನ್ನು ಅಭಿನಂದಿಸಿದರು.
ಸಾರ್ವಜನಿಕ ಸೇವೆಯಲ್ಲಿ ಪ್ರಾಮಾಣಿಕತೆ ಮತ್ತು ನೈತಿಕ ನಡವಳಿಕೆಯ ಮಹತ್ವದ ಕುರಿತು ಅರಿವು ಮೂಡಿಸುವುದು ಹಾಗೂ ಪಾರದರ್ಶಕ, ಹೊಣೆಗಾರಿಕೆಯುಳ್ಳ ಮತ್ತು ಭ್ರಷ್ಟಾಚಾರಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೊಡುಗೆ ನೀಡುವಂತೆ ಪ್ರೇರೇಪಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿತ್ತು ಎಂದು ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕರು ಹಾಗೂ ಸಾರ್ವಜನಿಕ ಸಂಪರ್ಕ ಅಧಿಕಾರಿ ಗಿರೀಶ್ ಧರ್ಮರಾಜ ಕಲಗೊಂಡ ಅವರು ತಿಳಿಸಿದರು.
