ಬೆಂಗಳೂರು: ಬೆಂಗಳೂರು ನಮ್ಮ ಮೆಟ್ರೋ ದರ ಏರಿಕೆಗೆ ಸಧ್ಯಕ್ಕೆ ಬ್ರೇಕ್ ಬಿದ್ದಿದ್ದು,ಬೆಂಗಳೂರಿಗರು ನಿಟ್ಟುಸಿರು ಬಿಟ್ಟಿದ್ದಾರೆ.
ನಮ್ಮ ಮೆಟ್ರೋ ದರವನ್ನು ಅಸಮರ್ಥನೀಯವಾಗಿ ಏರಿಕೆ ಮಾಡಲು ಹೊರಟಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಸಂಬಂಧಪಟ್ಟಂತೆ ನಾನು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವರಾದ ಮನೋಹರ್ ಲಾಲ್ ಖಟ್ಟರ್ ಅವರೊಂದಿಗೆ ದೂರವಾಣಿ ಮೂಲಕ ಸುದೀರ್ಘವಾಗಿ ಚರ್ಚೆ ನಡೆಸಿದೆ ಎಂದು ಸಂಸದ ತೇಜಸ್ವಿ ಸೂರ್ಯ ತಿಳಿಸಿದ್ದಾರೆ.
ಈಗಾಗಲೇ ಭಾರತದಲ್ಲೇ ಅತ್ಯಂತ ದುಬಾರಿ ಮೆಟ್ರೋ ದರವನ್ನು ಹೊಂದಿರುವ ಬೆಂಗಳೂರಿನಲ್ಲಿ, ಮತ್ತೊಂದು ದರ ಏರಿಕೆಯು ಲಕ್ಷಾಂತರ ನಾಗರಿಕರಿಗೆ ಹಾಗೂ ಸಾರ್ವಜನಿಕ ಸಾರಿಗೆಯನ್ನೇ ನಂಬಿಕೊಂಡಿರುವ ಸಾಮಾನ್ಯ ಜನರಿಗೆ ಗಾಯದ ಮೇಲೆ ಬರೆ ಎಳೆದಂತಾಗುತ್ತದೆ ಎಂದು ಸಚಿವರಿಗೆ ಮನವರಿಕೆ ಮಾಡಿಕೊಟ್ಟಿದ್ದೇನೆ ಎಂದು ಸಂಸದರು ಹೇಳಿದ್ದಾರೆ.
ನನ್ನ ಮನವಿಗೆ ತಕ್ಷಣ ಸ್ಪಂದಿಸಿದ ಕೇಂದ್ರ ಸಚಿವರು, ಸೋಮವಾರದಿಂದ ಜಾರಿಗೆ ಬರಬೇಕಿದ್ದ ಪ್ರಸ್ತಾವಿತ ದರ ಏರಿಕೆಯನ್ನು ಸದ್ಯಕ್ಕೆ ತಡೆಹಿಡಿಯಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ತೇಜಸ್ವಿ ಸೂರ್ಯ ಟ್ವಿಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.
ದರ ನಿಗದಿ ಸಮಿತಿಯಲ್ಲಿನ ಲೋಪದೋಷಗಳ ಬಗ್ಗೆ ವೈಯಕ್ತಿಕವಾಗಿ ಪರಿಶೀಲಿಸುವುದಾಗಿ ಭರವಸೆ ನೀಡಿರುವ ಕೇಂದ್ರ ಸಚಿವರು, ರಾಜ್ಯ ಸರ್ಕಾರ ವಿನಂತಿಸಿದರೆ ದರಗಳ ವೈಜ್ಞಾನಿಕ ಪರಿಷ್ಕರಣೆಗಾಗಿ ಹೊಸ ಸಮಿತಿಯನ್ನು ರಚಿಸುವ ಬಗ್ಗೆಯೂ ಸಕಾರಾತ್ಮಕವಾಗಿ ಮಾತನಾಡಿದರೆಂದು ತಿಳಿಸಿದ್ದಾರೆ.
ಪ್ರಯಾಣಿಕರ ಹಿತದೃಷ್ಟಿಯಿಂದ ಕೂಡಲೇ ಕಾರ್ಯಪ್ರವೃತ್ತರಾದ ಕೇಂದ್ರ ಸಚಿವರಿಗೆ ನಾನು ರಾಜ್ಯದ ಪರವಾಗಿ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದಿದ್ದಾರೆ ತೇಜಸ್ವಿ.
ಈಗ ಪ್ರಶ್ನೆ ಇರುವುದು ರಾಜ್ಯ ಸರ್ಕಾರದ ಮುಂದೆ. ಜನರ ಹಿತಾಸಕ್ತಿಯನ್ನು ಬದಿಗಿಟ್ಟು ದರ ಏರಿಕೆಗೆ ಮುಂದಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ, ತನ್ನ ಹಠಮಾರಿ ಧೋರಣೆ ಬಿಟ್ಟು ಹೊಸ ಎಫ್ಎಫ್ಸಿ ರಚಿಸುವ ಪ್ರಕ್ರಿಯೆಯನ್ನು ಕೂಡಲೇ ಆರಂಭಿಸಬೇಕು.
ಮೆಟ್ರೋ ಪ್ರಯಾಣವು ಪ್ರತಿಯೊಬ್ಬ ಸಾಮಾನ್ಯ ನಾಗರಿಕನಿಗೂ ಕೈಗೆಟುಕುವ ದರದಲ್ಲಿ ಸಿಗುವವರೆಗೂ ಮತ್ತು ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವವರೆಗೂ ನಮ್ಮ ಹೋರಾಟ ಮುಂದುವರಿಯಲಿದೆ ಎಂದೂ ತೇಜಸ್ವಿ ಸೂರ್ಯ ಟ್ವಿಟರ್ ನಲ್ಲಿ ಬರೆದಿದ್ದಾರೆ.
