ನಂದಿನಿ ವೇ ಪ್ರೋಟಿನ್ ಆಧಾರಿತ ಇಡ್ಲಿ, ದೋಸೆ ಹಿಟ್ಟು ಬಿಡುಗಡೆ

Spread the love

ಬೆಂಗಳೂರು: ನಂದಿನಿಯಿಂದ ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡಲಾಗಿದೆ.

ನಂದಿನಿ ವತಿಯಿಂದ ಇದೇ ಪ್ರಥಮ ಬಾರಿಗೆ ಗ್ರಾಹಕರಿಗೆ ಒದಗಿಸಲು ತಯಾರಿಸಿರುವ ನಂದಿನಿ ವೇ ಪ್ರೋಟಿನ್ ಆಧಾರಿತ ಇಡ್ಲಿ ಮತ್ತು ದೋಸೆ ಹಿಟ್ಟನ್ನು ಬಿಡುಗಡೆ ಮಾಡಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನಂದಿನಿಯ ಈ ಉತ್ಪನ್ನಗಳನ್ನು ಬಿಡುಗಡೆ ಮಾಡಿದರು.

ಈ ವೇಳೆ ಮಾತನಾಡಿದ ಸಿದ್ದರಾಮಯ್ಯ,ಕನ್ನಡಿಗರ ಹೆಮ್ಮೆಯ ಬ್ರ್ಯಾಂಡ್‌ ಕೆಎಂಎಫ್‌ನ ನಂದಿನಿ ಉತ್ಪನ್ನಗಳು ದೇಶವ್ಯಾಪಿ ಮಾರುಕಟ್ಟೆಯನ್ನು ಸೃಷ್ಟಿಸಿಕೊಂಡಿದೆ ಎಂದು ಸಂತಸಪಟ್ಟರು.

ರಾಷ್ಟ್ರ ರಾಜಧಾನಿ ದೆಹಲಿಗೂ ನಂದಿನಿ ಹಾಲು ತಲುಪುತ್ತಿದೆ. ದೂರದ ರಾಜಸ್ಥಾನ, ಮಧ್ಯಪ್ರದೇಶ ರಾಜ್ಯಗಳ ಪ್ರಮುಖ ನಗರಗಳಿಂದಲೂ ನಂದಿನಿ ಹಾಲಿಗೆ ಬೇಡಿಕೆ ಬರುತ್ತಿದೆ. ದೇಶದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ತಿರುಪತಿಯ ಸುಪ್ರಸಿದ್ಧ ಲಡ್ಡು ಪ್ರಸಾದವನ್ನು ನಂದಿನಿ ತುಪ್ಪದಿಂದ ಸಿದ್ಧಪಡಿಸಲಾಗುತ್ತಿದೆ. ಹೀಗೆ ನಂದಿನಿಯ ನಾನಾ ಉತ್ಪನ್ನಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗುತ್ತಿದ್ದು, ಕನ್ನಡಿಗರ ಬ್ರ್ಯಾಂಡ್‌ ಹೆಮ್ಮರವಾಗಿ ಬೆಳೆಯುತ್ತಿದೆ ಎಂದು ಹೇಳಿದರು.

ನಾಗರಿಕರ ಬಹುದಿನಗಳ ಅಪೇಕ್ಷೆಯಂತೆ ಇದೀಗ ನಂದಿನಿ ಉತ್ಪನ್ನಗಳಿಗೆ ಹೊಸ ಸೇರ್ಪಡೆಯಾಗಿ ದೋಸೆ ಹಾಗೂ ಇಡ್ಲಿ ಹಿಟ್ಟು ಮಾರುಕಟ್ಟೆಗೆ ಲಗ್ಗೆಯಿಟ್ಟಿದೆ. ವೇ ಪ್ರೋಟೀನ್ ಆಧಾರಿತ ಉತ್ಕೃಷ್ಟ ಗುಣಮಟ್ಟದ ಹಿಟ್ಟು ಕೈಗೆಟುಕುವ ದರದಲ್ಲಿ ಗ್ರಾಹಕರಿಗೆ ಲಭ್ಯವಿದೆ ಎಂದು ಮುಖ್ಯ ಮಂತ್ರಿಗಳು ತಿಳಿಸಿದರು.

ಈ ಸಂದರ್ಭದಲ್ಲಿ ಸಚಿವರಾದ ವೆಂಕಟೇಶ್, ಕೃಷ್ಣ ಭೈರೇಗೌಡ, ದಿನೇಶ್ ಗುಂಡೂರಾವ್, ಕೆ.ಎಂ.ಎಫ್. ಅಧ್ಯಕ್ಷ ಭೀಮಾನಯಕ್, ವ್ಯವಸ್ಥಾಪಕ ನಿರ್ದೇಶಕ ಶಿವಸ್ವಾಮಿ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.